ಸೋಮವಾರ, ಮಾರ್ಚ್ 1, 2021
30 °C
ಚಾಮಾರಾಜನಗರ: ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ನೌಕರರ ಪ್ರತಿಭಟನೆ

ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್‌ಕೆಜಿ, ಯುಕೆಜಿ ಆರಂಭಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಸಮಿತಿಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು.

ನಗರದ ಚಾಮರಾಜೇಶ್ವರಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಹೊರಟ ಅಂಗನವಾಡಿ ನೌಕರರು ಸಂತೇಮರಹಳ್ಳಿ ವೃತ್ತ, ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮಾರ್ಗವಾಗಿ ಜಿಲ್ಲಾಡಳಿತ ಭವನದಲ್ಲಿ ಸಮಾವೇಶಗೊಂಡು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್.ಲತಾಕುಮಾರಿ ಅವರಿಗೆ ಮನವಿ ಸಲ್ಲಿಸಿದರು.

‘ರಾಜ್ಯ ಸರ್ಕಾರ ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ಪಬ್ಲಿಕ್‌ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲು ಆದೇಶಿಸಿ ಈಗಾಗಲೇ ಪ್ರವೇಶ ಪ್ರಕ್ರಿಯೆ ನಡೆಯುತ್ತಿದೆ. ಇದರಿಂದ ಅಂಗನವಾಡಿ ಕೇಂದ್ರಗಳಿಗೆ ಬರಬೇಕಿದ್ದ ಮಕ್ಕಳು ಪಬ್ಲಿಕ್‌ ಶಾಲೆಗಳಲ್ಲಿ ನೋಂದಾಯಿಸಿಕೊಳ್ಳುತ್ತಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಸಂಖ್ಯೆ ಗಣನೀಯವಾಗಿ ಕುಸಿಯುತ್ತಿದೆ. ಮುಂದಿನ ದಿನಗಳಲ್ಲಿ ಅಂಗನವಾಡಿ ಕೇಂದ್ರಗಳು ಮುಚ್ಚುವ ಆತಂಕದ ಸ್ಥಿತಿ ನಿರ್ಮಾಣವಾಗಲಿದೆ’ ಎಂದು ಪ್ರತಿಭಟನಾಕಾರರು ಹೇಳಿದರು.

‘6 ವರ್ಷದೊಳಗಿನ ಮಕ್ಕಳಲ್ಲಿ ಬೌದ್ಧಿಕ, ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಅಂಗನವಾಡಿ ಕೇಂದ್ರ ಪೂರಕವಾಗಿದೆ. ಈ ಕೇಂದ್ರಗಳು ಮಕ್ಕಳಲ್ಲಿ ಆಸಕ್ತಿ ಮೂಡಿಸಲು ಹಲವು ಚಟುವಟಿಕೆಗಳನ್ನು ಏರ್ಪಡಿಸುತ್ತದೆ. ಆ ಮೂಲಕ ಮಕ್ಕಳನ್ನು ಆಕರ್ಷಿಸುತ್ತಿವೆ. ಆದರೆ, ಸರ್ಕಾರ ಅಂಗನವಾಡಿ ಕೇಂದ್ರಗಳನ್ನು ಮೂಲೆ ಗುಂಪು ಮಾಡುತ್ತಿರುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು. 

‘ಅಂಗನವಾಡಿ ಕೇಂದ್ರಗಳು ಮಾನವ ಸಂಪನ್ಮೂಲಗಳ ಬೆಳೆವಣಿಗೆಗೆ ಪೂರಕ. ಇಂತಹ ಕೇಂದ್ರಗಳನ್ನು ಸಬಲೀಕರಿಸಲು ಸರ್ಕಾರ ಮುಂದಾಗಬೇಕು. ಸರ್ಕಾರಿ ಶಾಲೆಗಳಲ್ಲಿ ದಾಖಲೆಯನ್ನು ಹೆಚ್ಚಿಸಲು ಅಂಗನವಾಡಿ ಕೇಂದ್ರದಲ್ಲಿ ನಿರ್ವಹಿಸಬೇಕಾದ ಜವಾಬ್ದಾರಿಯನ್ನು ಸರ್ಕಾರಿ ಶಾಲೆಗಳಲ್ಲೇ ನಿರ್ವಹಿಸಲು ಮುಂದಾಗಿರುವುದು ಸರಿಯಲ್ಲ’ ಎಂದು ದೂರಿದರು.

