ದ.ಆಫ್ರಿಕಾ ಚಾಂಪಿಯನ್ಸ್
(ಚಿತ್ರ ಕೃಪೆ: X/@WclLeague)
ಬರ್ಮಿಂಗ್‌ಹ್ಯಾಮ್: 'ಮಿಸ್ಟರ್ 360 ಡಿಗ್ರಿ' ಖ್ಯಾತಿಯ ಬ್ಯಾಟರ್ ಎಬಿ ಡಿವಿಲಿಯರ್ಸ್ ಸ್ಫೋಟಕ ಶತಕದ ನೆರವಿನಿಂದ ದಕ್ಷಿಣ ಆಫ್ರಿಕಾ ಚಾಂಪಿಯನ್ಸ್, ಫೈನಲ್‌ನಲ್ಲಿ ಪಾಕಿಸ್ತಾನ ಚಾಂಪಿಯನ್ಸ್ ತಂಡವನ್ನು ಒಂಬತ್ತು ವಿಕೆಟ್‌ಗಳಿಂದ ಮಣಿಸಿ 'ವರ್ಲ್ಡ್ ಚಾಂಪಿಯನ್ಸ್ ಆಫ್ ಲೆಜೆಂಡ್ಸ್ 2025' ಕಿರೀಟವನ್ನು ಎತ್ತಿ ಹಿಡಿದಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಪಾಕಿಸ್ತಾನ, ಸರ್ಜೀಲ್ ಖಾನ್ ಅರ್ಧಶತಕದ (76) ಬಲದಿಂದ ಐದು ವಿಕೆಟ್ ನಷ್ಟಕ್ಕೆ 195 ರನ್‌ಗಳ ಸವಾಲಿನ ಮೊತ್ತ ಪೇರಿಸಿತ್ತು.
ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 16.5 ಓವರ್‌ಗಳಲ್ಲಿ ಗುರಿ ತಲುಪಿತು. ಎಬಿ ಡಿವಿಲಿಯರ್ಸ್ ಕೇವಲ 60 ಎಸೆತಗಳಲ್ಲಿ 12 ಬೌಂಡರಿ ಹಾಗೂ ಏಳು ಸಿಕ್ಸರ್‌ಗಳ ನೆರವಿನಿಂದ ಅಜೇಯ 120 ರನ್ ಗಳಿಸಿ ಅಬ್ಬರಿಸಿದರು.
ಅವರಿಗೆ ತಕ್ಕ ಸಾಥ್ ನೀಡಿದ ಜೆ.ಪಿ.ಡ್ಯುಮಿನಿ 28 ಎಸೆತಗಳಲ್ಲಿ ನಾಲ್ಕು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ ಅಜೇಯ 50 ರನ್ ಗಳಿಸಿದರು.
41 ವರ್ಷದ ಮಾಜಿ ಕ್ರಿಕೆಟಿಗ ವಿಲಿಯರ್ಸ್ ಹಳೆಯ ಶೈಲಿಯಲ್ಲಿ ಬ್ಯಾಟ್ ಬೀಸುವ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ಅಲ್ಲದೆ ಟೂರ್ನಿಯಲ್ಲಿ ಮೂರು ಶತಕಗಳ ಸಾಧನೆ ಮಾಡಿದ್ದಾರೆ.
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಳಿಕ ಭಾರತೀಯರ ಭಾವನೆಗಳನ್ನು ಪರಿಗಣಿಸಿ ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಆಡಲು ಭಾರತ ನಿರಾಕರಿಸಿತ್ತು. ಇದರಿಂದಾಗಿ ಪಾಕಿಸ್ತಾನ ತಂಡ ನೇರವಾಗಿ ಫೈನಲ್‌ಗೆ ತೇರ್ಗಡೆ ಹೊಂದಿತ್ತು.
ಮತ್ತೊಂದೆಡೆ ಆಸ್ಟ್ರೇಲಿಯಾ ಚಾಂಪಿಯನ್ಸ್ ವಿರುದ್ಧ ಗೆಲುವು ದಾಖಲಿಸಿದ್ದ ದಕ್ಷಿಣ ಆಫ್ರಿಕಾ ಚಾಂಪಿಯನ್ಸ್ ಫೈನಲ್‌ಗೆ ಲಗ್ಗೆ ಇಟ್ಟಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.