ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸುಪ್ರೀಂ’ಪ್ರಕರಣಗಳ ಹಂಚಿಕೆ ವಿವರ ಬಹಿರಂಗ!

Last Updated 21 ಜನವರಿ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಸೂಕ್ಷ್ಮ ಪ್ರಕರಣಗಳನ್ನು ನ್ಯಾಯಮೂರ್ತಿಗಳಿಗೆ ಹಂಚಿಕೆ ಮಾಡುವ ಪ್ರಕ್ರಿಯೆಯನ್ನು ಸಾರ್ವಜನಿಕವಾಗಿ ಪ್ರಕಟಿಸುವ ಹೊಸ ವ್ಯವಸ್ಥೆಯನ್ನು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ದೀಪಕ್‌ ಮಿಶ್ರಾ ಶೀಘ್ರ ಜಾರಿಗೆ ತರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣಗಳ ಹಂಚಿಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಬೇಕು ಎಂಬ ಸಲಹೆಗಳನ್ನು ಮಿಶ್ರಾ ಗಂಭೀರವಾಗಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.

ಸಿಬಿಐ ವಿಶೇಷ ನ್ಯಾಯಾಧೀಶ ಎಚ್‌.ಬಿ. ಲೋಯ ಸಾವಿನ ಪ್ರಕರಣ ಹಾಗೂ ಇತರ ಸೂಕ್ಷ್ಮ ಪ್ರಕರಣಗಳ ಹಂಚಿಕೆ ವಿಚಾರವಾಗಿ ಅತೃಪ್ತಿ ಹೊರ ಹಾಕಿದ್ದ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಬಹಿರಂಗವಾಗಿ ಪ್ರಸ್ತಾಪಿಸಿರುವ ಅಂಶಗಳನ್ನು ಸಿಜೆಐ ಪರಿಗಣನೆಗೆ ತೆಗೆದುಕೊಂಡಿದ್ದಾರೆ. ಲೋಯ ಸಾವಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಸಿಜೆಐ ನೇತೃತ್ವದ ಪೀಠಕ್ಕೆ ವಹಿಸಿರುವುದು ಇದನ್ನು ಸ್ಪಷ್ಟಪಡಿಸುತ್ತದೆ ಎಂದು ಮೂಲಗಳು ವಿವರಿಸಿವೆ.

ರೋಸ್ಟರ್‌ ಪದ್ಧತಿ ಸಾಧ್ಯತೆ: ಇತರ ನ್ಯಾಯಮೂರ್ತಿಗಳೊಂದಿಗೆ ಮಿಶ್ರಾ ವಿಸ್ತೃತ ಚರ್ಚೆ ನಡೆಸಿದ್ದಾರೆ. ಸುಪ್ರೀಂ ಕೋರ್ಟ್‌ನ ವಕೀಲರ ಒಕ್ಕೂಟ (ಎಸ್‌ಸಿಬಿಸಿ) ನೀಡಿರುವ ಸಲಹೆಗಳನ್ನೂ ಗಂಭೀರವಾಗಿ ಪರಿಗಣಿಸಿದ್ದಾರೆ. ಹಾಗಾಗಿ, ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣಗಳ ಹಂಚಿಕೆ ವಿಚಾರವಾಗಿ ಸ್ಪಷ್ಟವಾದ ರೋಸ್ಟರ್‌ ವ್ಯವಸ್ಥೆ ಜಾರಿಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ವಿವರಿಸಿವೆ.

‘ಈ ವಿಚಾರದಲ್ಲಿ ಸಿಜೆಐ ತೆಗೆದುಕೊಂಡಿರುವ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ ರಿಜಿಸ್ಟ್ರಿಯು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಿದೆ. ಯಾವ ‍ಪ್ರಕರಣವನ್ನು ಯಾರು ವಿಚಾರಣೆ ನಡೆಸಲಿದ್ದಾರೆ ಎಂಬುದನ್ನು ಸಾರ್ವಜನಿಕವಾಗಿ ಪ್ರಕಟಿಸುವ ವ್ಯವಸ್ಥೆ ಜಾರಿಗೆ ಬರಲಿದೆ’ ಎಂದು ಉನ್ನತ ಮೂಲಗಳು ತಿಳಿಸಿವೆ.

ದೆಹಲಿ ಹೈಕೋರ್ಟ್‌ನಲ್ಲಿ ಜಾರಿಯಲ್ಲಿರುವ ರೋಸ್ಟರ್‌ ವ್ಯವಸ್ಥೆಯಂತಹ ಪದ್ಧತಿ ಸುಪ್ರೀಂ ಕೋರ್ಟ್‌ನಲ್ಲೂ ಅಳವಡಿಸಬೇಕು ಎಂಬ ಬೇಡಿಕೆಯನ್ನು ಒಕ್ಕೂಟ ಮುಂದಿಟ್ಟಿತ್ತು ಎಂದು ಎಸ್‌ಸಿಬಿಸಿ ಅಧ್ಯಕ್ಷ ವಿಕಾಸ್‌ ಸಿಂಗ್‌ ಹೇಳಿದ್ದಾರೆ. ದೆಹಲಿ ಹೈಕೋರ್ಟ್‌ನಲ್ಲಿರುವ ವ್ಯವಸ್ಥೆಯನ್ನೇ ಬಾಂಬೆ ಹೈಕೋರ್ಟ್‌ನಲ್ಲೂ ಅನುಸರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT