ADVERTISEMENT

ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ; ಅತ್ಯಂತ ನಾಚಿಕೆಗೇಡಿನ ಸಂಗತಿ: ಕೇಜ್ರಿವಾಲ್

ಪಿಟಿಐ
Published 20 ಜನವರಿ 2023, 10:29 IST
Last Updated 20 ಜನವರಿ 2023, 10:29 IST
ಅರವಿಂದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್   

ನವದೆಹಲಿ: ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳದಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ.

ಬಿಜೆಪಿ ಸಂಸದರೂ ಆಗಿರುವ ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿರುವ ಕುಸ್ತಿಪಟುಗಳು ದೆಹಲಿಯ ಜಂತರ್ ಮಂಥರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಹರಿಯಾಣದ ಸಚಿವರಿಂದ ಹಿಡಿದು ಡಬ್ಲ್ಯುಎಫ್‌ಐ ಅಧ್ಯಕ್ಷರವರೆಗೆ ಗಂಭೀರ ಆರೋಪ ಹೊರಿಸಲಾಗಿದೆ. ಆದರೆ ಈವರೆಗೆ ರಾಜೀನಾಮೆಯಾಗಲಿ ಅಥವಾ ಯಾವುದೇ ಕ್ರಮ ಕೈಕೊಂಡಿಲ್ಲ. ದೇಶದ ಮಹಿಳಾ ಕ್ರೀಡಾಪಟುಗಳ ಭದ್ರತೆ ವಿಚಾರದಲ್ಲಿ ಅವರ ಪಕ್ಷ ಮತ್ತು ಸರ್ಕಾರ ನಾಯಕರನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ. ಇದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ಕೇಜ್ರಿವಾಲ್ ಹೇಳಿದರು.

ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಸರ್ವಾಧಿಕಾರ ಧೋರಣೆ ವಿರುದ್ಧವೂ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಖ್ಯಾತ ಕುಸ್ತಿಪಟುಗಳಾದ ಟೋಕಿಯೊ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪೂನಿಯಾ, ಸಾಕ್ಷಿ ಮಲಿಕ್, ವಿಶ್ವ ಚಾಂಪಿಯನ್‌ಷಿಪ್ ಪದಕ ವಿಜೇತ ಕುಸ್ತಿಪಟು ವಿನೇಶಾ ಪೋಗಟ್ ಸೇರಿದಂತೆ ಅನೇಕ ಕುಸ್ತಿಪಟುಗಳು ಧರಣಿಯಲ್ಲಿ ನಿರತರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.