ADVERTISEMENT

18 ವರ್ಷದೊಳಗಿನ ಮಹಿಳಾ ಏಷ್ಯನ್‌ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ ಸೆ. 5ರಿಂದ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2022, 12:26 IST
Last Updated 18 ಆಗಸ್ಟ್ 2022, 12:26 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು:18 ವರ್ಷದೊಳಗಿನಮಹಿಳಾ ಫಿಬಾ ಏಷ್ಯನ್‌ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ ಸೆಪ್ಟೆಂಬರ್ 5ರಿಂದ 11 ರವರೆಗೆ ಉದ್ಯಾನನಗರಿಯಲ್ಲಿ ನಡೆಯಲಿದೆ.

ಇಲ್ಲಿಯ ಕಂಠೀರವ ಕ್ರೀಡಾಂಗಣದ ಕರ್ನಾಟಕ ಒಲಿಂಪಿಕ್ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಕೆ.ಸಿ.ನಾರಾಯಣಗೌಡ ಈ ವಿಷಯ ತಿಳಿಸಿದರು.

ಕಂಠೀರವ ಹಾಗೂ ಕೋರಮಂಗಲದ ಒಳಾಂಗಣ ಕ್ರೀಡಾಂಗಣಗಳಲ್ಲಿ ಚಾಂಪಿಯನ್‌ಷಿಪ್ ನಡೆಯಲಿದೆ. ಭಾರತ, ಜಪಾನ್, ಚೀನಾ, ಇಂಡೊನೇಷ್ಯಾ, ಮಲೇಷ್ಯಾ ಸೇರಿದಂತೆ ಒಟ್ಟು 16 ತಂಡಗಳು ಭಾಗವಹಿಸಲಿವೆ. ಈ ಕ್ರೀಡಾಕೂಟದಲ್ಲಿ ಅಗ್ರ ನಾಲ್ಕು ಸ್ಥಾನ ಪಡೆದ ತಂಡಗಳು ಮುಂದಿನ ವರ್ಷ ಜುಲೈನಲ್ಲಿ ಸ್ಪೇನ್‌ನಲ್ಲಿ ನಡೆಯಲಿರುವ 19 ವರ್ಷದೊಳಗಿನ ಮಹಿಳೆಯರ ಫಿಬಾ ವಿಶ್ವಕಪ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿವೆ ಎಂದು ಸಚಿವರು ತಿಳಿಸಿದರು.

ADVERTISEMENT

ಈ ಕ್ರೀಡಾಕೂಟಕ್ಕೆ ಭಾರತ ಬ್ಯಾಸ್ಕೆಟ್‌ಬಾಲ್‌ ಫೆಡರೇಷನ್‌ (ಬಿಎಫ್‌ಐ) ಮಾರ್ಗಸೂಚಿಗಳ ಅನ್ವಯ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದರು.

ಇರಾನ್‌ನಲ್ಲಿ ನಡೆಯಲಿರುವ ಫಿಬಾ 18 ವರ್ಷದೊಳಗಿನವರ ಪುರುಷರ ಬ್ಯಾಸ್ಕೆಟ್‌ಬಾಲ್‌ ಚಾಂಪಿಯನ್‌ಷಿಪ್‌ನಲ್ಲಿ ಪಾಲ್ಗೊಳ್ಳುವ ಭಾರತ ತಂಡದ ಆಟಗಾರರಿಗೆ ಕಿಟ್‌ಗಳನ್ನು ವಿತರಿಸಲಾಯಿತು.

ಬಿಎಫ್‌ಐ ಅಧ್ಯಕ್ಷ ಕೆ. ಗೋವಿಂದರಾಜು, ಪ್ರಧಾನ ಕಾರ್ಯದರ್ಶಿ ಚಂದ್ರಮುಖಿ ಶರ್ಮಾ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.