ಶುಕ್ರವಾರ, ಏಪ್ರಿಲ್ 16, 2021
20 °C

ಅನುಮತಿಯಿಲ್ಲದ 24 ಆಯುರ್ವೇದ ಕಾಲೇಜು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿರುವ 58 ಆಯುರ್ವೇದ ಕಾಲೇಜುಗಳ ಪೈಕಿ 24 ಕಾಲೇಜುಗಳು ಆಯುಷ್ ಇಲಾಖೆಯಿಂದ ಅಗತ್ಯ ಅನುಮತಿ ಪಡೆದಿಲ್ಲ ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್ ಕೆ.ಎಂ. ನಟರಾಜ್ ಹೈಕೋರ್ಟ್‌ಗೆ ಸೋಮವಾರ ತಿಳಿಸಿದರು.ಅನುಮತಿ ಇಲ್ಲದೆ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿರುವ ಶಿವಮೊಗ್ಗದ ಟಿಎಂಎಇ ಖಾಸಗಿ ಆಯುರ್ವೇದ ಕಾಲೇಜಿಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠದ ಎದುರು ನಟರಾಜ್ ವಾದ ಮಂಡಿಸಿದರು.`ಈ ಕಾಲೇಜಿನ ವಿರುದ್ಧ ಈಗಾಗಲೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ಅನುಮತಿ ಪಡೆಯದ 24 ಕಾಲೇಜುಗಳ ಪೈಕಿ 10 ಕಾಲೇಜುಗಳು ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶದ ಅನ್ವಯ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುತ್ತಿವೆ. ಅನುಮತಿ ಪಡೆಯದ ಆರು ಕಾಲೇಜುಗಳು ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿಲ್ಲ' ಎಂದು ವಿವರಣೆ ನೀಡಿದರು.ಮಧ್ಯಂತರ ಆದೇಶವನ್ನು ತೆರವುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಬಹುದು ಎಂದು ಭಾರತೀಯ ವೈದ್ಯಪದ್ಧತಿ ಮಂಡಳಿ ಪರ ವಕೀಲರಿಗೆ ನ್ಯಾಯಪೀಠ ನಿರ್ದೇಶನ ನೀಡಿತು.ಅನುಮತಿ ಇಲ್ಲದೆ ಒಟ್ಟು 314 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿರುವ ಎಂಟು ಕಾಲೇಜುಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ಸೂಚಿಸಿದ ಪೀಠ, ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ 11ಕ್ಕೆ ಮುಂದೂಡಿತು. ಕೈಗೊಂಡಿರುವ ಕ್ರಮಗಳ ಬಗ್ಗೆ ಎರಡು ವಾರಗಳಲ್ಲಿ ವಸ್ತುಸ್ಥಿತಿ ವರದಿ ಸಲ್ಲಿಸುವಂತೆಯೂ ನಿರ್ದೇಶಿಸಿತು.ಸರ್ಕಾರ, ಬಿಬಿಎಂಪಿಗೆ ನೋಟಿಸ್

`ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಹೊಸ ಟೆಂಡರ್‌ಗೆ ಅನುಮತಿ ನೀಡುವ ಅಧಿಕಾರ ಮುಖ್ಯಮಂತ್ರಿಯವರಿಗೆ ಇಲ್ಲ. ಐದು ಕೋಟಿ ರೂಪಾಯಿಗಿಂತ ಹೆಚ್ಚಿನ ಮೌಲ್ಯದ ಈ ಟೆಂಡರ್‌ಗೆ ಸಚಿವ ಸಂಪುಟದ ಒಪ್ಪಿಗೆ ಅಗತ್ಯ. ವಿಚಾರಣೆ ಮುಗಿಯುವವರೆಗೆ ಹೊಸ ಟೆಂಡರ್ ಅನುಷ್ಠಾನಕ್ಕೆ ತಡೆಯಾಜ್ಞೆ ನೀಡಬೇಕು' ಎಂದು ಕೋರಿ ಬಿ.ಆರ್. ಗಣೇಶ್ ಮತ್ತು ಇತರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.ಈಗ ತ್ಯಾಜ್ಯ ವಿಲೇವಾರಿಯ ಹೊಣೆ ಹೊತ್ತಿರುವ ಗುತ್ತಿಗೆದಾರರು, ಹಲವಾರು ವರ್ಷಗಳಿಂದ ಈ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಕೋಟ್ಯಂತರ ರೂಪಾಯಿ ಹಣ ಹೂಡಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ, ಬಿಬಿಎಂಪಿ ಹಾಗೂ ಸರ್ಕಾರಕ್ಕೆ ನೋಟಿಸ್ ಜಾರಿಗೆ ಆದೇಶಿಸಿ, ವಿಚಾರಣೆಯನ್ನು ಡಿಸೆಂಬರ್ 3ಕ್ಕೆ ಮುಂದೂಡಲಾಗಿದೆ.ಸರ್ಕಾರಕ್ಕೆ ತರಾಟೆ

ಜಾಹೀರಾತು ಫಲಕಗಳನ್ನು ಅಳವಡಿಸುವುದಕ್ಕೆ ಸಂಬಂಧಿಸಿದಂತೆ ಇಡೀ ರಾಜ್ಯಕ್ಕೆ ಅನ್ವಯ ಆಗುವಂಥ ಮಾದರಿ ಉಪನಿಯಮ ರೂಪಿಸಲು ವಿಫಲವಾಗಿರುವ ಸರ್ಕಾರ ಸೋಮವಾರ ಹೈಕೋರ್ಟ್ ಕೆಂಗಣ್ಣಿಗೆ ಗುರಿಯಾಯಿತು.`ಪಂಚಾಯತ್ ರಾಜ್ ಕಾಯ್ದೆಯ ಅಡಿಯಲ್ಲಿ ಈ ಉಪನಿಯಮಗಳನ್ನು ರೂಪಿಸಬೇಕು ಎಂದು ನಿರ್ದೇಶನ ನೀಡಿ ಆರು ವಾರಗಳು ಸಂದಿವೆ. ಆದರೆ ಇದುವರೆಗೂ ಸರ್ಕಾರ ಈ ನಿಟ್ಟಿನಲ್ಲಿ ಮುಂದಡಿ ಇಟ್ಟಿಲ್ಲ' ಎಂದು ನ್ಯಾಯಮೂರ್ತಿ ರಾಮಮೋಹನ ರೆಡ್ಡಿ ಅವರಿದ್ದ ಏಕಸದಸ್ಯ ಪೀಠ ಅಸಮಾಧಾನ ವ್ಯಕ್ತಪಡಿಸಿತು.

ಸೂಕ್ತ ಪರಿಶೀಲನೆ ನಡೆಸದೆ ಸರ್ಕಾರ ವಿವಿಧ ಜಾಹೀರಾತು ಫಲಕಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸುತ್ತಿದೆ. ಆ ಫಲಕಗಳು ಎಲ್ಲಿ ತಲೆ ಎತ್ತುತ್ತಿವೆ ಎಂಬ ಬಗ್ಗೆಯೂ ಅಗತ್ಯ ಪರಿಶೀಲನೆ ನಡೆಸುವುದಿಲ್ಲ. ರಾಷ್ಟ್ರೀಯ ಹೆದ್ದಾರಿಗಳ ಪಕ್ಕದಲ್ಲಿ ಅಳವಡಿಸಲಾದ ಕೆಲವು ಜಾಹೀರಾತು ಫಲಕಗಳು ವಾಹನ ಚಾಲಕರ ಏಕಾಗ್ರತೆಗೆ ಭಂಗ ತರುತ್ತಿವೆ ಎಂದು ನ್ಯಾಯಮೂರ್ತಿಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾಗುವ ಮಾರ್ಗದಲ್ಲಿ ಎಷ್ಟು ಜಾಹೀರಾತು ಫಲಕಗಳನ್ನು ಅಳವಡಿಸಲಾಗಿದೆ ಎಂಬ ಕುರಿತು ವಿವರ ನೀಡುವಂತೆ ಸರ್ಕಾರಕ್ಕೆ ಸೂಚನೆ ನೀಡಿದ ನ್ಯಾಯಪೀಠ, ವಿಚಾರಣೆಯನ್ನು ಮುಂದೂಡಿತು.ವಿಚಾರಣೆ ಮುಂದಕ್ಕೆ:

`ಬೆಂಗಳೂರು - ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್' ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ತನಿಖೆಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ನೀಡಿರುವ ಆದೇಶ ರದ್ದು ಕೋರಿ ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್‌ನ (ನೈಸ್) ಮುಖ್ಯಸ್ಥ ಅಶೋಕ್ ಖೇಣಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರಕ್ಕೆ ಮುಂದೂಡಿದೆ.ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಅರ್ಜಿ ಸಲ್ಲಿಸಿರುವ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು, ಲೋಕಾಯುಕ್ತ ತನಿಖೆಗೆ ತಡೆಯಾಜ್ಞೆ ನೀಡಬಾರದು ಎಂದು ಮನವಿ ಮಾಡಿದ್ದಾರೆ. ಪ್ರಕರಣದ ಆರೋಪಿಗಳ ವಿರುದ್ಧ ಈಗಾಗಲೇ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾಗಿದೆ.

`ಬಿಡಿಎ ಎಂಜಿನಿಯರುಗಳು ಭ್ರಷ್ಟಾಚಾರದ ಜನಕರು'ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಎಂಜಿನಿಯರ್‌ಗಳು ಎಲ್ಲ ರೀತಿಯ ಭ್ರಷ್ಟಾಚಾರದ ಜನಕರು ಎಂದು ಹೈಕೋರ್ಟ್ ಸೋಮವಾರ ಮೌಖಿಕವಾಗಿ ಆಕ್ರೋಶ ವ್ಯಕ್ತಪಡಿಸಿತು.ಸೌತ್ ಸಿಟಿ ಗ್ರೂಪ್ ಹೌಸಿಂಗ್ ಅಪಾರ್ಟ್‌ಮೆಂಟ್ ಮಾಲೀಕರ ಸಂಘ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಮಮೋಹನ ರೆಡ್ಡಿ ನೇತೃತ್ವದ ಏಕಸದಸ್ಯ ಪೀಠ, ಈ ಅಭಿಪ್ರಾಯ ವ್ಯಕ್ತಪಡಿಸಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.