ಮಂಗಳವಾರ, ಮೇ 24, 2022
30 °C

ಅಪಘಾತ: ಇಬ್ಬರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಉಪ್ಪಾರಪೇಟೆ ಮತ್ತು ಕೆ.ಆರ್.ಪುರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಕಳೆದ 24 ಗಂಟೆಗಳಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಬೈಕ್ ಸವಾರ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ.ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಳೆ ಮದ್ರಾಸ್ ರಸ್ತೆಯ ದುರ್ಗಾ ಪರಮೇಶ್ವರಿ ದೇವಸ್ಥಾನದ ಬಳಿ ಸೋಮವಾರ ರಾತ್ರಿ ನಡೆದಿದೆ.ಥಣಿಸಂದ್ರ ನಿವಾಸಿ ರಾಜು (30) ಮೃತಪಟ್ಟವರು. ಕೂಲಿ ಕೆಲಸ ಮಾಡುತ್ತಿದ್ದ ಅವರು ಆಂಧ್ರಪ್ರದೇಶದ ಮಾರಪಲ್ಲಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅವರ ಬೈಕ್‌ಗೆ ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆಯಿತು. ಡಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದ ರಾಜು ತಲೆ ಮೇಲೆ ಅದೇ ವಾಹನದ ಚಕ್ರ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟರು. ಲಾರಿ ಚಾಲಕನನ್ನು ಬಂಧಿಸಿ, ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೆ.ಆರ್.ಪುರ ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿದೆ.ಮತ್ತೊಂದು ಘಟನೆ: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.ಬಸ್ ನಿಲ್ದಾಣದಲ್ಲಿ ನಡೆದು ಹೋಗುತ್ತಿದ್ದ ಸುಮಾರು 25 ವರ್ಷದ ಯುವಕನಿಗೆ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆಯಿತು. ಪರಿಣಾಮ ಆ ವ್ಯಕ್ತಿಯ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟ ಎಂದು ಪೊಲೀಸರು ತಿಳಿಸಿದ್ದಾರೆ.ಮೃತನ ಗುರುತು ಪತ್ತೆಯಾಗಿಲ್ಲ. ಬಸ್ (285ಸಿಎ) ಸಿಟಿ ಮಾರುಕಟ್ಟೆಯಿಂದ ಮೆಜೆಸ್ಟಿಕ್ ಮಾರ್ಗವಾಗಿ ರಾಜಾನುಕುಂಟೆ ಸಮೀಪದ ಜಿಂಕೆ ಬಚ್ಚಹಳ್ಳಿಗೆ ಹೋಗುತ್ತಿತ್ತು. ಚಾಲಕನನ್ನು ಬಂಧಿಸಿ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಎಂದು ಪೊಲೀಸರು ಹೇಳಿದ್ದಾರೆ. ಉಪ್ಪಾರಪೇಟೆ ಸಂಚಾರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.