ಸೋಮವಾರ, ಮೇ 16, 2022
28 °C

ಅಡ್ಡಗಟ್ಟಿ ನಗದು, ಚಿನ್ನಾಭರಣ ದರೋಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಕಾರಿನಲ್ಲಿ ಹೋಗುತ್ತಿದ್ದ ವಿಮಾನಯಾನ ಸಂಸ್ಥೆಯ ಉದ್ಯೋಗಿ ಯನ್ನು ದುಷ್ಕರ್ಮಿಗಳು ಅಡ್ಡಗಟ್ಟಿ 73 ಸಾವಿರ ನಗದು ಮತ್ತು ಚಿನ್ನಾಭರಣ ದರೋಡೆ ಮಾಡಿರುವ ಘಟನೆ ರಾಮಮೂರ್ತಿನಗರ ಸಮೀಪದ ಕಸ್ತೂರಿನಗರದಲ್ಲಿ ಮಂಗಳವಾರ ರಾತ್ರಿ ನಡೆದಿದೆ.ಚನ್ನಸಂದ್ರದ ನಾಲ್ಕನೇ ಅಡ್ಡರಸ್ತೆ ನಿವಾಸಿ ರವೀಂದ್ರನಾಥ್ ದರೋಡೆಗೆ ಒಳಗಾದವರು. ಅವರು ರಿಚ್ಮಂಡ್ ಟೌನ್ ಬಳಿ ಇರುವ ಖಾಸಗಿ ವಿಮಾನಯಾನ ಸಂಸ್ಥೆಯೊಂದರಲ್ಲಿ ಹಿರಿಯ ವ್ಯವಸ್ಥಾಪಕರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಸಂತೋಷಕೂಟಕ್ಕೆ (ಪಾರ್ಟಿ) ಹೋಗಿದ್ದ ರವೀಂದ್ರನಾಥ್ ಅವರು ಪಾನಮತ್ತರಾಗಿ ಕಾರಿನಲ್ಲಿ ಮನೆಗೆ ಬರುತ್ತಿದ್ದಾಗ ಮೂವರು ದುಷ್ಕರ್ಮಿಗಳು ಬೈಕ್‌ನಲ್ಲಿ ಹಿಂಬಾಲಿಸಿ ಬಂದು ಅಡ್ಡಗಟ್ಟಿ ಹಲ್ಲೆ ನಡೆಸಿ ಈ ಕೃತ್ಯ ಎಸಗಿದ್ದಾರೆ. ದರೋಡೆಕೋರರು ಹಣ, ಹತ್ತು ಗ್ರಾಂ ಚಿನ್ನದ ಸರ ಮತ್ತು ಲ್ಯಾಪ್‌ಟಾಪ್ ಕಿತ್ತುಕೊಂಡು ಹೋಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ರಾಮಮೂರ್ತಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಅಪಘಾತ: ಸಾವು ನಗರದ ಮೈಸೂರು ರಸ್ತೆಯ ಕೆಂಗೇರಿ ಬಸ್ ನಿಲ್ದಾಣದ ಬಳಿ ಮಂಗಳವಾರ ರಾತ್ರಿ ಬೈಕ್ ಡಿಕ್ಕಿ ಹೊಡೆದು ಮಹಾದೇವ್ (28) ಎಂಬುವರು ಸಾವನ್ನಪ್ಪಿದ್ದಾರೆ.ಮಳವಳ್ಳಿ ತಾಲ್ಲೂಕಿನ ಮಹಾದೇವ್, ಮರಳು ಸಾಗಣೆ ಲಾರಿಗಳಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಕೆಂಗೇರಿ ಬಸ್ ನಿಲ್ದಾಣದ ಬಳಿ ರಾತ್ರಿ ಎಂಟು ಗಂಟೆ ಸುಮಾರಿಗೆ ರಸ್ತೆ ದಾಟುತ್ತಿದ್ದ ಅವರಿಗೆ ಬೈಕ್ ಡಿಕ್ಕಿ ಹೊಡೆಯಿತು. ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟರು ಎಂದು ಪೊಲೀಸರು ಹೇಳಿದ್ದಾರೆ. ಬ್ಯಾಟರಾಯನಪುರ ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿದೆ.ದರೋಡೆಕೋರರ ಬಂಧನ
: ದರೋಡೆಕೋರರನ್ನು ಬಂಧಿಸಿರುವ ಕೋರಮಂಗಲ ಪೊಲೀಸರು ಸುಮಾರು ಎರಡು ಲಕ್ಷ ರೂಪಾಯಿ ಮೌಲ್ಯದ ಬೈಕ್‌ಗಳು ಹಾಗೂ ಆಟೊವನ್ನು ವಶಪಡಿಸಿಕೊಂಡಿದ್ದಾರೆ.ಗಾರ್ವೆಬಾವಿಪಾಳ್ಯದ ನೆಲ್ಸನ್ (22), ಬೇಗೂರಿನ ಸ್ಟೀಫನ್ (19), ಕಿರಣ್‌ಕುಮಾರ್ (19) ಮತ್ತು ಜಯಂತ್‌ಕುಮಾರ್ (19) ಬಂಧಿತರು. ಆರೋಪಿಗಳಿಂದ ಆಟೊ ಹಾಗೂ ಮೂರು ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.ಆರೋಪಿಗಳು ರಾತ್ರಿ ವೇಳೆ ಸಾರ್ವಜನಿಕರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹಣ ಮತ್ತು ಚಿನ್ನಾಭರಣ ದರೋಡೆ ಮಾಡುತ್ತಿದ್ದರು. ಅಂತೆಯೇ ಅವರು ಕೋರಮಂಗಲ ಐದನೇ ಬ್ಲಾಕ್‌ನ ಉದ್ಯಾನದ ಬಳಿ ದರೋಡೆ ಮಾಡಲು ಹೊಂಚು ಹಾಕುತ್ತಿದ್ದ ಬಗ್ಗೆ ಮಾಹಿತಿ ಕಲೆ ಹಾಕಿ ಬಂಧಿಸಲಾಯಿತು. ಆರೋಪಿಗಳ ವಿರುದ್ಧ ಮಡಿವಾಳ, ಕೋರಮಂಗಲ ಮತ್ತು ಹುಳಿಮಾವು ಠಾಣೆಯಲ್ಲಿ ಕೊಲೆ ಯತ್ನ ಹಾಗೂ ವಾಹನ ಕಳವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.