ಅತ್ಯಾಚಾರ ಖಂಡಿಸಿ ಪ್ರತಿಭಟನೆ

7

ಅತ್ಯಾಚಾರ ಖಂಡಿಸಿ ಪ್ರತಿಭಟನೆ

Published:
Updated:
ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಬೆಂಗಳೂರು: ದೆಹಲಿಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲಾದ ಸಾಮೂಹಿಕ ಅತ್ಯಾಚಾರ ಹಾಗೂ ಮಹಿಳಾ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದನ್ನು ಖಂಡಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಸದಸ್ಯರು ರಾಜಾಜಿನಗರದ ಆರನೇ ಹಂತದ ರಾಜ್‌ಕುಮಾರ್ ರಸ್ತೆಯಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.`ದೇಶದಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ಆದರೆ, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಇದಕ್ಕೆ ರಾಜ್ಯವೂ ಹೊರತಾಗಿಲ್ಲ. ಪ್ರಕರಣಗಳನ್ನು ಬೇಧಿಸುವುದೊಂದೆ ದೊಡ್ಡ ಸಾಧನೆ ಎನ್ನುವ ಪೊಲೀಸರು, ಕೃತ್ಯ ನಡೆಯುವ ಮುಂಚೆಯೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬಹುದು. ಆದರೆ, ಈ ಹಂತದಲ್ಲಿ ಅವರು ವಿಫಲರಾಗಿದ್ದಾರೆ' ಎಂದು ಸಂಘಟನೆಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಲಕ್ಮೀ ಆರೋಪಿಸಿದರು.ಮಹಿಳೆಯರ ಮೇಲಾಗುವ ಲೈಂಗಿಕ ಕಿರುಕುಳ ತಡೆಗೆ ಸುಪ್ರೀಂ ಕೋರ್ಟ್ ಕೆಲ ನಿರ್ದೇಶನಗಳನ್ನು ಕೊಟ್ಟಿದೆ. ಅದನ್ನು ಸರ್ಕಾರವಾಗಲೀ, ಪೊಲೀಸ್ ಇಲಾಖೆಯಾಗಲೀ ಪಾಲನೆ ಮಾಡುತ್ತಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಈ ಘಟನೆಗಳು ಬೆಳಕಿಗೆ ಬರುತ್ತಿಲ್ಲ. ಹೀಗಾಗಿ ಎಲ್ಲಾ ಜಿಲ್ಲೆಗಳಲ್ಲೂ ಸಹಾಯವಾಣಿಗಳನ್ನು ತೆರೆಯಬೇಕು ಹಾಗೂ ಜನಪ್ರತಿನಿಧಿಗಳು ವಾರಕ್ಕೊಮ್ಮೆ ಪೊಲೀಸರೊಂದಿಗೆ ಸಭೆ ನಡೆಸಿ ಇಂತಹ ಕೃತ್ಯಗಳು ನಡೆಯದಂತೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.`ನಗರದಲ್ಲಿ ಶಾಲಾ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದ ಪೋಷಕರು ಆತಂಕಗೊಂಡಿದ್ದಾರೆ. ಮೊಬೈಲ್‌ಗಳು, ಅಶ್ಲೀಲ ಸಿನಿಮಾ, ಸಾಮಾಜಿಕ ಜಾಲ ತಾಣಗಳ ಪ್ರಭಾವಕ್ಕೆ ಒಳಗಾಗಿ ಮನುಷ್ಯ ಕ್ರೂರಿಯಾಗುತ್ತಿದ್ದಾನೆ. ಹೀಗಾಗಿ ಅವುಗಳಿಗೆ ಮೊದಲು ಕಡಿವಾಣ ಹಾಕಬೇಕು ಎಂದು ಸಂಘಟನೆಯ ಉಪಾಧ್ಯಕ್ಷೆ ಶಾರದಾ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು ರಸ್ತೆಯಲ್ಲಿ ಮಾನವ ಸರಪಳಿ ಮಾಡಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದರಿಂದ ವಾಹನ ಸಂಚಾರಕ್ಕೆ ಕೆಲ ಕಾಲ ಅಡ್ಡಿಯಾಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry