ADVERTISEMENT

Champions Trophy History | ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ದಾಖಲೆಯ ಅಂಕಿಅಂಶ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಫೆಬ್ರುವರಿ 2025, 10:56 IST
Last Updated 18 ಫೆಬ್ರುವರಿ 2025, 10:56 IST
<div class="paragraphs"><p>ಚಾಂಪಿಯನ್ಸ್ ಟ್ರೋಫಿ</p></div>

ಚಾಂಪಿಯನ್ಸ್ ಟ್ರೋಫಿ

   

ಬೆಂಗಳೂರು: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಆಯೋಜಿಸುವ ಪ್ರತಿಷ್ಠಿತ ಟೂರ್ನಿಗಳಲ್ಲಿ ಚಾಂಪಿಯನ್ಸ್ ಟ್ರೋಫಿ ಒಂದಾಗಿದೆ. ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯ ಆತಿಥ್ಯವನ್ನು ಪಾಕಿಸ್ತಾನ ವಹಿಸಿದೆ. ಪಾಕಿಸ್ತಾನ ಹಾಗೂ ದುಬೈನಲ್ಲಿ ಪಂದ್ಯಗಳು ನಡೆಯಲಿವೆ.

ಭದ್ರತಾ ಕಳವಳದ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ತೆರಳಲು ಭಾರತ ನಿರಾಕರಿಸಿರುವ ಹಿನ್ನೆಲೆಯಲ್ಲಿ ತನ್ನೆಲ್ಲ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಫೆಬ್ರುವರಿ 19ರಂದು ಟೂರ್ನಿ ಆರಂಭವಾಗಲಿದ್ದು, ಮಾರ್ಚ್ 9ರಂದು ಫೈನಲ್ ಪಂದ್ಯ ನಿಗದಿಯಾಗಿದೆ.

ADVERTISEMENT

ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಭಾರತದ ಸಾಧನೆ:

ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಭಾರತ ಅತ್ಯುತ್ತಮ ಸಾಧನೆ ಮಾಡಿದೆ. ಈವರೆಗೆ ಒಟ್ಟು ಎಂಟು ಬಾರಿ ಚಾಂಪಿಯನ್ಸ್ ಟ್ರೋಫಿ ಆಯೋಜನೆಯಾಗಿದೆ. ಈ ಪೈಕಿ ಭಾರತ ಎರಡು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಒಟ್ಟು ನಾಲ್ಕು ಬಾರಿ ಫೈನಲ್‌ಗೆ ಪ್ರವೇಶಿಸಿರುವ ಭಾರತ ಎರಡು ಸಲ ರನ್ನರ್-ಅಪ್ ಎನಿಸಿಕೊಂಡಿದೆ.

1998: ಸೆಮಿಫೈನಲ್ ಪ್ರವೇಶ

ಬಾಂಗ್ಲಾದೇಶದಲ್ಲಿ ನಡೆದ ಚೊಚ್ಚಲ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮೊಹಮ್ಮದ್ ಅಜರುದ್ದೀನ್ ನಾಯಕತ್ವದಲ್ಲಿ ಸೆಮಿಫೈನಲ್‌ ಹಂತಕ್ಕೆ ಪ್ರವೇಶಿಸಿತ್ತು. ಸೆಮೀಸ್‌ನಲ್ಲಿ ವೆಸ್ಟ್‌ಇಂಡೀಸ್ ವಿರುದ್ಧ ಆರು ವಿಕೆಟ್ ಅಂತರದಿಂದ ಸೋಲೊಪ್ಪಿಕೊಂಡಿತ್ತು. ಚೊಚ್ಚಲ ಕಿರೀಟವನ್ನು ದಕ್ಷಿಣ ಆಫ್ರಿಕಾ ಗೆದ್ದಿತ್ತು.

2000: ರನ್ನರ್-ಅಪ್

ಕೆನ್ಯಾದಲ್ಲಿ ನಡೆದ ಎರಡನೇ ಆವೃತ್ತಿಯಲ್ಲಿ ಭಾರತ, ಸೌರವ್ ಗಂಗೂಲಿ ನಾಯಕತ್ವದಲ್ಲಿ ಫೈನಲ್‌ಗೆ ತಲುಪಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧ ನಾಲ್ಕು ವಿಕೆಟ್ ಅಂತರದ ಸೋಲಿಗೆ ಶರಣಾಗಿತ್ತು. ನಾಯಕ ಗಂಗೂಲಿ ಅವರ ಶತಕದ (117) ಹೋರಾಟ ವ್ಯರ್ಥವೆನಿಸಿತ್ತು.

2002: ಜಂಟಿ ಚಾಂಪಿಯನ್

ಶ್ರೀಲಂಕಾದ ಆತಿಥ್ಯದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ಫೈನಲ್ ಪಂದ್ಯವು ಮಳೆಯಿಂದಾಗಿ ರದ್ದುಗೊಂಡ ಹಿನ್ನೆಲೆಯಲ್ಲಿ ಅತಿಥೇಯ ತಂಡದೊಂದಿಗೆ ಭಾರತವು ಚಾಂಪಿಯನ್ ಎನಿಸಿಕೊಂಡಿತ್ತು. ಸೌರವ್ ಗಂಗೂಲಿ ನೇತೃತ್ವದಲ್ಲಿ ಭಾರತ ಫೈನಲ್‌ಗೆ ತಲುಪಿತ್ತು.

