ADVERTISEMENT

ಅದ್ಭುತ ಪ್ರದರ್ಶನ: ವಿಶ್ವಕಪ್ ಗೆದ್ದ ಭಾರತದ ಅಂಡರ್‌–19 ತಂಡಕ್ಕೆ ಮೋದಿ ಅಭಿನಂದನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಫೆಬ್ರುವರಿ 2022, 4:27 IST
Last Updated 6 ಫೆಬ್ರುವರಿ 2022, 4:27 IST
ವಿಶ್ವಕಪ್‌ ಗೆದ್ದು ಸಂಭ್ರಮಿಸಿದ ಭಾರತ ಕ್ರಿಕೆಟ್‌ ತಂಡದ ಆಟಗಾರರು (ಬಿಸಿಸಿಐ ಟ್ವಿಟರ್ ಚಿತ್ರ)
ವಿಶ್ವಕಪ್‌ ಗೆದ್ದು ಸಂಭ್ರಮಿಸಿದ ಭಾರತ ಕ್ರಿಕೆಟ್‌ ತಂಡದ ಆಟಗಾರರು (ಬಿಸಿಸಿಐ ಟ್ವಿಟರ್ ಚಿತ್ರ)   

ನವದೆಹಲಿ: 19 ವರ್ಷದೊಳಗಿನವರ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಟ್ರೋಫಿ ಗೆದ್ದ ಭಾರತ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

‘ನಮ್ಮ ಯುವ ಕ್ರಿಕೆಟಿಗರ ಬಗ್ಗೆ ಅಪಾರ ಹೆಮ್ಮೆ ಇದೆ. ಐಸಿಸಿ ಅಂಡರ್‌ –19 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳು. ಉತ್ತಮ ಪ್ರದರ್ಶನ ತೋರುವ ಮೂಲಕ ಭಾರತೀಯ ಕ್ರಿಕೆಟ್‌ ಭವಿಷ್ಯವು ಸುರಕ್ಷಿತ ಮತ್ತು ಸಮರ್ಥವಾಗಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ’ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಆ್ಯಂಟಿಗುವಾದ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ರಾಜ್ ಬಾವಾ (31ಕ್ಕೆ5)ಮತ್ತು ರವಿಕುಮಾರ್‌ (34ಕ್ಕೆ4) ಮಾರಕ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ತಂಡ 44.5 ಓವರ್‌ಗಳಲ್ಲಿ 189 ರನ್‌ಗಳಿಗೆ ಆಲೌಟ್ ಆಯಿತ್ತು. ಆದರೆ, ಮಧ್ಯಮ ಕ್ರಮಾಂಕದ ಬ್ಯಾಟರ್ ಜೇಮ್ಸ್ ರಿವ್ (95) ಮತ್ತು ಜೇಮ್ಸ್ ಸೇಲ್ಸ್‌ (ಔಟಾಗದೆ 34) ಅವರು ಇಂಗ್ಲೆಂಡ್‌ಗೆ ಆಸರೆಯಾದರು.

ADVERTISEMENT

190 ರನ್‌ ಗುರಿ ಬೆನ್ನತ್ತಿದ ಭಾರತ ತಂಡ 47.4 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 195 ರನ್ ಗಳಿಸಿತು. ಆ ಮೂಲಕ ಭಾರತ ಐದನೇ ಬಾರಿಗೆ ಅಂಡರ್ –19 ವಿಶ್ವಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡ ವಿಶೇಷ ಸಾಧನೆ ಮಾಡಿತು.

ಈ ಪಂದ್ಯದಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ತೋರಿದ ರಾಜ್ ಬಾವ ಪಂದ್ಯಶ್ರೇಷ್ಠ ಪ್ರಶಸ್ತಿ ಭಾಜನರಾದರೆ, ಟೂರ್ನಿಯುದ್ದಕ್ಕೂ ಭರ್ಜರಿ ಆಟವಾಡಿದ ದಕ್ಷಿಣ ಆಫ್ರಿಕಾದ ಬ್ಯಾಟರ್ ಡೆವಾಲ್ಡ್ ಬ್ರೇವಿಸ್ ಸರಣಿ ಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.