ADVERTISEMENT

ಐಸಿಸಿ ರ‍್ಯಾಂಕಿಂಗ್: ಅಗ್ರಸ್ಥಾನ ಕಾಪಾಡಿಕೊಂಡ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ

ಪಿಟಿಐ
Published 26 ಆಗಸ್ಟ್ 2020, 11:40 IST
Last Updated 26 ಆಗಸ್ಟ್ 2020, 11:40 IST
ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ
ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ   

ದುಬೈ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅವರು ಐಸಿಸಿ ಏಕದಿನ ಕ್ರಿಕೆಟ್ ರ‍್ಯಾಂಕಿಂಗ್‌ನ ಬ್ಯಾಟ್ಸ್‌ಮನ್‌ಗಳ ವಿಭಾಗದಲ್ಲಿ ಅಗ್ರಸ್ಥಾನ ಕಾಪಾಡಿಕೊಂಡಿದ್ದಾರೆ. ಕನ್ನಡಿಗ ಕೆ.ಎಲ್. ರಾಹುಲ್ ಟ್ವೆಂಟಿ–20 ಮಾದರಿಯಲ್ಲಿ ಎರಡನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ಸುಮಾರು ಐದೂವರೆ ತಿಂಗಳುಗಳಿಂದ ಭಾರತ ತಂಡವು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಆಡಿಲ್ಲ. ಕೊರೊನಾ ತಡೆಗೆ ಲಾಕ್‌ಡೌನ್‌ ನಂತರ ಇಂಗ್ಲೆಂಡ್, ವೆಸ್ಟ್‌ ಇಂಡೀಸ್ ಮತ್ತು ಐರ್ಲೆಂಡ್ ತಂಡಗಳು ಮಾತ್ರ ಅಂತರರಾಷ್ಟ್ರೀಯ ಸೀಮಿತ ಓವರ್‌ಗಳ ಪಂದ್ಯಗಳಲ್ಲಿ ಆಡಿವೆ. ಉಳಿದೆ ಯಾವುದೇ ತಂಡವೂ ಕಣಕ್ಕಿಳಿದಿಲ್ಲ.

ಆದರೂ ವಿರಾಟ್ ಮತ್ತು ರೋಹಿತ್ ಅವರು ಕ್ರಮವಾಗಿ ಮೊದಲ ಹಾಗೂ ಎರಡನೇ ಸ್ಥಾನ ಕಾಪಾಡಿಕೊಂಡಿದ್ದಾರೆ. ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಅವರು ಟೆಸ್ಟ್‌ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಕೊಹ್ಲಿ ಮತ್ತು ಮಾರ್ನಸ್ ಲಾಬುಶೇನ್ ಅವರು ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿದ್ದಾರೆ.

ADVERTISEMENT

ಟಿ20 ಮಾದರಿಯಲ್ಲಿ ಪಾಕಿಸ್ತಾನದ ಬಾಬರ್ ಆಜಂ ಮೊದಲ ಹಾಗೂ ಆಸ್ಟ್ರೇಲಿಯಾದ ಆ್ಯರನ್ ಫಿಂಚ್ ಅವರು ಮೂರನೇ ಸ್ಥಾನದಲ್ಲಿದ್ದಾರೆ.

ಪಾಕ್ ಎದುರಿನ ಟೆಸ್ಟ್‌ನಲ್ಲಿ ದ್ವಿಶತಕ ಬಾರಿಸಿದ ಜ್ಯಾಕ್ ಕ್ರಾಲಿ 53 ಸ್ಥಾನಗಳ ಬಡ್ತಿ ಗಳಿಸಿ, 28ನೇ ಸ್ಥಾನಕ್ಕೇರಿದ್ದಾರೆ.

ಏಕದಿನ ಕ್ರಿಕೆಟ್‌ನ ಬೌಲಿಂಗ್ ವಿಭಾಗದಲ್ಲಿ ನ್ಯೂಜಿಲೆಂಡ್‌ನ ಟ್ರೆಂಟ್ ಬೌಲ್ಟ್‌, ಭಾರತದ ಜಸ್‌ಪ್ರೀತ್ ಬೂಮ್ರಾ ಮತ್ತು ಅಫ್ಗಾನಿಸ್ತಾನದ ಮುಜೀಬ್ ಉರ್ ರೆಹಮಾನ್ ಅವರು ಕ್ರಮವಾಗಿ ಮೊದಲ ಮೂರು ಸ್ಥಾನದಲ್ಲಿದ್ದಾರೆ. ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್‌ ಮತ್ತು ಟಿ20 ವಿಭಾಗದಲ್ಲಿ ಅಫ್ಗಾನಿಸ್ತಾನದ ಸ್ಪಿನ್ನರ್ ರಶೀದ್ ಖಾನ್ ಅಗ್ರಸ್ಥಾನದಲ್ಲಿದ್ದಾರೆ. ಟೆಸ್ಟ್‌ ಕ್ರಿಕೆ್‌ಟ್‌ನಲ್ಲಿ 600ವಿಕೆಟ್‌ಗಳ ಗಳಿಕೆಯ ಸಾಧನೆ ಮಾಡಿರುವ ಇಂಗ್ಲೆಂಡ್‌ನ ಜೇಮ್ಸ್‌ ಆ್ಯಂಡರ್ಸನ್ ಎಂಟನೇ ಸ್ಥಾನಕ್ಕೇರಿದ್ದಾರೆ.

ತಂಡ ವಿಭಾಗದಲ್ಲಿ ಭಾರತವು ಏಕದಿನ ಕ್ರಿಕೆಟ್‌ನಲ್ಲಿ ಎರಡನೇ ಸ್ಥಾನದಲ್ಲಿದೆ. ಟೆಸ್ಟ್ ಮತ್ತು ಟಿ20 ವಿಭಾಗಗಳಲ್ಲಿ ಮೂರನೇ ಸ್ಥಾನ ಪಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.