
ಭಾರತ ಕ್ರಿಕೆಟ್‌ನ ಯುವ ಪ್ರತಿಭೆ, 14 ವರ್ಷದ ವೈಭವ್ ಸೂರ್ಯವಂಶಿ ಅವರು ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. 19 ವರ್ಷದೊಳಗಿನವರ ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗದ ಅರ್ಧಶತಕ ದಾಖಲಿಸಿದ ಭಾರತೀಯ ಆಟಗಾರ ಎಂಬ ಸಾಧನೆ ಮಾಡಿದ್ದಾರೆ.
ಬೆನೋನಿಯ ವಿಲ್ಲೋಮೂರ್ ಪಾರ್ಕ್‌ನಲ್ಲಿ ಸೋಮವಾರ ನಡೆದ 19 ವರ್ಷದೊಳಗಿನವರ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಸೂರ್ಯವಂಶಿ ವೇಗದ ಅರ್ಧಶತಕ ಸಿಡಿಸಿದ ಭಾರತೀಯ ಆಟಗಾರ ಎಂಬ ಸಾಧನೆ ಮಾಡಿದರು. ಆ ಮೂಲಕ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಅವರ ದಾಖಲೆಯನ್ನು ಮುರಿದಿದ್ದಾರೆ.
ಆಯುಷ್ ಮ್ಹಾತ್ರೆ ಅನುಪಸ್ಥಿತಿಯಲ್ಲಿ 19 ವರ್ಷದೊಳಗಿನವರ ಭಾರತ ತಂಡದ ನಾಯಕರಾಗಿರುವ ಸೂರ್ಯವಂಶಿ, ದಕ್ಷಿಣ ಆಫ್ರಿಕಾ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ಕೇವಲ 15 ಎಸೆತಗಳಲ್ಲಿ 50 ರನ್ ಗಳಿಸಿದರು. ಆ ಮೂಲಕ ರಿಷಬ್ ಪಂತ್ ಅವರ ಹೆಸರಿನಲ್ಲಿದ್ದ ವೇಗದ ಅರ್ಧಶತಕದ ದಾಖಲೆ ಅಳಿಸಿ ಹಾಕಿದರು.
ಇದಕ್ಕೂ ಮೊದಲು ಪಂತ್ ಅವರು 18 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ 19 ವರ್ಷದೊಳಗಿನವರ ಏಕದಿನ ಕ್ರಿಕೆಟ್‌ನಲ್ಲಿ ವೇಗದ ಅರ್ಧಶತಕ ಸಿಡಿಸಿದ ಭಾರತೀಯ ಆಟಗಾರ ಎಂಬ ದಾಖಲೆ ಹೊಂದಿದ್ದರು.
ಅಂತಿಮವಾಗಿ ವೈಭವ್ ಸೂರ್ಯವಂಶಿ ಅವರು 24 ಎಸೆತಗಳಲ್ಲಿ 10 ಸಿಕ್ಸರ್ ಹಾಗೂ 1 ಬೌಂಡರಿ ಸಹಿತ 68 ರನ್ ಕಲೆಹಾಕಿದರು. ಸೂರ್ಯವಂಶಿ ಅವರ ಈ ಅದ್ಭುತ ಇನಿಂಗ್ಸ್ ಭಾರತದ ಗೆಲುವಿಗೆ ಸಹಕಾರಿಯಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.