ಸೋಮವಾರ, ಮೇ 23, 2022
24 °C

ಅವಕಾಶ ಸದುಪಯೋಗ ಪಡಿಸಿಕೊಳ್ಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ತಮಗೆ ದೊರಕಿರುವ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಆಡಳಿತದ ಅಧಿಕಾರವನ್ನು ಸದುಪಯೋಗಪಡಿಸಿಕೊಳ್ಳಿ. ಆ ಮೂಲಕ ಮಹಿಳೆಯರು ತಮ್ಮ ಸಾಮರ್ಥ್ಯ ತೋರಬೇಕು ಎಂದು ವಿಧಾನಪರಿಷತ್ ವಿರೋಧ ಪಕ್ಷ ನಾಯಕಿ ಮೋಟಮ್ಮ ಇಲ್ಲಿ ಹೇಳಿದರು.ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ಆಯೋಗ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.ವಿವಿಧ ಸಂಘಟನೆಯಲ್ಲಿರುವ ಮಹಿಳೆಯರು ಇತರ ಮಹಿಳೆಯರಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳ ಕುರಿತು ಮಾಹಿತಿ ನೀಡಬೇಕು. ಅವರಲ್ಲೂ ಶಕ್ತಿ ತುಂಬಿ ಮುಖ್ಯವಾಹಿನಿಗೆ ಕರೆತರಬೇಕು ಎಂದರು.ಜಿಲ್ಲಾ ಪಂಚಾಯಿತಿಯಲ್ಲಿ ಮಹಿಳಾ ಸದಸ್ಯರು ಪಕ್ಷ ಭೇದ ಮರೆತು ಸಮಸ್ಯೆ ಪರಿಹಾರಕ್ಕೆ ಶ್ರಮಿಸಬೇಕು. ಮಹಿಳೆಯರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕು. ಆತ್ಮವಿಶ್ವಾಸ ಮತ್ತು ಧೈರ್ಯದಿಂದ ತಮ್ಮ ಹಕ್ಕು ಚಲಾಯಿಸಬೇಕೆಂದು ಹೇಳಿದರು.ಸ್ತ್ರೀಶಕ್ತಿ ಸಂಘಟನೆಯಿಂದ ಮಹಿಳೆಯರು ಆರ್ಥಿಕವಾಗಿ ಸಬಲರಾರಾಗಿದ್ದಾರೆ. ಉತ್ತಮ ಸಮಾಜಕಟ್ಟುವ ಕೆಲಸದಲ್ಲಿ ನಿರತರಾಗಿ, ಮಕ್ಕಳನ್ನು ಉತ್ತಮ ಪ್ರಜೆಗಳಾಗಿಸಬೇಕು ಎಂದು ಮನವಿ ಮಾಡಿದರು.ಚುನಾವಣೆ ಸಂದರ್ಭದಲ್ಲಿ ಸ್ತ್ರೀಶಕ್ತಿ ಗುಂಪುಗಳು ಹಣಕ್ಕಾಗಿ ವಿವಿಧ ಪಕ್ಷಗಳಲ್ಲಿ ಹಣದ ಬೇಡಿಕೆ ಮುಂದಿಡುವುದನ್ನು ಕೈಬಿಟ್ಟು ಸ್ವಾಭಿಮಾನ ಪ್ರದರ್ಶಿಸಬೇಕು ಎಂದರು. ಭಾಗ್ಯಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸರ್ಕಾರ ಸೀರೆ ವಿತರಣೆ ಮಾಡಿರುವುದನ್ನು ಅವರು ವಿರೋಧಿಸಿದರು.ವಿವಿಧ ಸಂಘ, ಸಂಸ್ಥೆಗಳಿಗೆ ಕೋಟ್ಯಂತರ ರೂಪಾಯಿ ನೀಡುವ ಸರ್ಕಾರ ಸ್ತ್ರೀಶಕ್ತಿ ಸಂಘಗಳ ಬಲವರ್ಧನೆಗೆ ಹೆಚ್ಚು ಅನುದಾನ ನೀಡಬೇಕು ಎಂದು ಅವರು ಹೇಳಿದರು. ಶಾಸಕ ಸಿ.ಟಿ.ರವಿ ಅಧ್ಯಕ್ಷತೆ ವಹಿಸಿದ್ದರು.ವಿಧಾನಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ವಕೀಲರಾದ ಆರುಂಧತಿ, ಡಿ.ಮಮತಾ ಉಪನ್ಯಾಸ ನೀಡಿದರು.ತೆಂಗಿನ ನಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ರಂಗನಾಥ, ನಗರಸಭೆ ಅಧ್ಯಕ್ಷ  ಕೆ.ಶ್ರೀನಿವಾಸ, ಜಾತ್ಯಾತೀತ ಜನತಾದಳ ಮಹಿಳಾ ವಿಭಾಗ ಮುಖಂಡರಾದ ಪದ್ಮಾತಿಮ್ಮೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಗಟ್ರೂಡ್‌ವೇಗಸ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಸವರಾಜ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.