ಭಾನುವಾರ, ಮೇ 16, 2021
22 °C

ಅಧಿವೇಶನ: ಇಂದಿನಿಂದ ನಿಷೇಧಾಜ್ಞೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನಮಂಡಲ ಅಧಿವೇಶನದ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತಲ ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ಜೂ.10ರಿಂದ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.`ಮೇ 29ರಿಂದ ಆರಂಭವಾಗಿರುವ ಅಧಿವೇಶನ ಜೂ.12ಕ್ಕೆ ಮುಕ್ತಾಯಗೊಳ್ಳಲಿದೆ. ಈ ಸಮಯದಲ್ಲಿ ವಿವಿಧ ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳು, ಕಾರ್ಮಿಕ ಮತ್ತು ವಿಧ್ಯಾರ್ಥಿ ಸಂಘಟನೆಗಳು, ಅಂಗನವಾಡಿ ಕಾರ್ಯಕರ್ತರು, ಕನ್ನಡಪರ ಸಂಘಟನೆಗಳು ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ, ವಿಧಾನಸೌಧ ಮುತ್ತಿಗೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಾರದು. ಇದರಿಂದಾಗಿ ಕಲಾಪಗಳಿಗೆ ಅಡ್ಡಿಯಾಗುವುದಲ್ಲದೆ, ಸಾರ್ವಜನಿಕರ ನೆಮ್ಮದಿಗೂ ಭಂಗವಾಗುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆಯಿಂದ ಮಾಹಿತಿ ಬಂದಿದೆ. ಹೀಗಾಗಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ' ಎಂದು ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ ತಿಳಿಸಿದ್ದಾರೆ.ಜೂ.10ರಂದು ಬೆಳಿಗ್ಗೆ ಆರು ಗಂಟೆಯಿಂದ ಜೂ.12ರಂದು ರಾತ್ರಿ 12 ಗಂಟೆವರೆಗೆ ಈ ನಿಷೇಧಾಜ್ಞೆ ಆದೇಶ ಜಾರಿಯಲ್ಲಿರುತ್ತದೆ. ವಿಧಾನಸೌಧ ಕಟ್ಟಡದ ಸುತ್ತಮುತ್ತಲ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವಂತಿಲ್ಲ. ಮೆರವಣಿಗೆ ಮತ್ತು ಬಹಿರಂಗ ಸಭೆ ನಡೆಸುವುದು, ಶಸ್ತ್ರಾಸ್ತ್ರ, ದೊಣ್ಣೆ, ಮಾರಕಾಸ್ತ್ರ ಕೊಂಡೊಯ್ಯುವಂತಿಲ್ಲ ಎಂದು ಮಿರ್ಜಿ ಹೇಳಿದ್ದಾರೆ.ಸ್ಫೋಟಕ ವಸ್ತು ಸಿಡಿಸುವುದು, ಪ್ರತಿಕೃತಿಗಳ ಪ್ರದರ್ಶನ ಅಥವಾ ದಹನ ಮಾಡುವುದು, ಬಹಿರಂಗ ಘೋಷಣೆಗಳನ್ನು ಕೂಗುವುದು, ಹಾಡುವುದು, ಭಿತ್ತಿಪತ್ರ ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ. ನಿಯಮ ಮೀರಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.