ಬೆಂಗಳೂರು: ವಿಜಯ್ ಹಜಾರೆ ಟೂರ್ನಿಯಲ್ಲಿ ಆಡುತ್ತಿರುವ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ಆಂಧ್ರಪ್ರದೇಶ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ್ದಾರೆ.
ಬೆಂಗಳೂರಿನ ಬಿಸಿಸಿಐ ಸೆಂಟರ್ ಫಾರ್ ಎಕ್ಸಲೆನ್ಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ದೆಹಲಿ ತಂಡವು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು.
ಮೊದಲು ಬ್ಯಾಟಿಂಗ್ ಮಾಡಿದ ಆಂಧ್ರಪ್ರದೇಶ ತಂಡವು 50 ಓವರ್‌ಗಳ ಅಂತ್ಯಕ್ಕೆ 8 ವಿಕೆಟ್ ನಷ್ಟಕ್ಕೆ 298 ರನ್ ಗಳಿಸಿತ್ತು.
ಗುರಿ ಬೆನ್ನತ್ತಿದ ದೆಹಲಿ ತಂಡಕ್ಕೆ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಅವರು ಆಸರೆಯಾಗಿ ನಿಂತರು. 15 ವರ್ಷಗಳ ನಂತರ ಲಿಸ್ಟ್ ಎ ಕ್ರಿಕೆಟ್ ಆಡುತ್ತಿರುವ ಕೊಹ್ಲಿ, 101 ಎಸೆತಗಳಲ್ಲಿ 14 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 131 ರನ್ ಗಳಿಸಿದರು.
ವಿರಾಟ್ ಕೊಹ್ಲಿ ಅವರ ಶತಕದ ನೆರವಿನಿಂದ ದೆಹಲಿ ತಂಡವು 37.4 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಗುರಿ ಮುಟ್ಟಿತು. 4 ವಿಕೆಟ್‌ಗಳ ಗೆಲುವು ಸಾಧಿಸಿತು.
ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನು ಹೊಂದಿರುವ ವಿರಾಟ್ ಕೊಹ್ಲಿ, ಲಿಸ್ಟ್ ಎ ಕ್ರಿಕೆಟ್‌ನಲ್ಲಿ 330 ಇನಿಂಗ್ಸ್‌ಗಳಲ್ಲಿ 16 ಸಾವಿರ ರನ್ ಪೂರೈಸಿದರು. ಈ ಮೂಲಕ 391 ಇನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದ, ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ವಿರಾಟ್ ಮುರಿದರು.
ಲಿಸ್ಟ್ ಎ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ 58 ಶತಕಗಳನ್ನು ಸಿಡಿಸಿದ್ದು, ಸಚಿನ್ ತೆಂಡೂಲ್ಕರ್ (60 ಶತಕ) ಅವರ ನಂತರದ ಸ್ಥಾನದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.