ನವದೆಹಲಿ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹಾಗೂ ಬಿಜೆಪಿ ಮಾಜಿ ಸಂಸದ ಗೌತಮ್ ಗಂಭೀರ್ ಅವರಿಗೆ 'ಐಎಸ್‌ಐಸ್ ಕಾಶ್ಮೀರ್'ನಿಂದ ಕೊಲೆ ಬೆದರಿಕೆ ಸಂದೇಶ ಬಂದಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ನಡೆದ ದಿನವೇ ಗಂಭೀರ್‌ಗೆ ಬೆದರಿಕೆ ಬಂದಿರುವುದು ಆತಂಕ ಹೆಚ್ಚಿಸಿದೆ.
ಬೆದರಿಕೆ ಸಂಬಂಧ ದೆಹಲಿ ಪೊಲೀಸರಿಗೆ ದೂರು ನೀಡಿರುವ ಗಂಭೀರ್, ತಮ್ಮ ಕುಟುಂಬಕ್ಕೆ ಭದ್ರತೆ ಒದಗಿಸುವಂತೆ ಕೋರಿದ್ದಾರೆ ಎಂದು ಅವರ ಕಚೇರಿ ಮೂಲಗಳು ತಿಳಿಸಿವೆ.
'ಬಿಜೆಪಿಯ ಮಾಜಿ ಸಂಸದ ಮತ್ತು ಸದ್ಯ ಭಾರತ ಕ್ರಿಕೆಟ್ ತಂಡದ ಕೋಚ್ ಆಗಿರುವ ಗೌತಮ್ ಗಂಭೀರ್ ಅವರಿಗೆ ಐಎಸ್‌ಐಎಸ್ ಕಾಶ್ಮೀರ್ ಕೊಲೆ ಬೆದರಿಕೆ ಒಡ್ಡಿದೆ. ಅವರು, ಎಫ್‌ಐಆರ್ ದಾಖಲಿಸಿಕೊಳ್ಳುವಂತೆ ಮತ್ತು ತಮ್ಮ ಕುಟುಂಬದ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಕೋರಿ ದೆಹಲಿ ಪೊಲೀಸರಿಗೆ ಬುಧವಾರ ದೂರು ನೀಡಿದ್ದಾರೆ' ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಂಭೀರ್ ಅವರಿಗೆ ಒಟ್ಟು ಎರಡು ಇ–ಮೇಲ್‌ಗಳನ್ನು ಕಳುಹಿಸಲಾಗಿದೆ.
ಗಂಭೀರ್‌ಗೆ ಬೆದರಿಕೆ ಸಂದೇಶ ಕಳುಹಿಸಿರುವುದು ಇದೇ ಮೊದಲಲ್ಲ. 2021ರ ನವೆಂಬರ್‌ನಲ್ಲಿಯೂ ಇಂಥದೇ ಸಂದೇಶ ಕಳುಹಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.