ಬುಧವಾರ, ಜೂನ್ 23, 2021
28 °C

ಅಪಘಾತ: ಉದ್ಯಮಿ ಸೇರಿ ನಾಲ್ವರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಹಲವೆಡೆ ಕಳೆದ 24 ಗಂಟೆಗಳಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಸೇರಿದಂತೆ ನಾಲ್ಕು ಮಂದಿ ಮೃತಪಟ್ಟಿದ್ದಾರೆ.ಟಿಪ್ಪರ್ ಹರಿದು ಸಾಫ್ಟ್‌ವೇರ್ ಎಂಜಿನಿಯರ್ ಸಾವನ್ನಪ್ಪಿರುವ ಘಟನೆ ಮಾರತ್‌ಹಳ್ಳಿ ಹೊರ ವರ್ತುಲ ರಸ್ತೆಯ ಕಾಡುಬೀಸನಹಳ್ಳಿ ಜಂಕ್ಷನ್ ಬಳಿ ಬುಧವಾರ ಸಂಜೆ ನಡೆದಿದೆ.ಕೇರಳ ಮೂಲದ ಸಂಗೀತ್‌ಲಾಲ್ (32) ಮೃತಪಟ್ಟವರು. ವೈಟ್‌ಫೀಲ್ಡ್ ಸಮೀಪದ ಸಾಫ್ಟ್‌ವೇರ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಅವರು ಮಾರತ್‌ಹಳ್ಳಿಯಲ್ಲಿ ವಾಸವಿದ್ದರು. ಕಂಪೆನಿಯಿಂದ ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದಾಗ  ದುರ್ಘಟನೆ ನಡೆದಿದೆ.ಟಿಪ್ಪರ್ ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಅವರ ಮೇಲೆ ಟಿಪ್ಪರ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟಿಪ್ಪರ್ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಸಂಗೀತ್‌ಲಾಲ್ ಅವರ ವಿವಾಹವಾಗಿ ಒಂದೂವರೆ ವರ್ಷವಾಗಿತ್ತು. ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದ್ದು, ಅವರು ನಗರಕ್ಕೆ ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ. ಏರ್‌ಪೋರ್ಟ್ ಸಂಚಾರ ಠಾಣೆ ಇನ್‌ಸ್ಪೆಕ್ಟರ್ ಎಲ್.ನಾಗೇಶ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.ಬ್ಯಾಟರಾಯನಪುರ: ಮೈಸೂರು ರಸ್ತೆಯಲ್ಲಿ ಬುಧವಾರ ಮಧ್ಯಾಹ್ನ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಜಯನ್ (59) ಎಂಬುವರು ಸಾವನ್ನಪ್ಪಿದ್ದಾರೆ.ರಾಮಮೂರ್ತಿನಗರ ನಿವಾಸಿಯಾದ ಜಯನ್ ಬಡಗಿಯಾಗಿದ್ದರು. ಅವರು ಕುಂಬಳಗೋಡು ಕಡೆಯಿಂದ ರಾಮಮೂರ್ತಿನಗರಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆಯಿತು. ಪರಿಣಾಮ ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ಹೇಳಿದ್ದಾರೆ. ಬ್ಯಾಟರಾಯನಪುರ ಸಂಚಾರ ಠಾಣೆ ಪೊಲೀಸರು ಲಾರಿ ಚಾಲಕನನ್ನು ಬಂಧಿಸಿ ವಾಹನವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.ಪೀಣ್ಯ: ಲಗ್ಗೆರೆ ಸಮೀಪದ ಲಿಂಗಯ್ಯ ಬಡಾವಣೆಯಲ್ಲಿ ಬುಧವಾರ ಬೆಳಿಗ್ಗೆ ಟೆಂಪೊ ಡಿಕ್ಕಿ ಹೊಡೆದು ನಾಗಮ್ಮ (68) ಎಂಬುವರು ಮೃತಪಟ್ಟಿದ್ದಾರೆ.ಹಿಮ್ಮುಖವಾಗಿ ವಾಹನ ಚಾಲನೆ ಮಾಡುತ್ತಿದ್ದ ಟೆಂಪೊ ಚಾಲಕ, ಮನೆಯ ಮುಂದೆ ಕುಳಿತಿದ್ದ ನಾಗಮ್ಮ ಅವರಿಗೆ ವಾಹನ ಗುದ್ದಿಸಿದ್ದಾನೆ. ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟರು. ಚಾಲಕ ಪರಾರಿಯಾಗಿದ್ದು, ವಾಹನವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೀಣ್ಯ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮಡಿವಾಳ: ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ನಿಯಂತ್ರಣ ತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಮಂಗಳವಾರ ಸಂಜೆ ನಡೆದಿದೆ.ಸರ್ಜಾಪುರ ರಸ್ತೆ ಸಮೀಪದ ಅರಳೂರು ನಿವಾಸಿ ಸೋಮಶೇಖರರೆಡ್ಡಿ (48) ಮೃತಪಟ್ಟವರು. ಕೆಲಸದ ನಿಮಿತ್ತ ದ್ವಿಚಕ್ರ ವಾಹನದಲ್ಲಿ ಜಕ್ಕಸಂದ್ರಕ್ಕೆ ಬಂದಿದ್ದ ಅವರು ಮನೆಗೆ ವಾಪಸ್ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಈ ಘಟನೆ ನಡೆದ ಸಂದರ್ಭದಲ್ಲಿ ಅವರು ಹೆಲ್ಮೆಟ್ ಧರಿಸಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮಡಿವಾಳ ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.