ರೌಡಿ ಶೀಟರ್‌ಗಳಿಗೆ ಖಡಕ್ ಎಚ್ಚರಿಕೆ

ಕಲಬುರ್ಗಿ: ‘ಏಯ್ ಬಾರೊ ಇಲ್ಲಿ, ನೀನೇನು ದೊಡ್ಡ ರೌಡಿನಾ, ಕೈಯಲ್ಲಿ ದಾರ ಕಟ್ಟಿದರೆ ಹೀರೋನಾ. ಇವೆಲ್ಲ ಆಟ ನಡೆಯಲ್ಲ. ಶಾಂತಿ– ಸುವ್ಯವಸ್ಥೆಗೆ ಧಕ್ಕೆ ತಂದರೆ ಹುಷಾರ್’..

–ಹೀಗೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್ ಅವರು ರೌಡಿ ಶೀಟರ್‌ಗಳಿಗೆ ಖಡಕ್ ಸೂಚನೆ ನೀಡಿದರು.

ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯ ಸಾವಿರಕ್ಕೂ ಅಧಿಕ ರೌಡಿ ಶೀಟರ್‌ಗಳ ಪರೇಡ್ ನಡೆಸಿದ ಅವರು, ಉದ್ದ ಕೂದಲು, ಗಡ್ಡ ತೆಗೆಸಿದರು.

ಇದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಗಣೇಶ ಚತುರ್ಥಿ ಹಾಗೂ ಮೊಹರಂ ಹಬ್ಬದ ಅಂಗವಾಗಿ ರೌಡಿಶೀಟರ್‌ಗಳ ಪರೇಡ್ ನಡೆಸಲಾಗಿದೆ. ಜಿಲ್ಲೆಯಲ್ಲಿ 3,800 ಜನರನ್ನು ರೌಡಿ ಪಟ್ಟಿಗೆ ಸೇರಿಸಲಾಗಿದೆ. ಇವರಲ್ಲಿ ಕೆಲವರು ಊರು ತೊರೆದಿದ್ದರೆ, ಹಲವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇನ್ನು ಕೆಲವರು ನ್ಯಾಯಾಂಗ ಬಂಧನದಲ್ಲಿದ್ದಾರೆ’ ಎಂದು ತಿಳಿಸಿದರು.

‘ರೌಡಿಪಟ್ಟಿಯಲ್ಲಿ ಕೊಲೆ ಯತ್ನ, ದರೋಡೆ, ಜಾತಿ ಮತ್ತು ಧರ್ಮಗಳ ಮಧ್ಯೆ ಸಂಘರ್ಷ ಉಂಟು ಮಾಡಿದವರು, ಅತ್ಯಾಚಾರ ಎಸಗಿದವರು ಇದ್ದಾರೆ. ಎರಡೂ ಹಬ್ಬಗಳ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗದಂತೆ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ’ ಎಂದು ಹೇಳಿದರು.

ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಬಿ.ಜೆ. ಇದ್ದರು.

ಪ್ರಮುಖ ಸುದ್ದಿಗಳು