ಬುಧವಾರ, ನವೆಂಬರ್ 20, 2019
24 °C

ಆನಂದ ಸಿಂಗ್ ಬಿಜೆಪಿಯಿಂದಲೇ ಸ್ಪರ್ಧೆ

Published:
Updated:

ಬಳ್ಳಾರಿ: ಪಕ್ಷ ತ್ಯಜಿಸುವುದಾಗಿ ತಿಳಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್  ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ವಿಜಯನಗರ ಕ್ಷೇತ್ರದಿಂದ  ಬಿಜೆಪಿಯಿಂದಲೇ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಅವರು ಇದೇ 15ರಂದು ನಾಮಪತ್ರ ಸಲ್ಲಿಸಲಿದ್ದಾರೆ.ಇತ್ತೀಚೆಗೆ ನಡೆದ ನಗರ ಸ್ಥಳೀಯ ಸಂಸ್ಥೆ ಚುನಾವಣೆಯ ವೇಳೆ ಪ್ರಚಾರದಿಂದಲೇ ದೂರ ಉಳಿದಿದ್ದ ಅವರು, ಚುನಾವಣಾ ರಾಜಕೀಯದಿಂದ ದೂರ ಸರಿಯುವುದಾಗಿ ತಿಳಿಸಿದ್ದರು. ನಂತರ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರ ಪ್ರಕಟಿಸಿ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೂ, ಶಾಸಕ, ಸಚಿವ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದರು.`ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರು ಬಿಜೆಪಿ ಬಿಡದಂತೆ ಮನವೊಲಿಸಿದ್ದು, ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಗೆ ಆದ್ಯತೆ ನೀಡುವಂತೆ ಕೋರಿದ್ದಾರೆ. ವರಿಷ್ಠರ ಒತ್ತಡಕ್ಕೆ ಮಣಿದು ಪಕ್ಷದಲ್ಲೇ ಮುಂದುವರಿಸಲು ನಿರ್ಧರಿಸಿದ್ದೇನೆ' ಎಂದು ಅವರು ದೂರವಾಣಿ ಮೂಲಕ `ಪ್ರಜಾವಾಣಿ'ಗೆ ಖಚಿತಪಡಿಸಿದ್ದಾರೆ.ಜಿಲ್ಲೆಯ ಕಂಪ್ಲಿ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಸೂಕ್ತ ಅಭ್ಯರ್ಥಿಯ ಆಯ್ಕೆಗೆ ಸಂಬಂಧಿಸಿದಂತೆ ವರಿಷ್ಠರು ಜವಾಬ್ದಾರಿ ವಹಿಸಿದ್ದು, ಜಿಲ್ಲೆಯ ವಿವಿಧೆಡೆ ಪಕ್ಷ ಬಲಪಡಿಸಲು ಶ್ರಮಿಸುವುದಾಗಿ ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)