ಗುರುವಾರ , ಜೂನ್ 4, 2020
27 °C

ಅಶೋಕ್: ದಾಖಲೆ ಸಂಗ್ರಹಕ್ಕೆ 3 ತಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಶೋಕ್: ದಾಖಲೆ ಸಂಗ್ರಹಕ್ಕೆ 3 ತಂಡ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಸ್ವಾಧೀನದಲ್ಲಿದ್ದ ಭೂಮಿಯನ್ನು ಅಕ್ರಮವಾಗಿ ಖರೀದಿಸಿ, ಲಾಭ ಪಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರ್.ಅಶೋಕ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ಪೊಲೀಸರು ಚುರುಕುಗೊಳಿಸಿದ್ದು, ದಾಖಲೆಗಳನ್ನು ಕಲೆಹಾಕಲು ಮೂರು ತಂಡಗಳನ್ನು ರಚಿಸಲಾಗಿದೆ.ಲೋಕಾಯುಕ್ತದ ಬೆಂಗಳೂರು ನಗರ ಡಿವೈಎಸ್‌ಪಿ ಅಬ್ದುಲ್ ಅಹದ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದ ತನಿಖಾ ವರದಿಯನ್ನು ನವೆಂಬರ್ 5ರೊಳಗೆ ಸಲ್ಲಿಸುವಂತೆ `ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ~ (ಲೋಕಾಯುಕ್ತ) ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಗಡುವು ವಿಧಿಸಿರುವುದರಿಂದ ತೀವ್ರಗತಿಯಲ್ಲಿ ತನಿಖೆ ಸಾಗಿದೆ.ನಗರದ ಲೊಟ್ಟೆಗೊಲ್ಲಹಳ್ಳಿಯಲ್ಲಿ ರಾಜಮಹಲ್ ವಿಲಾಸ್ ಬಡಾವಣೆ ನಿರ್ಮಾಣಕ್ಕಾಗಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ 23 ಗುಂಟೆ ಭೂಮಿಯನ್ನು ಕಾನೂನುಬಾಹಿರವಾಗಿ ಖರೀದಿಸಿ, ನಂತರ ಅದನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವ ಆದೇಶ ಮಾಡಿಸಿಕೊಂಡ ಆರೋಪ ದೂರಿನಲ್ಲಿದೆ. ಎರಡು ಪ್ರತ್ಯೇಕ ಸರ್ವೆ ನಂಬರ್‌ಗಳಲ್ಲಿನ 9 ಮತ್ತು 14 ಗುಂಟೆ ಭೂಮಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ.ಬಿಡಿಎ, ಉಪನೋಂದಣಿ ಅಧಿಕಾರಿ ಕಚೇರಿ ಮತ್ತು ನಗರಾಭಿವೃದ್ಧಿ ಇಲಾಖೆಗಳಿಂದ ದಾಖಲೆಗಳನ್ನು ಸಂಗ್ರಹಿಸಿದ ನಂತರವೇ ತನಿಖೆ ಮಹತ್ವದ ಘಟ್ಟ ತಲುಪಲು ಸಾಧ್ಯ. ಈ ಹಿನ್ನೆಲೆಯಲ್ಲಿ ದಾಖಲೆಗಳನ್ನು ಸಂಗ್ರಹಿಸಲು ಮೂವರು ಪೊಲೀಸ್ ಇನ್‌ಸ್ಪೆಕ್ಟರ್‌ಗಳ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಿರುವ ಬೆಂಗಳೂರು ನಗರ ಲೋಕಾಯುಕ್ತ ಎಸ್‌ಪಿ ಪಿ.ಕೆ.ಶಿವಶಂಕರ್, ಬಿಡಿಎ, ಉಪನೋಂದಣಿ ಅಧಿಕಾರಿ ಕಚೇರಿ ಮತ್ತು ನಗರಾಭಿವೃದ್ಧಿ ಇಲಾಖೆಗಳಿಂದ ದಾಖಲೆ ಕಲೆಹಾಕುವ ಜವಾಬ್ದಾರಿ ಒಪ್ಪಿಸಿದ್ದಾರೆ.ದೂರಿನ ಹಿಂದೆ ರಾಜಕೀಯ: ಸಿಎಂ

ಗೃಹ ಸಚಿವ ಆರ್.ಅಶೋಕ ಅವರ ವಿರುದ್ಧ ಭೂ ಹಗರಣದ ಆರೋಪದ ಮೇಲೆ ಸಲ್ಲಿಕೆಯಾಗಿರುವ ಖಾಸಗಿ ದೂರು ರಾಜಕೀಯ ಪ್ರೇರಿತವಾದುದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಆರೋಪಿಸಿದರು.ಭಾನುವಾರ ಬೆಳಿಗ್ಗೆ ಮೈಸೂರು ಪ್ರವಾಸಕ್ಕೆ ಹೊರಡುವ ಮುನ್ನ ತಮ್ಮ ಅಧಿಕೃತ ನಿವಾಸದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, `ಈ ಹಿಂದೆ ಎರಡು ಬಾರಿ ಗೃಹ ಸಚಿವರ ವಿರುದ್ಧ ದೂರು ನೀಡುವ ಪ್ರಯತ್ನ ನಡೆದಿತ್ತು. ಆರೋಪಗಳನ್ನೂ ಮಾಡಲಾಗಿತ್ತು. ಮೂರನೇ ಬಾರಿ ದೂರು ಸಲ್ಲಿಕೆಯಾಗಿದೆ. ಈ ಎಲ್ಲ ಬೆಳವಣಿಗೆಗಳ ಹಿಂದೆ ರಾಜಕೀಯ ಅಡಗಿದೆ~ ಎಂದರು.ಲೋಕಾಯುಕ್ತ ಪೊಲೀಸರು `ಪ್ರಥಮ ಮಾಹಿತಿ ವರದಿ~ (ಎಫ್‌ಐಆರ್) ದಾಖಲಿಸಿರುವ ಹಿನ್ನೆಲೆಯಲ್ಲಿ ಗೃಹ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ವಿರೋಧ ಪಕ್ಷಗಳ ನಾಯಕರು ಒತ್ತಾಯಿಸುತ್ತಿರುವ ಬಗ್ಗೆ ಪ್ರಶ್ನಿಸಿದಾಗ. ಆ ಕುರಿತು ಪ್ರತಿಕ್ರಿಯಿಸುವುದಿಲ್ಲ ಎಂದು ಮುಖ್ಯಮಂತ್ರಿಯವರು ಉತ್ತರಿಸಿದರು.`ಗೃಹ ಸಚಿವರಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ. ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸುವವರೆಗೂ ನಾನು ಆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ~ ಎಂದ ಅವರು, ಹೆಚ್ಚಿನ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.