ADVERTISEMENT

ಬಾಂಗ್ಲಾ ವಿರುದ್ಧದ ಏಕದಿನ ಸರಣಿ: ಮೊಹಮ್ಮದ್ ಶಮಿಗೆ ಗಾಯ, ಉಮ್ರಾನ್‌ಗೆ ಸ್ಥಾನ

ಪಿಟಿಐ
Published 3 ಡಿಸೆಂಬರ್ 2022, 5:53 IST
Last Updated 3 ಡಿಸೆಂಬರ್ 2022, 5:53 IST
   

ನವದೆಹಲಿ: ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರು ಭುಜದ ಗಾಯಕ್ಕೆ ಒಳಗಾಗಿದ್ದು, ನಾಳೆಯಿಂದ ಆರಂಭವಾಗುವ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಶಮಿ ಬದಲಿಗೆ ಉಮ್ರಾನ್ ಮಲಿಕ್ ಅವರಿಗೆ ಅವಕಾಶ ನೀಡಲಾಗಿದೆ ಎಂದು ಬಿಸಿಸಿಐ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ.

ತರಬೇತಿ ವೇಳೆ ಶಮಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಡಿಸೆಂಬರ್ 14ರಿಂದ ಚಿತ್ತಗಾಂಗ್‌ನಲ್ಲಿ ಪ್ರಾರಂಭವಾಗುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೂ ಶಮಿ ಅಲಭ್ಯರಾಗಬಹುದು ಎಂದು ಮೂಲಗಳು ಹೇಳಿವೆ.

‘ವೇಗದ ಬೌಲರ್ ಮೊಹಮ್ಮದ್ ಶಮಿ ಅವರು ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯ ಮುನ್ನಾದಿನದ ತರಬೇತಿ ಅವಧಿಯಲ್ಲಿ ಭುಜದ ಗಾಯಕ್ಕೆ ಒಳಗಾಗಿದ್ದಾರೆ. ಅವರು ಪ್ರಸ್ತುತ ಬೆಂಗಳೂರಿನ ಎನ್‌ಸಿಎಯಲ್ಲಿ ಬಿಸಿಸಿಐ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದಾರೆ. ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಅವರು ಆಡಲು ಸಾಧ್ಯವಿಲ್ಲ. ಆಯ್ಕೆ ಸಮಿತಿಯು ಶಮಿ ಅವರ ಸ್ಥಾನಕ್ಕೆ ಉಮ್ರಾನ್ ಮಲಿಕ್ ಅವರನ್ನು ಆಯ್ಕೆ ಮಾಡಿದೆ’ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಉಮ್ರಾನ್ ಮಲಿಕ್ ಮತ್ತು ಕುಲದೀಪ್ ಸೇನ್ ವೇಗದ ಬೌಲಿಂಗ್ ದಾಳಿ ಸಂಘಟಿಸಲಿದ್ದಾರೆ.

ಮುಂದಿನ ವರ್ಷ ಜೂನ್‌ ತಿಂಗಳಲ್ಲಿ ಓವಲ್‌ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯ ನಡೆಯಲಿದ್ದು, ಸ್ಪರ್ಧೆಯಲ್ಲಿ ಉಳಿಯಲು ಭಾರತವು ಪ್ರತಿಯೊಂದು ಪಂದ್ಯವನ್ನು ಗೆಲ್ಲಬೇಕಾಗಿದೆ. ಹಾಗಾಗಿ, ಟೆಸ್ಟ್ ಸರಣಿಗೂ ಶಮಿ ಅಲಭ್ಯರಾದರೆ ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಚಿಂತೆ ಹೆಚ್ಚಾಗಲಿದೆ.

ಇತ್ತೀಚೆಗೆ ನ್ಯೂಜಿಲೆಂಡ್‌ ವಿರುದ್ಧದ ಪಂದ್ಯದಲ್ಲಿ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿರುವ ಉಮ್ರಾನ್ ಮಲಿಕ್, ಎರಡು ಪಂದ್ಯಗಳಲ್ಲಿ ಎರಡು ವಿಕೆಟ್‌ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.