
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನ 19ನೇ ಆವೃತ್ತಿಯು ಮಾರ್ಚ್ 26ರಿಂದ ಆರಂಭವಾಗಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸುವ ಕುರಿತು ಚರ್ಚಿಸಲು ಇದೇ 12ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಹತ್ವದ ಸಭೆ ನಡೆಯಲಿದೆ.
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಹಾಗೂ ಆರ್‌ಸಿಬಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಮೆನನ್ ನೇತೃತ್ವದ ನಿಯೋಗವು ಸೋಮವಾರ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರೊಂದಿಗೆ ಮಾತುಕತೆ ನಡೆಸಿತು.
‘ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಗತ್ಯ ಸುರಕ್ಷತೆ ಕೈಗೊಳ್ಳುವ ಕುರಿತಂತೆ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಅವರ ವರದಿಯ ಶಿಫಾರಸು ಪಾಲಿಸಬೇಕು ಅಂತ ನಿಯೋಗಕ್ಕೆ ಹೇಳಿದ್ದೇವೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದ ಸಮಿತಿಯ ಶಿಫಾರಸುಗಳನ್ನು ಪೂರ್ಣಗೊಳಿಸುವುದು ಸೇರಿದಂತೆ ವಿವಿಧ ವಿಚಾರಗಳ ಕುರಿತು ಸಮಾಲೋಚನೆ ನಡೆಸಲಾಯಿತು. ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ಪರಮೇಶ್ವರ್ ಅವರು ತಿಳಿಸಿದ್ದಾರೆ.
‘ಶಿಫಾರಸುಗಳನ್ನು ಅವರು ಎಷ್ಟರ ಮಟ್ಟಿಗೆ ಪೂರೈಸಿದ್ದಾರೆ ಅಂತ ನೋಡಿ ತೀರ್ಮಾನ ಮಾಡುತ್ತೇವೆ. ಬೆಂಗಳೂರಿನಲ್ಲಿ ಪಂದ್ಯ ನಡೆಯಬೇಕು ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ. ಆದರೆ, ಸುರಕ್ಷತೆಯನ್ನೂ ನೋಡಬೇಕು. ಕಾಲ್ತುಳಿತದಂಥ ಘಟನೆಗಳು ಮರುಕಳಿಸಬಾರದು. ಎಲ್ಲವನ್ನೂ ನೋಡಿ ತೀರ್ಮಾನ ಮಾಡುತ್ತೇವೆ’ ಎಂದು ಹೇಳಿದರು.
‘ಇವತ್ತು ಗೃಹ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೇವೆ. ಐಪಿಎಲ್ ವೇಳಾಪಟ್ಟಿ ತಯಾರಿಗಾಗಿ ಆದಷ್ಟೇ ಬೇಗ ತೀರ್ಮಾನ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದೇವೆ. ಎಲ್ಲಾ ಶಿಫಾರಸುಗಳನ್ನು ಕೆಎಸ್‌ಸಿಎಯಿಂದ ಪೂರೈಸುತ್ತೇವೆ. ಆರ್‌ಸಿಬಿ ಅಭಿಮಾನಿಗಳಿಗೆ ಶುಭಸುದ್ದಿ ಸಿಗುವ ನಿರೀಕ್ಷೆಯಿದೆ’ ಎಂದು ವೆಂಕಟೇಶ್ ಪ್ರಸಾದ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.