ADVERTISEMENT

ಐಸಿಸಿ ಟೆಸ್ಟ್‌ ರ‍್ಯಾಂಕಿಂಗ್‌: ಅಗ್ರಸ್ಥಾನ ಬಿಟ್ಟುಕೊಡದ ಅಶ್ವಿನ್

ಪಿಟಿಐ
Published 21 ಜೂನ್ 2023, 18:41 IST
Last Updated 21 ಜೂನ್ 2023, 18:41 IST
   

ದುಬೈ (ಪಿಟಿಐ): ಭಾರತದ ಆಫ್‌ಸ್ಪಿನ್ನರ್ ರವಿಚಂದ್ರನ್  ಅಶ್ವಿನ್ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಟೆಸ್ಟ್ ಬೌಲರ್‌ಗಳ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.

ಬ್ಯಾಟಿಂಗ್ ವಿಭಾಗದಲ್ಲಿ ಇಂಗ್ಲೆಂಡ್ ತಂಡದ ಜೋ ರೂಟ್ ಅವರು ಆಸ್ಟ್ರೇಲಿಯಾದ ಮಾರ್ನಸ್ ಲಾಬುಷೇನ್ ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ. ಬುಧವಾರ ಐಸಿಸಿಯು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಒಟ್ಟು 860 ಅಂಕಗಳನ್ನು ಹೊಂದಿರುವ ಅಶ್ವಿನ್ ತಮ್ಮ ಸ್ಥಾನ ಉಳಿಸಿಕೊಂಡಿದ್ದಾರೆ.

ಈಚೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ ಫೈನಲ್‌ನಲ್ಲಿ ಆಡಿದ್ದ ಭಾರತ ತಂಡದ ಹನ್ನೊಂದರ ಬಳಗಕ್ಕೆ ಆಶ್ವಿನ್ ಆಯ್ಕೆಯಾಗಿರಲಿಲ್ಲ. ಆದರೂ ಅಗ್ರಸ್ಥಾನ ಕಾಪಾಡಿಕೊಂಡಿದ್ದಾರೆ. ಇಂಗ್ಲೆಂಡ್ ತಂಡದ ವೇಗಿ ಜೇಮ್ಸ್ ಆ್ಯಂಡರ್ಸನ್ 829 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ADVERTISEMENT

ಭಾರತದ ಜಸ್‌ಪ್ರೀತ್ ಬೂಮ್ರಾ (772) ಮತ್ತು ರವೀಂದ್ರ ಜಡೇಜ (765) ಕ್ರಮವಾಗಿ ಎಂಟು ಹಾಗೂ ಒಂಬತ್ತನೇ ಸ್ಥಾನಗಳಲ್ಲಿದ್ದಾರೆ. ದಕ್ಷಿಣ ಆಫ್ರಿಕಾ ವೇಗಿ ಕಗಿಸೊ ರಬಾಡ (825) ಅವರು ಆಸ್ಟ್ರೇಲಿಯಾ ನಾಯಕ ಪ್ಯಾಟ್‌ ಕಮಿನ್ಸ್ (824) ಅವರನ್ನು ಹಿಂದಿಕ್ಕಿದ್ದಾರೆ.

ಬ್ಯಾಟಿಂಗ್ ವಿಭಾಗದಲ್ಲಿ ಭಾರತದ ವಿರಾಟ್ ಕೊಹ್ಲಿ 14ನೇ ಸ್ಥಾನದಲ್ಲಿದ್ದಾರೆ. ಒಂದು ಸ್ಥಾನ ಕಳೆದುಕೊಂಡಿದ್ದಾರೆ. ರೋಹಿತ್ ಶರ್ಮಾ 12ನೇ, ಚೇತೇಶ್ವರ್ ಪೂಜಾರ 25ನೇ ಸ್ಥಾನದಲ್ಲಿದ್ದಾರೆ. ಅಜಿಂಕ್ಯ ರಹಾನೆ ಮತ್ತು ಶ್ರೇಯಸ್ ಅಯ್ಯರ್ ಕ್ರಮವಾಗಿ 36 ಹಾಗೂ 37ನೇ ಸ್ಥಾನಕ್ಕೆ ಬಡ್ತಿ ಪಡೆದುಕೊಂಡಿದ್ದಾರೆ.

ಆ್ಯಷಸ್ ಸರಣಿಯ ಮೊದಲ ಟೆಸ್ಟ್‌ನಲ್ಲಿ ಶತಕ ಗಳಿಸಿದ್ದ ಜೋ ರೂಟ್ ಅಗ್ರಸ್ಥಾನಕ್ಕೇರಿದ್ದಾರೆ. ಅವರು ಐದು ಸ್ಥಾನಗಳ ಬಡ್ತಿ ಗಳಿಸಿದರು. ಲಾಬುಷೇನ್ ಮೂರನೇ ಸ್ಥಾನಕ್ಕಿಳಿದಿದ್ದಾರೆ. ನ್ಯೂಜಿಲೆಂಡ್ ತಂಡದ ಕೇನ್ ವಿಲಿ ಯಮ್ಸನ್ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ.

ಆಲ್‌ರೌಂಡರ್‌ಗಳ ವಿಭಾಗದಲ್ಲಿ ರವೀಂದ್ರ ಜಡೇಜ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.  ಅಶ್ವಿನ್ ಎರಡನೇ ಸ್ಥಾನದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.