ADVERTISEMENT

ಭಾರತ ಕ್ರಿಕೆಟ್ ತಂಡದ ಹೆಡ್ ಕೋಚ್ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ ರಾಹುಲ್ ದ್ರಾವಿಡ್

ಪಿಟಿಐ
Published 26 ಅಕ್ಟೋಬರ್ 2021, 12:21 IST
Last Updated 26 ಅಕ್ಟೋಬರ್ 2021, 12:21 IST
ರಾಹುಲ್ ದ್ರಾವಿಡ್
ರಾಹುಲ್ ದ್ರಾವಿಡ್   

ಮುಂಬೈ: ಭಾರತ ಕ್ರಿಕೆಟ್ ತಂಡದ ಹೆಡ್ ಕೋಚ್ ಆಗಿ ಕನ್ನಡಿಗ, ಕ್ರಿಕೆಟ್ ದಂತಕಥೆ ರಾಹುಲ್ ದ್ರಾವಿಡ್ ಆಯ್ಕೆ ಬಹುತೇಕ ಖಚಿತಗೊಂಡಿದೆ. ಹೆಡ್ ಕೋಚ್ ಸ್ಥಾನಕ್ಕಾಗಿ ರಾಹುಲ್ ದ್ರಾವಿಡ್ ಬಿಸಿಸಿಐಗೆ ಅರ್ಜಿ ಸಲ್ಲಿಸಿದ್ದಾರೆ.

ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿರುವ ರಾಹುಲ್ ದ್ರಾವಿಡ್, ಭಾರತ ಕ್ರಿಕೆಟ್ ತಂಡದ ಹೆಡ್ ಕೋಚ್ ಸ್ಥಾನಕ್ಕೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್ ಶಾ ಅವರ ಏಕೈಕ ಆಯ್ಕೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘ಹೌದು, ಅರ್ಜಿ ಸಲ್ಲಿಸಲು ಕೊನೆಯ ದಿನವಾದ ಇಂದು ರಾಹುಲ್ ಔಪಚಾರಿಕವಾಗಿ ಹೆಡ್ ಕೋಚ್ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಎನ್‌ಸಿಎಯ ಬೌಲಿಂಗ್ ಕೋಚ್ ಪಾರಸ್ ಮತ್ತು ಫೀಲ್ಡಿಂಗ್ ಕೋಚ್ ಅಭಯ್ ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಅವರ ಅರ್ಜಿ ಕೇವಲ ಔಪಚಾರಿಕವಾಗಿದೆ’ಎಂದು ಬಿಸಿಸಿಐನ ಹಿರಿಯ ಅಧಿಕಾರಿ ಮಂಗಳವಾರ ಪಿಟಿಐಗೆ ತಿಳಿಸಿದರು.

ADVERTISEMENT

ದುಬೈನಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್ ಫೈನಲ್‌ ಪಂದ್ಯದ ಸಂದರ್ಭ ದ್ರಾವಿಡ್ ಬಿಸಿಸಿಐ ಪ್ರಮುಖರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಟಿ–20 ವಿಶ್ವಕಪ್‌ ಮುಗಿದ ಬಳಿಕ ಹಾಲಿ ಹೆಡ್ ಕೋಚ್ ರವಿಶಾಸ್ತ್ರೀ ಅವರ ಅವಧಿ ಕೊನೆಗೊಳ್ಳಲಿದ್ದು, ಆ ಸ್ಥಾನ ತುಂಬುವಂತೆ ಸೌರವ್ ಗಂಗೂಲಿ ಮತ್ತು ಜಯ್ ಶಾ ಅವರು ರಾಹುಲ್ ದ್ರಾವಿಡ್ ಅವರ ಮನವೊಲಿಸಿದ್ದಾರೆ’ ಎಂದು ತಿಳಿದು ಬಂದಿದೆ.

ದ್ರಾವಿಡ್ ಕೋಚಿಂಗ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ತವರು ಸರಣಿಯೊಂದಿಗೆ ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ಯುಗ ಪ್ರಾರಂಭವಾಗಲಿದೆ.

ರಾಹುಲ್ ದ್ರಾವಿಡ್ ಅವರು ಭಾರತ ತಂಡದ ಹೆಡ್ ಕೋಚ್ ಆದ ಬಳಿಕ ವಿವಿಎಸ್ ಲಕ್ಷ್ಮಣ್ ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಚುಕ್ಕಾಣಿ ಹಿಡಿಯುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.