2004: ಗುಂಪು ಹಂತದಲ್ಲೇ ನಿರ್ಗಮನ

ಇಂಗ್ಲೆಂಡ್ ಆತಿಥ್ಯದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಗುಂಪು ಹಂತದಲ್ಲೇ ನಿರ್ಗಮಿಸಿತ್ತು.

2006: ಗುಂಪು ಹಂತದಲ್ಲೇ ನಿರ್ಗಮನ

ಭಾರತದಲ್ಲಿ ಆಯೋಜನೆಯಾಗಿದ್ದ 2006ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲೂ ಭಾರತ ಗುಂಪು ಹಂತದಲ್ಲೇ ನಿರ್ಗಮನದ ಹಾದಿ ಹಿಡಿದಿತ್ತು. ಅಂದು ರಾಹುಲ್ ದ್ರಾವಿಡ್ ನಾಯಕತ್ವ ವಹಿಸಿದ್ದರು.

2009: ಗುಂಪು ಹಂತದಲ್ಲೇ ನಿರ್ಗಮನ

ದಕ್ಷಿಣ ಆಫ್ರಿಕಾದಲ್ಲಿ ನಡೆದ ಟೂರ್ನಿಯಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ಮಗದೊಮ್ಮೆ ಪ್ರಭಾವಿ ಎನಿಸಿಕೊಳ್ಳುವಲ್ಲಿ ವಿಫಲವಾಗಿತ್ತು. ಪರಿಣಾಮ ಟೂರ್ನಿಯ ಇತಿಹಾಸದಲ್ಲಿ ಸತತ ಮೂರನೇ ಸಲ ಗುಂಪು ಹಂತದಲ್ಲೇ ನಿರ್ಗಮಿಸಿತ್ತು.

2013: ಭಾರತ ಚಾಂಪಿಯನ್

ಇಂಗ್ಲೆಂಡ್ ಮತ್ತು ವೇಲ್ಸ್ ಆತಿಥ್ಯದಲ್ಲಿ ನಡೆದ ಟೂರ್ನಿಯಲ್ಲಿ ಭಾರತ ಎರಡನೇ ಬಾರಿಗೆ ಕಿರೀಟ ಮುಡಿಗೇರಿಸಿಕೊಂಡಿತ್ತು. ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಐದು ರನ್ ಅಂತರದ ರೋಚಕ ಗೆಲುವು ದಾಖಲಿಸಿತ್ತು.

2017: ರನ್ನರ್-ಅಪ್

ಇಂಗ್ಲೆಂಡ್ ಮತ್ತು ವೇಲ್ಸ್ ಆತಿಥ್ಯದಲ್ಲಿ ನಡೆದ ಟೂರ್ನಿಯ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ 180 ರನ್ ಅಂತರದ ಹೀನಾಯ ಸೋಲನುಭವಿಸಿದ್ದ ಭಾರತದ ಪ್ರಶಸ್ತಿ ಕನಸು ಭಗ್ನಗೊಂಡಿತ್ತು. ಭಾರತ ತಂಡವನ್ನು ವಿರಾಟ್ ಕೊಹ್ಲಿ ಮುನ್ನಡೆಸಿದ್ದರು.

ಈಗ ಏಳು ವರ್ಷಗಳ ಅಂತರದ ಬಳಿಕ ಚಾಂಪಿಯನ್ಸ್ ಟ್ರೋಫಿ ಆಯೋಜನೆಯಾಗುತ್ತಿದೆ. ರೋಹಿತ್ ಶರ್ಮಾ ಮುಂದಾಳತ್ವದಲ್ಲಿ ಭಾರತ ಮೂರನೇ ಸಲ ಕಪ್ ಗೆಲ್ಲುವುದೇ ಕಾದು ನೋಡಬೇಕಿದೆ.

ಎಂಟು ತಂಡಗಳು ಭಾಗವಹಿಸುವ ಟೂರ್ನಿಯಲ್ಲಿ ಭಾರತ 'ಎ' ಗುಂಪಿನಲ್ಲಿದೆ. ಇದೇ ಗುಂಪಿನಲ್ಲಿ ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ನ್ಯೂಜಿಲೆಂಡ್ ತಂಡಗಳಿವೆ. ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೆ ಪ್ರವೇಶಿಸಲಿವೆ. ಸೆಮಿಫೈನಲ್ ಪಂದ್ಯಗಳು ಅನುಕ್ರಮವಾಗಿ ಮಾರ್ಚ್ 4 ಹಾಗೂ 5ರಂದು ನಡೆಯಲಿದೆ. ಫೈನಲ್ ಪಂದ್ಯ ಮಾರ್ಚ್ 9ರಂದು ನಿಗದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.