ಬಾಂಬ್ ಬೆದರಿಕೆ
(ಸಾಂದರ್ಭಿಕ ಚಿತ್ರ)
ಜೈಪುರ: ಪಾಕಿಸ್ತಾನದ ಮೇಲೆ ಭಾರತೀಯ ಸಶಸ್ತ್ರ ಪಡೆ ನಡೆಸಿರುವ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಬೆನ್ನಲ್ಲೇ ಕೋಲ್ಕತ್ತದ ಪ್ರಸಿದ್ಧ ಈಡನ್ ಗಾರ್ಡನ್ಸ್ ಹಾಗೂ ಜೈಪುರದ ಸವಾಯಿ ಮಾನ್ ಸಿಂಗ್ ಸ್ಟೇಡಿಯಂಗಳಿಗೆ ಬಾಂಬ್ ಬೆದರಿಕೆ ಬಂದಿವೆ ಎಂದು ಅಧಿಕಾರಿಗಳು ಇಂದು (ಗುರುವಾರ) ತಿಳಿಸಿದ್ದಾರೆ.
ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮೇ 16ರಂದು ಪಂಜಾಬ್ ಕಿಂಗ್ಸ್ ವಿರುದ್ದ ನಡೆಯಲಿರುವ ಅಂತಿಮ ಐಪಿಎಲ್ ಪಂದ್ಯಕ್ಕೂ ಮುನ್ನ ಕ್ರೀಡಾಂಗಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಇ-ಮೇಲ್ ಬಂದಿದೆ ಎಂದು ರಾಜಸ್ಥಾನ ಕ್ರೀಡಾ ಮಂಡಳಿ ಅಧ್ಯಕ್ಷ ನೀರಜ್ ಕೆ. ಪವನ್ ತಿಳಿಸಿದ್ದಾರೆ.
ಆಪರೇಷನ್ ಸಿಂಧೂರಕ್ಕೆ ಪ್ರತಿಯಾಗಿ ಬಾಂಬ್ ದಾಳಿ ನಡೆಸುವುದಾಗಿ ಹೇಳಲಾಗಿದೆ. ತಕ್ಷಣವೇ ಸ್ಟೇಡಿಯಂನಲ್ಲಿ ಬಾಂಬ್ ನಿಷ್ಕ್ರಿಯ ದಳ ಸೇರಿದಂತೆ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ.
ಇದಕ್ಕೂ ಮೊದಲು ಈಡನ್ ಗಾರ್ಡನ್ಸ್ ಮೈದಾನಕ್ಕೂ ಬಾಂಬ್ ಬೆದರಿಕೆ ಬಂದಿತ್ತು. ಬಂಗಾಳ ಕ್ರಿಕೆಟ್ ಸಂಸ್ಥೆಗೆ (ಸಿಎಬಿ) ಮೇಲ್ ಕಳುಹಿಸಲಾಗಿತ್ತು. ಇದರಿಂದಾಗಿ ಬುಧವಾರ ಕೋಲ್ಕತ್ತ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯಕ್ಕೆ ಆತಂಕ ಎದುರಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.