ಸ್ಮೃತಿ ಮಂದಾನ
(ಪಿಟಿಐ ಚಿತ್ರ)
ವಿಶಾಖಪಟ್ಟಣ: ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ವಿಶಾಖಪಟ್ಟಣದಲ್ಲಿ ನಡೆದ ಹೈ ಸ್ಕೋರಿಂಗ್ ಪಂದ್ಯದಲ್ಲಿ ಭಾರತ ಮೂರು ವಿಕೆಟ್ ಅಂತರದ ಸೋಲಿಗೆ ಶರಣಾಗಿದೆ.
ಈ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಗಳಿಸಿರುವ ಭಾರತದ ಆರಂಭಿಕ ಬ್ಯಾಟರ್ ಸ್ಮೃತಿ ಮಂದಾನ ಹಲವು ದಾಖಲೆಗಳನ್ನು ಬರೆದಿದ್ದಾರೆ.
ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಕ್ಯಾಲೆಂಡರ್ ವರ್ಷವೊಂದರಲ್ಲಿ 1,000 ಅಥವಾ ಅದಕ್ಕಿಂತಲೂ ಹೆಚ್ಚು ರನ್ ಗಳಿಸಿದ ಮೊದಲ ಆಟಗಾರ್ತಿ ಎಂಬ ದಾಖಲೆಗೆ ಭಾಜನರಾಗಿದ್ದಾರೆ.
29 ವರ್ಷದ ಮಂದಾನ, ಇದೇ ಪಂದ್ಯದಲ್ಲಿ ಏಕದಿನ ಕ್ರಿಕೆಟ್‌ನಲ್ಲಿ 5 ಸಾವಿರ ರನ್‌ಗಳ ಮೈಲಿಗಲ್ಲು ತಲುಪಿದ್ದಾರೆ.
ಮಾಜಿ ಆಟಗಾರ್ತಿ ಮಿಥಾಲಿ ರಾಜ್ ಬಳಿಕ ಈ ಸಾಧನೆ ಮಾಡಿದ ಎರಡನೇ ಭಾರತೀಯ ಬ್ಯಾಟರ್ ಎನಿಸಿದ್ದಾರೆ. ಹಾಗೆಯೇ ಒಟ್ಟಾರೆಯಾಗಿ ವಿಶ್ವದ ಐದನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ.
112 ಇನಿಂಗ್ಸ್ ಹಾಗೂ 5,569 ಎಸೆತಗಳಲ್ಲಿ 5,000 ರನ್ ಗಳಿಸಿರುವ ಮಂದಾನ, ಅತ್ಯಂತ ವೇಗವಾಗಿ ಈ ಸಾಧನೆ ಮಾಡಿದ ಹಾಗೂ ಅತ್ಯಂತ ಕಿರಿಯ ಆಟಗಾರ್ತಿ ಎನಿಸಿದ್ದಾರೆ.
ಪ್ರತೀಕಾ ರಾವಲ್ ಜೊತೆ ಶತಕದ ಜೊತೆಯಾಟದಲ್ಲಿ ಭಾಗಿಯಾಗಿದ್ದ, ಮಂದಾನ, 66 ಎಸೆತಗಳಲ್ಲಿ ಒಂಬತ್ತು ಬೌಂಡರಿ ಹಾಗೂ ಮೂರು ಸಿಕ್ಸರ್ ನೆರವಿನಿಂದ 80 ರನ್ ಗಳಿಸಿದ್ದರು.
ಭಾರತ ಒಡ್ಡಿದ 331 ರನ್ ಗೆಲುವಿನ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ, ನಾಯಕಿ ಅಲಿಸಾ ಹೀಲಿ ಅವರ ಭರ್ಜರಿ ಶತಕದ (142) ನೆರವಿನಿಂದ 49 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ ಗುರಿ ತಲುಪಿತ್ತು. ಇದು ಮಹಿಳಾ ಕ್ರಿಕೆಟ್‌ನಲ್ಲಿ ತಂಡವೊಂದರ ಯಶಸ್ವಿ ಗರಿಷ್ಠ ರನ್ ಚೇಸ್ ಆಗಿದೆ.
ಮತ್ತೊಂದೆಡೆ ಟೂರ್ನಿಯಲ್ಲಿ ಭಾರತ ಸತತ ಎರಡನೇ ಸೋಲಿನ ಮುಖಭಂಗಕ್ಕೊಳಗಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.