ಅವಿಶ್ವಾಸ ಗೊತ್ತುವಳಿ ಸಿಎಲ್‌ಪಿಯಲ್ಲಿ ನಿರ್ಧಾರ

7

ಅವಿಶ್ವಾಸ ಗೊತ್ತುವಳಿ ಸಿಎಲ್‌ಪಿಯಲ್ಲಿ ನಿರ್ಧಾರ

Published:
Updated:

ಬೆಳಗಾವಿ: `ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸುವ ಕುರಿತು ಬುಧವಾರ ನಡೆಯುವ ಕಾಂಗ್ರೆಸ್ ಶಾಸಕಾಂಗ ಪಕ್ಷದ  (ಸಿಎಲ್‌ಪಿ) ಸಭೆಯಲ್ಲಿ ನಿರ್ಧರಿಸಲಾಗುವುದು' ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ ಹೇಳಿದರು.ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು ಇಲ್ಲಿಗೆ ಆಗಮಿಸಿರುವ ಪರಮೇಶ್ವರ, ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.ಅವಿಶ್ವಾಸ ಗೊತ್ತುವಳಿ ಮಂಡಿಸುವುದಕ್ಕೆ ಸದನ ಆರಂಭವಾಗುವುದಕ್ಕೆ ಒಂದು ಗಂಟೆ ಮೊದಲು ವಿಧಾನಸಭಾಧ್ಯಕ್ಷರಿಗೆ ನೋಟಿಸ್ ನೀಡಬಹುದು. ಈ ವಿಷಯದಲ್ಲಿ ಗೊಂದಲ ಬೇಡ ಎಂದ ಅವರು, ಅಂತಿಮವಾಗಿ ಬುಧವಾರ ಬೆಳಿಗ್ಗೆ ನಡೆಯುವ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದರು.ಪ್ರಾದೇಶಿಕ ಅಸಮತೋಲನಾ ನಿವಾರಣೆ ಸಂಬಂಧ ಡಾ. ಡಿ.ಎಂ.ನಂಜುಂಡಪ್ಪ ಅವರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಅದರ ಅನುಷ್ಠಾನ ಕುರಿತ ಪ್ರಗತಿಯ ವಿವರ ನೀಡುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು. ಉತ್ತರ ಕರ್ನಾಟಕ ಭಾಗದಲ್ಲಿ ಎಷ್ಟರಮಟ್ಟಿಗೆ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ, ಎಷ್ಟು ಹಣ ಖರ್ಚು ಮಾಡಲಾಗಿದೆ ಎಂಬುದರ ಬಗ್ಗೆಯೂ ಮಾಹಿತಿ ನೀಡುವಂತೆ ಅಧಿವೇಶನದಲ್ಲಿ ಒತ್ತಾಯಿಸಲಾಗುವುದು ಎಂದು ಹೇಳಿದರು.ರಾಜಕೀಯವಾಗಿ ಅನೇಕ ಏರುಪೇರುಗಳಾಗಿವೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಬಿ.ಶ್ರೀರಾಮುಲು ಬಿಜೆಪಿ ತೊರೆದಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜಕೀಯವಾಗಿ ಅನೇಕ ಗೊಂದಲಗಳು ಸೃಷ್ಟಿಯಾಗಿವೆ. ಅಭಿವೃದ್ಧಿ ಮತ್ತು ಆಡಳಿತದ ಮೇಲೂ ಪರಿಣಾಮ ಬೀರಿದೆ. ಈ ಅಂಶಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲಾಗುವುದು ಎಂದು ಪರಮೇಶ್ವರ ತಿಳಿಸಿದರು.ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ನಾಲ್ಕು ವರ್ಷಗಳ ಅವಧಿಯಲ್ಲಿನ ವೈಫಲ್ಯಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡಲಾಗುವುದು. ಅಧಿಕಾರಕ್ಕೆ ಬರುವ ಮುನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಬಿಜೆಪಿ ನೀಡಿದ್ದ ಭರವಸೆಗಳು ಈವರೆಗೂ ಈಡೇರಿಲ್ಲ. ಹೊಸ ಯೋಜನೆಗಳ ಅನುಷ್ಠಾನವಾಗಿಲ್ಲ. ಮುಂಬರುವ ಚುನಾವಣೆ ದೃಷ್ಟಿಯಿಂದ ಇವೆಲ್ಲವುಗಳ ಬಗ್ಗೆ ಜನರಿಗೆ ತಿಳಿಸುವ ಕೆಲಸ ಕಾಂಗ್ರೆಸ್ ಮಾಡಲಿದೆ ಎಂದು ಹೇಳಿದರು.ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ಸೂಚನೆ ಸಿಕ್ಕಿದ್ದರಿಂದಲೇ ಬಿಜೆಪಿಯ ಹಲವು ಶಾಸಕರು, ಸಚಿವರು ಕಾಂಗ್ರೆಸ್ ಪಕ್ಷ ಸೇರಲು ಒಲವು ತೋರಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ ಗೆಲ್ಲುವಂಥ ಅಭ್ಯರ್ಥಿಗಳು ಕಾಂಗ್ರೆಸ್‌ನಲ್ಲಿ ಇಲ್ಲ. ಇಂಥ ಕ್ಷೇತ್ರಗಳಲ್ಲಿ ಇತರೆ ಪಕ್ಷಗಳಿಂದ ಸೇರ್ಪಡೆಯಾಗುವ ಗೆಲ್ಲುವ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.ಕೋಮಾ ಸ್ಥಿತಿಗಳಿದ ಸರ್ಕಾರ: `ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರ ಕೋಮಾ ಸ್ಥಿತಿಯಲ್ಲಿದೆ. ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ಅಲ್ಪಮತಕ್ಕೆ ಇಳಿದಿದ್ದು, ಬಿಎಸ್‌ಆರ್ ಕಾಂಗ್ರೆಸ್ ಹಾಗೂ ಕೆಜೆಪಿ ಜೊತೆಗೆ ಗುರುತಿಸಿ ಕೊಂಡಿರುವ ಶಾಸಕರ ಬಲದಿಂದ ಅನೈತಿಕವಾಗಿ ಮುಂದುವರಿದಿದೆ' ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.ಬಿಜೆಪಿ ನೇತೃತ್ವದ ಸರ್ಕಾರದಿಂದ ರಾಜ್ಯದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ. ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಆಪ್ತರಿಗೆ ಇನ್ನಷ್ಟು ಮೇಯಿಕೊಂಡು ಬರಲಿ ಎಂದು ಸಂಪುಟದಲ್ಲಿ ಬಿಟ್ಟಿದ್ದಾರೆ ಎಂದು ಆಪಾದಿಸಿದ ಅವರು, 2010ರ ಅಕ್ಟೋಬರ್ ನಂತರ ರಾಜ್ಯದಲ್ಲಿ ನಿಜವಾದ ಸರ್ಕಾರ ಅಸ್ತಿತ್ವದಲ್ಲಿಲ್ಲ ಎಂದರು.

ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಟಿ.ಬಿ.ಜಯಚಂದ್ರ, ಶಾಸಕ ಎನ್.ಎ.ಹ್ಯಾರಿಸ್, ಫಿರೋಜ ಶೇಠ್ ಈ ಸಂದರ್ಭದಲ್ಲಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry