ಅಧ್ಯಕ್ಷರಾಗಿ ಬಸವಣ್ಣ; ಉಪಾಧ್ಯಕ್ಷೆಯಾಗಿ ಪಾರ್ವತಮ್ಮ ಆಯ್ಕೆ

7

ಅಧ್ಯಕ್ಷರಾಗಿ ಬಸವಣ್ಣ; ಉಪಾಧ್ಯಕ್ಷೆಯಾಗಿ ಪಾರ್ವತಮ್ಮ ಆಯ್ಕೆ

Published:
Updated:

ಚಾಮರಾಜನಗರ: ತಾಲ್ಲೂಕು ಪಂಚಾಯಿತಿಯ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಜ್ಯೋತಿಗೌಡನಪುರ ಕ್ಷೇತ್ರದ ಎನ್. ಬಸವಣ್ಣ ಹಾಗೂ ಉಪಾಧ್ಯಕ್ಷರಾಗಿ ಸಂತೇಮರಹಳ್ಳಿ ಕ್ಷೇತ್ರದ ಪಾರ್ವತಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು.  ತಾಲ್ಲೂಕು ಪಂಚಾಯಿತಿಯಲ್ಲಿ ಒಟ್ಟು 28 ಸ್ಥಾನಗಳಿವೆ. ಇದರಲ್ಲಿ ಕಾಂಗ್ರೆಸ್- 15, ಬಿಜೆಪಿ- 12 ಹಾಗೂ ಒಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಹೀಗಾಗಿ, ತಾಲ್ಲೂಕು ಪಂಚಾಯಿತಿಯ ಅಧಿಕಾರ ಕಾಂಗ್ರೆಸ್ ಹಿಡಿತದಲ್ಲಿದೆ.ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗದ ಮಹಿಳೆಗೆ ಮೀಸಲಾಗಿತ್ತು. ಬಸವಣ್ಣ ಮತ್ತು ಪಾರ್ವತಮ್ಮ ಹೊರತುಪಡಿಸಿ ಯಾರೊಬ್ಬರು ನಾಮಪತ್ರ ಸಲ್ಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾ ರಿಯಾಗಿದ್ದ ಉಪ ವಿಭಾಗಾಧಿಕಾರಿ ಎ.ಬಿ. ಬಸವರಾಜು ಅವಿರೋಧ ಆಯ್ಕೆಯನ್ನು ಘೋಷಿಸಿದರು.ಅ. 26ರಂದು ಅಧ್ಯಕ್ಷ ಮತ್ತು ಉಪಾಧ್ಯಕ್ಷೆ ಅಧಿಕಾರ ಸ್ವೀಕರಿಸಲಿದ್ದಾರೆ.  ಕಾಂಗ್ರೆಸ್ ಸದಸ್ಯರ ನಡುವೆ ಪೈಪೋಟಿ ಇದ್ದ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು 10 ತಿಂಗಳ ಅವಧಿಯ ಅಧಿಕಾರ ಹಂಚಿಕೆ ಸೂತ್ರಕ್ಕೆ ಮೊರೆ ಹೋಗಿದ್ದಾರೆ.  ಅಧ್ಯಕ್ಷ ಹಾಗೂ ಉಪಾಧ್ಯಕ್ಷೆಯ ಆಯ್ಕೆ ಹೊರಬೀಳುತ್ತಿದಂತೆ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಜೈಕೃಷ್ಣ ಹಾಜರಿದ್ದರು. ಶಾಸಕರಾದ ಎಚ್.ಎಸ್. ಮಹದೇವಪ್ರಸಾದ್, ಸಿ. ಪುಟ್ಟರಂಗಶೆಟ್ಟಿ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಕೆ. ರವಿಕುಮಾರ್, ಸದಾಶಿವಮೂರ್ತಿ, ಶಿವಕುಮಾರ್ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷೆಯನ್ನು ಅಭಿನಂದಿಸಿದರು.

ಕುಡಿಯುವ ನೀರಿಗೆ ಆದ್ಯತೆ`ತಾಲ್ಲೂಕಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ತಲೆದೋರಿದೆ. ಗ್ರಾಮೀಣರಿಗೆ ಸಮರ್ಪಕವಾಗಿ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡುತ್ತೇನೆ~ ಎಂದು ನೂತನ ಅಧ್ಯಕ್ಷ ಬಸವಣ್ಣ ತಿಳಿಸಿದರು. `ಅಧಿಕಾರ ಹಂಚಿಕೆ ಸೂತ್ರದ ಅನ್ವಯ ಹತ್ತು ತಿಂಗಳು ಅಧ್ಯಕ್ಷನಾಗಿ ಉತ್ತಮ ಸೇವೆ ಸಲ್ಲಿಸುವಂತೆ ವರಿಷ್ಠರು ಸೂಚಿಸಿದ್ದಾರೆ. ತಾಲ್ಲೂಕಿನ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ದುಡಿಯುತ್ತೇನೆ. ಗ್ರಾಮೀಣ ನೈರ್ಮಲ್ಯ ಕಾಪಾಡಲು ಒತ್ತು ನೀಡಲಾಗುವುದು~ ಎಂದು ಪ್ರತಿಕ್ರಿಯಿಸಿದರು.ಪಂಚಾಯಿತಿ ವ್ಯಾಪ್ತಿಯಲ್ಲಿ ಸಮಸ್ಯೆಗಳಿವೆ. ಶೀಘ್ರದಲ್ಲಿಯೇ ಪ್ರವಾಸ ಕೈಗೊಂಡು ಪರಿಶೀಲನೆ ನಡೆಸುತ್ತೇವೆ. ಕುಡೊಯುವ ನೀರಿನ ಸಮಸ್ಯೆ ಜತೆಗೆ  ಜನರ ಆರೋಗ್ಯ ಸುಧಾರಣೆಗೆ ಆದ್ಯತೆ ನೀಡಲಾಗುವುದು ಎಂದರಲ್ಲದೇ, ಇದಕ್ಕೆ ಸದಸ್ಯರ ಹಾಗೂ ಜನರ ಸಹಕಾರ ಅಗತ್ಯ ಎಂದು ನುಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry