ಬುಧವಾರ, ಮೇ 25, 2022
23 °C

ಅಗತ್ಯ ವಸ್ತುಗಳ ಬೆಲೆ ಏರಿಕೆ: ಬಿಜೆಪಿ ಆಕ್ರೋಶ- ಬಂಧನ, ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಗತ್ಯ ವಸ್ತುಗಳ ಬೆಲೆ ಏರಿಕೆ: ಬಿಜೆಪಿ ಆಕ್ರೋಶ- ಬಂಧನ, ಬಿಡುಗಡೆ

 ಬೆಂಗಳೂರು: ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದ ಪುರಭವನದ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು. ರಸ್ತೆ ತಡೆ ಮಾಡಲು ಮುಂದಾದ ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು ಅವರನ್ನು ಕೋರಮಂಗಲದ ಮೈದಾನದಲ್ಲಿರಿಸಿ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಬಿಡುಗಡೆ ಮಾಡಿದರು.ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ, ನಗರ ಘಟಕದ ಅಧ್ಯಕ್ಷ ಸುಬ್ಬನರಸಿಂಹ ಸೇರಿದಂತೆ ಹಲವು ಶಾಸಕರು, ಬಿಬಿಎಂಪಿ ಸದಸ್ಯರು ಭಾಗವಹಿಸಿದ್ದರು.`ಬೆಲೆ ನಿಯಂತ್ರಣ ಮಾಡುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸರ್ಕಾರವು ವ್ಯವಸ್ಥಿತವಾಗಿ ಆರ್ಥಿಕ ನೀತಿಗಳನ್ನು ರೂಪಿಸಿಕೊಳ್ಳದೆ, ತಪ್ಪು ರಾಜಕೀಯ ನಿರ್ಧಾರ ತೆಗೆದುಕೊಳ್ಳುತ್ತಿದೆ. ಬೆಲೆ ನಿಯಂತ್ರಣ ಮಾಡುವ ಬಗ್ಗೆ ಕೆಂದ್ರ ಸರ್ಕಾರ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸುವ ನಾಟಕವಾಡುತ್ತದೆ. ಆದರೆ, ಆ ಯೋಜನೆಗಳನ್ನು ಜಾರಿಗೆ ತರಲು ಮನಸ್ಸು ಮಾಡುವುದಿಲ್ಲ~ ಎಂದು ಅನಂತಕುಮಾರ್ ಆರೋಪಿಸಿದರು.`ಆಹಾರ ಪದಾರ್ಥಗಳು ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ಸಾಮಾನ್ಯರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಕೇಂದ್ರ ಸರ್ಕಾರಕ್ಕೆ ಜನಸಾಮಾನ್ಯನ ಬಗ್ಗೆ ಚಿಂತೆಯಿಲ್ಲ. ವಸ್ತುಗಳ ಬೆಲೆಯನ್ನು ಏಕಾಏಕಿ ಏರಿಕೆ ಮಾಡುತ್ತದೆ. ಅದಕ್ಕೆ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾದ ನಂತರ ಅಲ್ಪ ಪ್ರಮಾಣದಲ್ಲಿ ಬೆಲೆ ಕಡಿಮೆ ಮಾಡಿ ಜನರಿಂದ ವಿಶ್ವಾಸ ಗಿಟ್ಟಿಸಿಕೊಳ್ಳಲು ಪ್ರಯತ್ನಿಸುತ್ತದೆ~ ಎಂದು ಪ್ರತಿಭಟನಾರರು ಆಕ್ರೋಶ ವ್ಯಕ್ತಡಿಸಿದರು.`ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ಪೆಟ್ರೋಲ್ ಬೆಲೆ ಒಂದು ಲೀಟರ್‌ಗೆ 40 ರೂಪಾಯಿ ಇತ್ತು. ಈಗ ಅದರ ದುಪ್ಪಟ್ಟಾಗಿದೆ. ಕಳೆದ ಮೂರು ವರ್ಷದಲ್ಲಿ 18 ಬಾರಿ ಪೆಟ್ರೋಲ್ ಹೆಚ್ಚಿಸುವ ಮೂಲಕ ಕೇಂದ್ರ ಸರ್ಕಾರ ನೂತನ ದಾಖಲೆ ನಿರ್ಮಿಸಿದೆ~ ಎಂದು ಪ್ರತಿಭಟನಾಕಾರರು ವ್ಯಂಗ್ಯ ಮಾಡಿದರು.ಎನ್‌ಡಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಎಲ್ಲಾ ಅಗತ್ಯ ವಸ್ತುಗಳು ಜನಸಾಮಾನ್ಯನಿಗೆ ಕೈಗೆಟುವ ಬೆಲೆಗೆ ಸಿಗುತ್ತಿದ್ದವು. ಆದರೆ ಈಗಿನ ಸರ್ಕಾರದ ಆರ್ಥಿಕ ನೀತಿಯಿಂದ ಶ್ರೀಮಂತರೇ ತತ್ತರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ವಸ್ತುಗಳ ಬೆಲೆ ಏರಿಕೆ ಪಟ್ಟಿಯನ್ನು ಪ್ರದರ್ಶಿಸಿದರು.ಶೀಘ್ರವೇ ಜನಸಾಮಾನ್ಯರಿಗೆ ಪೂರಕವಾಗುವಂತಹ ಹೊಸ ಆರ್ಥಿಕ ನೀತಿಯನ್ನು ಜಾರಿಗೆ ತರದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಮಾಡುವುದಾಗಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.