ಆಸ್ಪತ್ರೆಯಲ್ಲಿ ಜೈಸ್ವಾಲ್‌ಗೆ ಚಿಕಿತ್ಸೆ
ಚಿತ್ರ: @Team64YBJ
ಪುಣೆ: ಭಾರತದ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಹೊಟ್ಟೆ ನೋವಿನ ಸಮಸ್ಯೆಯಿಂದಾಗಿ ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪುಣೆಯಲ್ಲಿ ನಡೆದ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ಜೈಸ್ವಾಲ್ ಮುಂಬೈ ಪರ ಆಡಿದ್ದರು.
ರಾಜಸ್ಥಾನ ನೀಡಿದ್ದ 217 ರನ್‌ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿದ ಮುಂಬೈ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ 23 ವರ್ಷದ ಜೈಸ್ವಾಲ್ ಅವರು 16 ಎಸೆತಗಳಲ್ಲಿ 15 ರನ್ ಗಳಿಸಿ ಔಟ್ ಆದರು. ಆದರೆ, ಮಧ್ಯಮ ಕ್ರಮಾಂಕದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಸರ್ಫರಾಜ್ ಖಾನ್ ತಂಡಕ್ಕೆ ಗೆಲುವು ತಂದುಕೊಟ್ಟರು.
ಖಾಸಗಿ ಸುದ್ದಿ ವಾಹಿನಿಯ ವರದಿ ಪ್ರಕಾರ, ಜೈಸ್ವಾಲ್ ಅವರು ತೀವ್ರ ಹೊಟ್ಟೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಆದಿತ್ಯ ಬಿರ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪಂದ್ಯದ ನಡುವೆಯೇ ಜೈಸ್ವಾಲ್ ಅವರಿಗೆ ಹೊಟ್ಟೆಯಲ್ಲಿ ಸೆಳೆತ ಕಾಣಿಸಿಕೊಂಡಿದೆ. ಪಂದ್ಯದ ಬಳಿಕ ನೋವಿನ ತೀವ್ರತೆ ಹೆಚ್ಚಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ವರದಿಯಲ್ಲಿ ತಿಳಿಸಿದೆ.
ಆಸ್ಪತ್ರೆಯಲ್ಲಿ ಅವರಿಗೆ ಅಲ್ಟ್ರಾಸೌಂಡ್ ಮತ್ತು ಸಿಟಿ ಸ್ಕ್ಯಾನ್ ಜೊತೆಗೆ ವೈದ್ಯಕೀಯ ಚಿಕಿತ್ಸೆ ನೀಡಿ, ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದ್ದಾರೆ ಎಂದೂ ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.