‘ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಬ್ಲಿಕ್‌ ಶಾಲೆಗಳಲ್ಲಿ ಎಲ್‌ಕೆ.ಜಿ, ಯುಕೆಜಿ ಆರಂಭವಾಗಲಿದ್ದು, ಇದರಿಂದ ಅಂಗನವಾಡಿಗಳ ಪರಿಸ್ಥಿತಿ ಇನ್ನಷ್ಟು ಉಲ್ಬಣಗೊಳ್ಳಲಿದೆ. ಅಂಗನವಾಡಿಗಳಲ್ಲಿ ಕಾರ್ಯನಿರ್ವಹಿಸುವ ನೌಕರರು ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗಲಿದೆ. ಆದ್ದರಿಂದ ಅಂಗನವಾಡಿಯಲ್ಲೇ ನರ್ಸರಿ, ಎಲ್‌ಕೆಜಿ, ಯುಕೆಜಿ ನಡೆಸಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡ‌ಬೇಕು’ ಎಂದು ಆಗ್ರಹಿಸಿದರು. 

ಜಿಲ್ಲಾ ಸಮಿತಿಯ ಅಧ್ಯಕ್ಷೆ ಕೆ.ಸುಜಾತ, ಪ್ರಧಾನ ಕಾರ್ಯದರ್ಶಿ ಎ.ನಾಗಮಣಿ, ಖಜಾಂಚಿ ಜಿ.ಭಾಗ್ಯ, ಪಾರ್ವತಮ್ಮ, ಜಯಮಾಲಾ, ತುಳಸಮ್ಮ, ಶಾಂತಮ್ಮ, ಮಮತಾ, ಅನಿತಾ ಪಾಲ್ಗೊಂಡಿದ್ದರು.

ಹಕ್ಕೊತ್ತಾಯಗಳು

* ಅಂಗನವಾಡಿ ನೌಕರರಿಗೆ ಸಮರ್ಪಕವಾಗಿ ಗೌರವಧನ ನೀಡಬೇಕು

* ಎಲ್‌ಐಸಿ ಆಧಾರಿತ ನಿವೃತ್ತಿ ವೇತನ ನೀಡಬೇಕು

* ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರರಿಗೆ ಕೊಡುವ ಎನ್‌ಪಿಎಸ್‌ ಮಾನದಂಡಗಳನ್ನು ಅನುಸರಿಸಬೇಕು

* 2016 ಏಪ್ರಿಲ್‌ನಿಂದ ಕಾರ್ಯ ನಿರ್ವಹಿಸುತ್ತಿರುವ ಕಾರ್ಯಕರ್ತೆಯರಿಗೆ ಕಾಯಂ ನಿವೃತ್ತಿ ಸೌಲಭ್ಯ ತರಬೇಕು

* ನಿವೃತ್ತಿ ಹೊಂದಿದವರಿಗೆ ಕನಿಷ್ಠ ₹ 3 ಸಾವಿರ ಪಿಂಚಣಿ ನೀಡಬೇಕು

* 1995ರಿಂದ ಪ್ರಾರಂಭವಾಗಿರುವ ಎಲ್ಲ ಯೋಜನೆಗಳು ಮತ್ತು ಆಯ್ಕೆಯಾಗಿರುವ ಎಲ್ಲ ಕಾರ್ಯಕರ್ತೆಯರು ಎಸ್ಸೆಸ್ಸೆಲ್ಸಿ ಪಾಸಾದವರಿದ್ದಾರೆ. ಅವರಿಗೆ ತರಬೇತಿ ನೀಡಬೇಕು

* ಇಲಾಖೆ ಕೆಲಸಗಳಲ್ಲಿ ಓಡಾಡುತ್ತಿರುವಾಗ ಆಗುವ ಅಪಘಾತಗಳಿಗೆ ಪರಿಹಾರ ನೀಡಬೇಕು

* ಕೇಂದ್ರ ಸರ್ಕಾರ ಕಡಿತ ಮಾಡಿರುವ ಅನುದಾನ ವಾಪಸ್‌ ಆಗಬೇಕು 

* ಕಾರ್ಯಕರ್ತೆಯರಿಗೆ ಸೇವಾ ನಿಯಮಾವಳಿ ರಚಿಸಬೇಕು

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು