ಆರ್‌ಸಿಬಿ ಬೌಲರ್ ಯಶ್ ದಯಾಳ್ ಸಂಭ್ರಮ
ಜೈಪುರ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಐಪಿಎಲ್‌ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿ ಯಶ್ ದಯಾಳ್ ವಿರುದ್ಧ ರಾಜಸ್ಥಾನದ ಜೈಪುರದಲ್ಲಿ ಎಫ್‌ಐಆರ್ ದಾಖಲಾಗಿದೆ.
ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ದಯಾಳ್ ವಿರುದ್ಧ ದಾಖಲಾದ 2ನೇ ಎಫ್‌ಐಆರ್ ಇದಾಗಿದೆ. ಮದುವೆಯಾಗುವುದಾಗಿ ನಂಬಿಸಿ 5 ವರ್ಷ ಸಹಜೀವನ ನಡೆಸಿದ ಬಳಿಕ ದಯಾಳ್ ಮೋಸ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಮಹಿಳೆ ದಾಖಲಿಸಿರುವ ಪ್ರಕರಣದಲ್ಲಿ ದಯಾಳ್ ಬಂಧನಕ್ಕೆ ಹೈಕೋರ್ಟ್ ತಡೆ ನೀಡಿದೆ.
ಯಶ್ ದಯಾಳ್ ವಿರುದ್ಧ ಬುಧವಾರ ಎಫ್‌ಐಆರ್ ದಾಖಲಾಗಿದೆ ಎಂದು ಜೈಪುರದ ಸಂಗನೇರ್ ಸರ್ಕಾರ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಅನಿಲ್ ಜೈಮಾನ್ ತಿಳಿಸಿದ್ದಾರೆ.
'ಬಾಲಕಿ ಮೇಲೆ ಅತ್ಯಾಚಾರ ಆರೋಪದಡಿ ಯಶ್ ದಯಾಳ್ ವಿರುದ್ಧ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ ಮತ್ತು ಬಿಎನ್ಎಸ್‌ನ (ಭಾರತೀಯ ನ್ಯಾಯ ಸಂಹಿತಾ) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ’ಎಂದು ಅವರು ಹೇಳಿದ್ದಾರೆ.
ದೂರು ನೀಡಿರುವ ಸಂತ್ರಸ್ತೆ ಕ್ರಿಕೆಟ್ ಆಟಗಾರ್ತಿಯಾಗಿದ್ದು, 2023ರಲ್ಲಿ ನಾನು 17 ವರ್ಷದವಳಾಗಿದ್ದಾಗ ನನ್ನ ಮೇಲೆ ಅತ್ಯಾಚಾರ ಎಸಗಿದ್ದರು. ಈ ವರ್ಷದ ಏಪ್ರಿಲ್‌ನಲ್ಲಿ ಸೀತಾಪುರ ಪ್ರದೇಶದ ಹೋಟೆಲ್‌ನಲ್ಲಿ ಮತ್ತೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.
‘ನನ್ನ ಕ್ರಿಕೆಟ್ ವೃತ್ತಿಜೀವನಕ್ಕೆ ಸಹಾಯ ಮಾಡುವುದಾಗಿ ದಯಾಳ್ ಭರವಸೆ ನೀಡಿದ್ದರು. ಈ ವರ್ಷದ ಏಪ್ರಿಲ್‌ನಲ್ಲಿ ಐಪಿಎಲ್ ಪಂದ್ಯಕ್ಕಾಗಿ ಜೈಪುರಕ್ಕೆ ಬಂದಿದ್ದಾಗ ಮತ್ತೆ ನನ್ನನ್ನು ಹೋಟೆಲ್‌ಗೆ ಕರೆಸಿಕೊಂಡು ಅತ್ಯಾಚಾರ ಮಾಡಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ’ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ತಮ್ಮ ಮೇಲಿನ ಎರಡೂ ಅತ್ಯಾಚಾರ ಪ್ರಕರಣಗಳ ಬಗ್ಗೆ ದಯಾಳ್ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
2018ರಲ್ಲಿ ಉತ್ತರ ಪ್ರದೇಶ ಪರ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಯಶ್ ದಯಾಳ್, 27 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, 84 ವಿಕೆಟ್‌ಗಳನ್ನು ಕಬಳಿಸಿದ್ದಾರೆ. 2024ರಿಂದ ಐಪಿಎಲ್‌ನ ಆರ್‌ಸಿಬಿ ತಂಡದಲ್ಲಿ ಆಡುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.