ಶನಿವಾರ, ಮೇ 8, 2021
26 °C

ಅಕ್ರಮ-ಸಕ್ರಮ ಬೇಡ: ರಾಜ್ಯಪಾಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರ ಪ್ರದೇಶದಲ್ಲಿರುವ ಸರ್ಕಾರಿ ಭೂಮಿಯಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ಕಟ್ಟಡಗಳನ್ನು ಸಕ್ರಮಗೊಳಿಸುವ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ಮಸೂದೆಯನ್ನು ಪುನರ್‌ಪರಿಶೀಲಿಸುವಂತೆ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ವಿಧಾನಮಂಡಲದ ಉಭಯ ಸದನಗಳಿಗೆ ಸೂಚಿಸಿದ್ದಾರೆ.ಕಳೆದ ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕರಿಸಿ ಅನುಮೋದನೆಗಾಗಿ ರಾಜ್ಯಪಾಲರಿಗೆ ಕಳುಹಿಸಲಾಗಿದ್ದ ಈ ಮಸೂದೆಯನ್ನು ಭಾರದ್ವಾಜ್ ಮಾರ್ಚ್‌ನಲ್ಲಿ ಸರ್ಕಾರಕ್ಕೆ ವಾಪಸ್ ಮಾಡಿದ್ದರು. ಈ ಸಂಬಂಧ ರಾಜ್ಯಪಾಲರು ಬರೆದಿರುವ ಪತ್ರವನ್ನು ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಬುಧವಾರ ಸದನದಲ್ಲಿ ಓದಿದರು.ಈ ತಿದ್ದುಪಡಿ ಮಸೂದೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ಅಡಗಿಲ್ಲ. ಸಾಮಾಜಿಕ ಕಳಕಳಿಯೂ ಇಲ್ಲ. ಸರ್ಕಾರಿ ಭೂಮಿಯನ್ನು ಭೂಗಳ್ಳರಿಗೆ ಪರಭಾರೆ ಮಾಡಿಕೊಟ್ಟಂತಾಗುತ್ತದೆ ಅಷ್ಟೇ. ಆದ್ದರಿಂದ ಪರಿಶೀಲನೆಗಾಗಿ ಮಸೂದೆಯನ್ನು ವಾಪಸ್ ಮಾಡಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.`ಸರ್ಕಾರ ಈ ಹಿಂದೆ ಎ.ಟಿ.ರಾಮಸ್ವಾಮಿ ಅಧ್ಯಕ್ಷತೆಯಲ್ಲಿ ರಚಿಸಿದ್ದ ಜಂಟಿ ಸದನ ಸಮಿತಿಯು, ಭೂಗಳ್ಳರ ವಿರುದ್ಧ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ. ಹೀಗಾಗಿ ಸರ್ಕಾರದ ಮೇಲೆ ಜನಸಾಮಾನ್ಯರು ವಿಶ್ವಾಸ ಕಳೆದುಕೊಂಡಿದ್ದಾರೆ. ಮೊದಲು ಭೂಗಳ್ಳರನ್ನು ಮಟ್ಟಹಾಕಲು ಕಠಿಣ ಕ್ರಮಕೈಗೊಳ್ಳಿ ಎಂದು ಸಲಹೆ ಮಾಡಿತ್ತು. ಆ ಪ್ರಕಾರ ಸರ್ಕಾರ ಮುಂದುವರಿಯುವುದು ಸೂಕ್ತ' ಎಂದು ಉಲ್ಲೇಖಿಸಿದ್ದಾರೆ.ಸರ್ಕಾರ ಭೂಮಿ ಒತ್ತುವರಿ ಆಗಿರುವುದನ್ನು ತೆರವುಗೊಳಿಸುವುದು ಬಿಟ್ಟು, ಅದನ್ನು ಸಕ್ರಮಗೊಳಿಸುವುದು ಸಂವಿಧಾನಕ್ಕೆ ವಿರುದ್ಧವಾಗಿದೆ. ಈ ರೀತಿ ಮಾಡುವುದರಿಂದ ಜನಸಾಮಾನ್ಯರು ಸರ್ಕಾರದ ಕಾನೂನುಗಳ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಾರೆ. ಈ ನೆಲದ ಕಾನೂನಿಗೆ ಬೆಲೆ ಇಲ್ಲದಂತಾಗುತ್ತದೆ. ಒತ್ತುವರಿಗೆ ಮತ್ತಷ್ಟು ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದಿದ್ದಾರೆ.ನಿವೃತ್ತ ಹೆಚ್ಚುವರಿ ಮುಖ್ಯಕಾರ್ಯದರ್ಶಿ ವಿ.ಬಾಲಸುಬ್ರಮಣಿಯನ್ ಅಧ್ಯಕ್ಷತೆಯಲ್ಲಿ ಸರ್ಕಾರವೇ ರಚಿಸಿದ್ದ ಕಾರ್ಯಪಡೆಯು 11 ಲಕ್ಷ ಎಕರೆ ಸರ್ಕಾರಿ ಭೂಮಿ ಒತ್ತುವರಿ ಆಗಿದೆ ಎಂದು ತಿಳಿಸಿದೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಒತ್ತುವರಿ ಭೂಮಿಯನ್ನು ತೆರವುಗೊಳಿಸಬೇಕು ಎಂದು ಸಲಹೆ ಮಾಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.