ADVERTISEMENT

ಮಹಿಳಾ ವಿಶ್ವಕಪ್‌: ಅತಿ ಹೆಚ್ಚು ವಿಕೆಟ್ ಪಡೆದ ಜೂಲನ್ ಗೋಸ್ವಾಮಿ, ವಿಶ್ವ ದಾಖಲೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಮಾರ್ಚ್ 2022, 9:32 IST
Last Updated 12 ಮಾರ್ಚ್ 2022, 9:32 IST
ಜೂಲನ್ ಗೋಸ್ವಾಮಿ
ಜೂಲನ್ ಗೋಸ್ವಾಮಿ   

ಹ್ಯಾಮಿಲ್ಟನ್: ಭಾರತ ಮಹಿಳಾ ಕ್ರಿಕೆಟ್ ತಂಡದ ವೇಗದ ಬೌಲರ್ ಜೂಲನ್ ಗೋಸ್ವಾಮಿ ಅವರು ವಿಶ್ವಕಪ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ ಗಳಿಸಿದ ದಾಖಲೆಯನ್ನು ನಿರ್ಮಿಸಿದ್ದಾರೆ.

ಮಹಿಳಾ ಏಕದಿನ ವಿಶ್ವಕಪ್‌ನಲ್ಲಿವೆಸ್ಟ್‌ ಇಂಡೀಸ್ ವಿರುದ್ಧ ಇಂದು ನಡೆದ ಪಂದ್ಯದಲ್ಲಿ ಜೂಲನ್ ಗೋಸ್ವಾಮಿ ಒಂದು ವಿಕೆಟ್ ಪಡೆಯುವ ಮೂಲಕ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

ಈ ಪಂದ್ಯದಲ್ಲಿ ಗೋಸ್ವಾಮಿ ಅವರು ಅನಿಸಾ ಮೊಹಮ್ಮದ್ ಅವರನ್ನು ಔಟ್ ಮಾಡಿದರು. ವಿಶ್ವಕಪ್‌ನಲ್ಲಿ ಗೋಸ್ವಾಮಿ ಈವರೆಗೆ 40 ವಿಕೆಟ್‌ಗಳನ್ನು ಪಡೆದಿದ್ದಾರೆ. 39 ವಿಕೆಟ್‌ ಪಡೆದಿದ್ದ ಆಸ್ಟ್ರೇಲಿಯಾದ ಸ್ಪಿನ್ನರ್ ಲಿನ್ ಫುಲ್ಸ್‌ಟನ್ ಅವರ ದಾಖಲೆಯನ್ನು ಮುರಿದಿದ್ದಾರೆ.

ADVERTISEMENT

ಇಂದಿನ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ಭಾರತ 155 ರನ್ ಅಂತರದಿಂದ ಗೆಲುವು ಸಾಧಿಸಿತು.

ಸೆಡನ್ ಪಾರ್ಕ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಸ್ಮೃತಿ ಮಂದಾನ ಹಾಗೂ ಹರ್ಮನ್‌ಪ್ರೀತ್‌ ಕೌರ್‌ ಗಳಿಸಿದ ಅಮೋಘ ಶತಕಗಳ ಬಲದಿಂದ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 317 ರನ್ ಕಲೆಹಾಕಿತ್ತು.

ಈ ಬೃಹತ್‌ ಗುರಿ ಬೆನ್ನತ್ತಿದ ವಿಂಡೀಸ್‌ ತಂಡ 40.3 ಓವರ್‌ಗಳಲ್ಲಿ 162 ರನ್ ಗಳಿಸಿ ಸೋಲು ಅನುಭವಿಸಿತು.

ಈ ಬಾರಿಯ ವಿಶ್ವಕಪ್‌ನಲ್ಲಿ ಜೂಲನ್‌ ಅವರ ಬೌಲಿಂಗ್ ಅದ್ಭುತವಾಗಿದ್ದು, ಆಡಿದ ಮೂರು ಪಂದ್ಯಗಳಲ್ಲಿ ನಾಲ್ಕು ವಿಕೆಟ್ ಪಡೆದಿದ್ದಾರೆ.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.