ಸೋಮವಾರ, ಜೂಲೈ 6, 2020
28 °C

ಅನಿಯಮಿತ ವಿದ್ಯುತ್ ಕಡಿತಕ್ಕೆ ಆಕ್ರೋಶ .ಬೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅನಿಯಮಿತ ವಿದ್ಯುತ್ ಕಡಿತಕ್ಕೆ ಆಕ್ರೋಶ .ಬೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ

ಚಿತ್ರದುರ್ಗ: ವಿದ್ಯುತ್ ಕಡಿತ ಗೊಳಿಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಮಂಗಳವಾರ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಈಗಾಗಲೇ ಬೇಸಿಗೆ ಆರಂಭವಾಗಿದ್ದು ನೀರಿನ ಸಮಸ್ಯೆ ಎದುರಾಗಿದೆ. ಹಳ್ಳಿಗಳಲ್ಲಿ ವಿದ್ಯುತ್ ಕಡಿತದಿಂದ ನೀರಾವರಿಗೆ ಹಾಗೂ ರೈತ ಮಕ್ಕಳ ವಿದ್ಯಾಭ್ಯಾಸಕ್ಕೆ ತೀವ್ರ ತೊಂದರೆಯಾಗಿದೆ. ದಿನದಲ್ಲಿ 3 ಗಂಟೆಯು ಸಹ ವಿದ್ಯುತ್ ಸರಬರಾಜು ಮಾಡುತ್ತಿಲ್ಲ ಎಂದು ಬೆಸ್ಕಾಂ ಕಚೇರಿ ಆವರಣದಲ್ಲಿ ಧರಣಿ ಕುಳಿತು ಬೆಸ್ಕಾಂ ವಿರುದ್ಧ ಧಿಕ್ಕಾರ ಕೂಗಿದರು.

 

ಪ್ರತಿಭಟನೆ ನೇತೃತ್ವವಹಿಸಿದ್ದ ರೈತಸಂಘ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ರೈತರಿಗೆ ದಿನದ 24 ಗಂಟೆ ಗುಣಮಟ್ಟದ ವಿದ್ಯುತ್ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದರೂ ಇದುವರೆಗೂ ಗುಣಮಟ್ಟದ ವಿದ್ಯುತ್ ನೀಡದೇ ರೈತರನ್ನು ವಂಚಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದೆ ಇಂಧನ ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ಹಾಗೂ ಹಾಲಿ ಇಂಧನ ಸಚಿವೆ ಶೋಭಾ ಕರಂದ್ಲಾಜೆ ರೈತರಿಗೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುತ್ತೇವೆ ಎಂದು ಭರವಸೆ ನೀಡುತ್ತಾ ರೈತರನ್ನು ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ವಿದ್ಯುತ್ ಕಡಿತವನ್ನು ತಕ್ಷಣ ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ಬಾರಿ ಕೋಲು ಹಿಡಿದು ಪ್ರತಿಭಟನೆ ಮಾಡುವ ಬದಲು ಚಪ್ಪಲಿ ಹಿಡಿದು ಪ್ರತಿಭಟನೆ ಮಾಡಲಾಗುವುದು ಎಂದು ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಸಿದರು.

 

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ, ತಾಲ್ಲೂಕು ದಂಡಾಧಿಕಾರಿ ಇದ್ದರೂ ರೈತರ ಮೇಲಿನ ದೌರ್ಜನ್ಯ ನಿಂತಿಲ್ಲ. ಇಂತಹ ಹುದ್ದೆಗಳು ಅಗತ್ಯವೇ ಎಂದು ಪ್ರಶ್ನಿಸಿದರು. ರೈತಸಂಘ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎಚ್.ಆರ್. ಬಸವರಾಜಪ್ಪ, ಈಚಗಟ್ಟದ ಸಿದ್ಧವೀರಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ, ಚಿಕ್ಕಕಬ್ಬಿಗೆರೆ ನಾಗರಾಜ್, ಎಸ್. ಬಯಲಪ್ಪ ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.