ADVERTISEMENT

ಕೆಪಿಎಲ್‌ ಬೆಟ್ಟಿಂಗ್‌: ನಿರೀಕ್ಷಣಾ ಜಾಮೀನು ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2019, 18:45 IST
Last Updated 26 ನವೆಂಬರ್ 2019, 18:45 IST

ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್‌ ಕ್ರಿಕೆಟ್ ಟೂರ್ನಿಯಲ್ಲಿ (ಕೆಪಿಎಲ್) ಮ್ಯಾಚ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ನಡೆಸಿದ ಆರೋಪಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಬೆಳಗಾವಿ ಪ್ಯಾಂಥರ್ಸ್‌ ತಂಡದ ಮಾಲೀಕ, ಅಲಿ ಅಶ್ಫಾಕ್‌ಗೆ ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.

ಕಬ್ಬನ್‌ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೂರನೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ಫಾಕ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ವಕೀಲ ಹೊನ್ನಪ್ಪ, ‘ಅರ್ಜಿದಾರರು ಕೆಪಿಎಲ್‌ ತಂಡವೊಂದರ ಮಾಲೀಕರು. ಅವರ ಸೂಚನೆಯಂತೆಯೇ ಬೆಟ್ಟಿಂಗ್ ನಡೆದಿದೆ ಎಂಬ ಅಂಶ ಉಳಿದ ಆರೋಪಿಗಳ ವಿಚಾರಣೆ ವೇಳೆ ತಿಳಿದು ಬಂದಿದೆ. ಆದ್ದರಿಂದ, ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಅಗತ್ಯವಿದೆ’ ಎಂದರು.

ADVERTISEMENT

ಈ ಅಂಶವನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಪ್ರಕರಣದ ತನಿಖೆ ಇನ್ನೂ ಪ್ರಗತಿಯಲ್ಲಿದೆ. ಈ ಹಂತದಲ್ಲಿ ನಿರೀಕ್ಷಣಾ ಜಾಮೀನು ನೀಡಲು ಸಾಧ್ಯವಿಲ್ಲ’ ಎಂದು ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.