ಸಿ.ಎಸ್. ಷಡಾಕ್ಷರಿ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಮೇ 18ರಿಂದ 20ರವರೆಗೆ ಶಿವಮೊಗ್ಗ ನಗರದಲ್ಲಿ ಆಯೋಜಿಸಲಾಗಿದ್ದು, 15,000 ನೌಕರರು ಭಾಗವಹಿಸುತ್ತಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ನೆಹರೂ ಕ್ರೀಡಾಂಗಣದಲ್ಲಿ 18ರಂದು ಸಂಜೆ 4ಕ್ಕೆ ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡುವರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಪಾಲ್ಗೊಳ್ಳಲಿದ್ದಾರೆ ಎಂದರು.
ಕ್ರೀಡಾಕೂಟದ ವೈಯಕ್ತಿಕ ವಿಭಾಗದಲ್ಲಿ 97, ಗುಂಪು ವಿಭಾಗದಲ್ಲಿ 16, ಸಾಂಸ್ಕೃತಿಕ ಸ್ಪರ್ಧೆಯ ವೈಯಕ್ತಿಕ ವಿಭಾಗದಲ್ಲಿ 15 ಹಾಗೂ ಗುಂಪು ವಿಭಾಗದಲ್ಲಿ 16 ಸ್ಪರ್ಧೆಗಳು ನಡೆಯಲಿವೆ. ಭಾಗವಹಿಸುವ ನೌಕರರಿಗೆ ಸಾಂದರ್ಭಿಕ ರಜೆ ಸೌಲಭ್ಯವನ್ನು ಸರ್ಕಾರ ಮಂಜೂರು ಮಾಡಿದೆ. ಎಲ್ಲ ಕ್ರೀಡಾಪಟುಗಳಿಗೂ ಜರ್ಸಿ, ಊಟೋಪಚಾರ ಮತ್ತು ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮೋಹನಕುಮಾರ್, ಪ್ರಧಾನ ಕಾರ್ಯದರ್ಶಿ ಪಾಪಣ್ಣ, ಶಿಕ್ಷಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿದ್ಧಬಸಪ್ಪ ಮತ್ತಿತರರು ಕಾರ್ಯಕ್ರಮದ ಉಸ್ತುವಾರಿ ನಿರ್ವಹಿಸಲಿದ್ದಾರೆ. ಉದ್ಘಾಟನೆಯ ದಿನ ಸಂಜೆ 7ಕ್ಕೆ ಗಾಯಕ ರಾಜೇಶ್ ಕೃಷ್ಣನ್ ಅವರಿಂದ ಗಾನಸುಧೆ– ಸಂಗೀತ ಸಂಜೆ ಹಾಗೂ ಮೇ 19ರಂದು ಸ್ಥಳೀಯ ಕಲೆ, ಸಂಸ್ಕೃತಿ, ಜಾನಪದ ಬಿಂಬಿಸುವ ‘ಜನಪದ ದಿಬ್ಬಣ’ ಕಾರ್ಯಕ್ರಮ ಆಯೋಜಿಸಲಾಗಿದೆ. ವಿಶೇಷವಾಗಿ ಮಕ್ಕಳಿಗೆ ವಿಶೇಷ ಮನರಂಜನಾ ಕಾರ್ಯಕ್ರಮ ಇರುತ್ತದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.