ಪ್ರಿಟೋರಿಯಾ: ದಕ್ಷಿಣ ಆಫ್ರಿಕಾ ತಂಡದ ವಿಕೆಟ್ ಕೀಪರ್ ಬ್ಯಾಟರ್ ಹೆನ್ರಿಚ್ ಕ್ಲಾಸೆನ್ ಅವರು ಸೋಮವಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ.
ಬಲಗೈ ಬ್ಯಾಟರ್ ಕ್ಲಾಸೆನ್ ಅವರು 2018ರಲ್ಲಿ ದಕ್ಷಿಣ ಆಫ್ರಿಕಾ ತಂಡದ ಪರ ಪದಾರ್ಪಣೆ ಮಾಡಿದ್ದರು.
'ಕುಟುಂಬದ ಜೊತೆಗೆ ಸಮಯ ಕಳೆಯುವ ಉದ್ದೇಶದಿಂದ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದೆ. ಇದೊಂದು ಅತಿ ಕಷ್ಟದ ನಿರ್ಣಯವಾಗಿದ್ದು, ಬಹಳಷ್ಟು ಯೋಚನೆ ಮಾಡಿದ ನಂತರ ಈ ನಿರ್ಧಾರ ಕೈಗೊಂಡಿದ್ದೇನೆ' ಎಂದು ನಿವೃತ್ತಿ ಘೋಷಿಸುವಾಗ ಕ್ಲಾಸೆನ್ ಹೇಳಿದ್ದಾರೆ.
ಸ್ಪೋಟಕ ಬ್ಯಾಟಿಂಗ್ ಮೂಲಕ ಹೆಸರಾಗಿದ್ದ 33 ವರ್ಷದ ಕ್ಲಾಸೆನ್ ಅವರು ಏಕದಿನ ಕ್ರಿಕೆಟ್‌ನಲ್ಲಿ 60 ಪಂದ್ಯಗಳಿಂದ 2,141 ರನ್ ಹಾಗೂ 58 ಅಂತರರಾಷ್ಟ್ರೀಯ ಟಿ-20 ಪಂದ್ಯಗಳಲ್ಲಿ 141.8 ಸ್ರ್ಟೈಕ್ ರೇಟ್‌ನಲ್ಲಿ ಸಾವಿರ ರನ್ ಗಳಿಸಿದ್ದಾರೆ.
ಕ್ಲಾಸೆನ್ ಅವರು ಅಂತರರಾಷ್ಟ್ರೀಯ ಟಿ-20 ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮುನ್ನಡೆಸಿದ್ದರು. ನ್ಯೂಜಿಲೆಂಡ್ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಕೊನೆಯ ಬಾರಿ ಏಕದಿನ ಕ್ರಿಕೆಟ್‌ನಲ್ಲಿ ಕಾಣಿಸಿಕೊಂಡಿದ್ದರು.
ಐಪಿಎಲ್‌ನ 18ನೇ ಆವೃತ್ತಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪರ ಆಡಿದ್ದ ಕ್ಲಾಸೆನ್, ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಕೇವಲ 37 ಎಸೆತಗಳಲ್ಲಿ ಶತಕ ಬಾರಿಸಿದ್ದರು.
2024ರಲ್ಲೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದ ಕ್ಲಾಸೆನ್, ಇದೀಗ ಎಲ್ಲಾ ಮಾದರಿಯ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದರೂ, ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಆಡುವ ಸಾಧ್ಯತೆಯಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.