ವೈಭವ್ ಸೂರ್ಯವಂಶಿ, ರಾಹುಲ್ ದ್ರಾವಿಡ್
(ಎಕ್ಸ್ ವಿಡಿಯೊ ಸ್ಕ್ರೀನ್‌ಶಾಟ್)
ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ 14ರ ಹರೆಯದ ಉದಯೋನ್ಮುಖ ಎಡಗೈ ಆರಂಭಿಕ ಬ್ಯಾಟರ್ ವೈಭವ್ ಸೂರ್ಯವಂಶಿ ಚೊಚ್ಚಲ ಶತಕ ಗಳಿಸಿದಾಗ ರಾಜಸ್ಥಾನ ರಾಯಲ್ಸ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸಂಭ್ರಮಕ್ಕೆ ಪಾರವೇ ಇಲ್ಲ.
ತಮ್ಮ ಗಾಯವನ್ನು ಲೆಕ್ಕಿಸದೇ ಗಾಲಿಕುರ್ಚಿಯಿಂದ ಎದ್ದು ನಿಂತು ಚಪ್ಪಾಳೆ ತಟ್ಟುತ್ತಾ ಸಂಭ್ರಮಾಚರಿಸಿದ್ದಾರೆ.
ಪ್ರಸ್ತುತ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ಕಳೆದ ಮಾರ್ಚ್‌ನಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಡಿವಿಷನ್ ಕ್ರಿಕೆಟ್‌ನಲ್ಲಿ ಆಡುವಾಗ ಬಿದ್ದು ಗಾಯಗೊಂಡಿದ್ದ ದ್ರಾವಿಡ್ ಅವರ ಕಾಲಿನ ಮೂಳೆ ಮುರಿದಿತ್ತು. ಅದರಿಂದಾಗಿ ಐಪಿಎಲ್ ಆರಂಭದಿಂದಲೂ ಗಾಲಿಕುರ್ಚಿಯ ಮೇಲೆ ಕುಳಿತುಕೊಂಡೇ ರಾಯಲ್ಸ್ ತಂಡಕ್ಕೆ ಮಾರ್ಗದರ್ಶನ ನೀಡುತ್ತಿದ್ದಾರೆ.
ಸೋಮವಾರ ಗುಜರಾತ್ ಟೈಟನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ವೈಭವ್ ಕೇವಲ 35 ಎಸೆತಗಳಲ್ಲಿ ಶತಕದ ಸಾಧನೆ ಮಾಡಿದರು. ಆ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಶತಕ ಗಳಿಸಿದ ಅತಿ ಕಿರಿಯ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಅಲ್ಲದೆ ಐಪಿಎಲ್‌ನ ಎರಡನೇ ವೇಗದ ಶತಕ ಗಳಿಸಿದ ಗೌರವಕ್ಕೂ ಭಾಜನರಾಗಿದ್ದಾರೆ.
ರಾಹುಲ್ ದ್ರಾವಿಡ್ ಅವರ ಗರಡಿಯಲ್ಲಿ ವೈಭವ್ ಸೂರ್ಯವಂಶಿ ಪಳಗಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ದ್ರಾವಿಡ್ ಮಾರ್ಗದರ್ಶನದಲ್ಲಿ ಅಭ್ಯಾಸಿಸುತ್ತಿದ್ದಾರೆ.
₹30 ಲಕ್ಷ ಮೂಲಬೆಲೆ ಹೊಂದಿದ್ದ ವೈಭವ್ ಅವರನ್ನು ರಾಜಸ್ಥಾನ ತಂಡವು ₹1.1 ಕೋಟಿ ನೀಡಿ ಖರೀದಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.