ADVERTISEMENT

IND vs SL 1st T20I: ಇಶಾನ್, ಶ್ರೇಯಸ್, ರೋಹಿತ್ ಅಬ್ಬರ; ಭಾರತ 199/2

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2022, 15:29 IST
Last Updated 24 ಫೆಬ್ರುವರಿ 2022, 15:29 IST
ಇಶಾನ್ ಕಿಶನ್ ಹಾಗೂ ರೋಹಿತ್ ಶರ್ಮಾ
ಇಶಾನ್ ಕಿಶನ್ ಹಾಗೂ ರೋಹಿತ್ ಶರ್ಮಾ   

ಲಖನೌ: ಇಶಾನ್ ಕಿಶನ್ (89), ಶ್ರೇಯಸ್ ಅಯ್ಯರ್ (57*) ಹಾಗೂ ನಾಯಕ ರೋಹಿತ್ ಶರ್ಮಾ (44) ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ತಂಡವು, ಪ್ರವಾಸಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟ್ವೆಂಟಿ-20 ಪಂದ್ಯದಲ್ಲಿ ನಿಗದಿತ 20 ಓವರ್‌ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 199 ರನ್‌ಗಳ ಬೃಹತ್ ಮೊತ್ತ ಪೇರಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಲ್ಪಟ್ಟ ಭಾರತಕ್ಕೆ ನಾಯಕ ರೋಹಿತ್ ಹಾಗೂ ಇಶಾನ್ ಬಿರುಸಿನ ಆರಂಭವೊದಗಿಸಿದರು.

ಆರಂಭದಿಂದಲೇ ಲಂಕಾ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಈ ಜೋಡಿಯು 11.5 ಓವರ್‌ಗಳಲ್ಲೇ 111 ರನ್‌ಗಳ ಜೊತೆಯಾಟ ಕಟ್ಟಿ ಭದ್ರ ಅಡಿಪಾಯ ಹಾಕಿಕೊಟ್ಟರು. 32 ಎಸೆತಗಳನ್ನು ಎದುರಿಸಿದ ರೋಹಿತ್ ಎರಡು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 44 ರನ್ ಗಳಿಸಿದರು.

ADVERTISEMENT

ಇನ್ನೊಂದೆಡೆ ಲಯ ಕಂಡುಕೊಂಡ ಇಶಾನ್ 30 ಎಸೆತಗಳಲ್ಲಿ ಅರ್ಧಶತಕ ಸಾಧನೆ ಮಾಡಿದರು. ಫಿಫ್ಟಿ ಬಳಿಕವೂ ಬಿರುಸಿನ ಆಟವನ್ನು ಮುಂದುವರಿಸಿದರು. ಆದರೆ ಕೊನೆಯ ಹಂತದಲ್ಲಿ ರನ್ ಗತಿ ಏರಿಸುವ ಭರದಲ್ಲಿ ವಿಕೆಟ್ ಒಪ್ಪಿಸಿ ಶತಕ ವಂಚಿತರಾದರು.

56 ಎಸೆತಗಳನ್ನು ಎದುರಿಸಿದ ಇಶಾನ್ 10 ಬೌಂಡರಿ ಹಾಗೂ ಮೂರು ಸಿಕ್ಸರ್ ನೆರವಿನಿಂದ 89 ರನ್ ಗಳಿಸಿದರು.

ಅಂತಿಮ ಹಂತದಲ್ಲಿ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್ ಕೇವಲ 25 ಎಸೆತಗಳಲ್ಲಿ ಅರ್ಧಶತಕ ಸಾಧನೆ ಮಾಡಿ ತಮ್ಮ ಸಾಮರ್ಥ್ಯವನ್ನು ಸಾಬೀತು ಮಾಡಿದರು. ಈ ಮೂಲಕ ಭಾರತ ಬೃಹತ್ ಮೊತ್ತ ಪೇರಿಸಲು ನೆರವಾದರು.

28 ಎಸೆತಗಳಲ್ಲಿ 57 ರನ್ ಗಳಿಸಿ ಔಟಾಗದೆ ಉಳಿದ ಶ್ರೇಯಸ್ ಇನ್ನಿಂಗ್ಸ್‌ನಲ್ಲಿ ಐದು ಬೌಂಡರಿ ಹಾಗೂ ಎರಡು ಸಿಕ್ಸರ್‌ಗಳು ಸೇರಿದ್ದವು. ಇನ್ನುಳಿದಂತೆ ರವೀಂದ್ರ ಜಡೇಜ 3 ರನ್ ಗಳಿಸಿ ಅಜೇಯರಾಗಿ ಉಳಿದರು.

ಲಂಕಾ ಪರ ನಾಯಕ ದಸುನ್ ಶನಕಾ ಹಾಗೂ ಲಾಹಿರು ಕುಮಾರ ತಲಾ ಒಂದು ವಿಕೆಟನ್ನು ಹಂಚಿಕೊಂಡರು.

ಈ ಪಂದ್ಯದಲ್ಲಿ ಭಾರತ ತಂಡವು ಸಂಜು ಸ್ಯಾಮ್ಸನ್, ದೀಪಕ್ ಹೂಡಾ ಅವರಿಗೆ ಅವಕಾಶವನ್ನು ನೀಡಿದೆ. ಉಪನಾಯಕ ಜಸ್‌ಪ್ರೀತ್ ಬೂಮ್ರಾ ತಂಡಕ್ಕೆ ಮರಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.