ಮಂಗಳವಾರ, ಮೇ 24, 2022
31 °C

ಆನೆ ದಾಳಿ: ಶವ ಇಟ್ಟು ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ರೈತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಮತ್ತು ಕಾಡಾನೆ ಹಾವಳಿ ತಡೆಗಟ್ಟಬೇಕು ಎಂದು ಆಗ್ರಹಿಸಿ ಮೃತ ರೈತನ ಕುಟುಂಬದವರು ಹಾಗೂ ಗ್ರಾಮಸ್ಥರು ಶನಿವಾರ ಸಂಜೆ ತಾಲ್ಲೂಕಿನ ಗೊಲ್ಲಹಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.ಜಮೀನು ಕೆಲಸ ಮುಗಿಸಿಕೊಂಡು ಶುಕ್ರವಾರ ರಾತ್ರಿ ಮನೆಗೆ ವಾಪಸಾಗುತ್ತಿದ್ದ ಗೊಲ್ಲಹಳ್ಳಿಯ ಬಳಿ ರೈತ ಬಸವರಾಜು ದಾಳಿಗೆ ತುತ್ತಾಗಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ, ಆಸ್ಪತ್ರೆಯಲ್ಲಿ ಮೃತಪಟ್ಟರು.ಇದರಿಂದ ರೊಚ್ಚಿಗೆದ್ದಿದ್ದ ಗ್ರಾಮಸ್ಥರು ಮತ್ತು ಮೃತನ ಕುಟುಂಬದ ಸದಸ್ಯರು, ಗೊಲ್ಲಹಳ್ಳಿಯಲ್ಲಿ ಶವ ಇಟ್ಟು ಪ್ರತಿಭಟನೆ ನಡೆಸಿ, ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಆಕ್ರೋಶ ವ್ಯಕ್ತಪಡಿಸಿದರು. ಮೃತ ರೈತನ ಕುಟುಂಬದ ಸದಸ್ಯರ ರೋದನ ಮುಗಿಲು ಮುಟ್ಟಿತ್ತು.ಸ್ಥಳಕ್ಕೆ ಜಿಲ್ಲಾಧಿಕಾರಿ ಖುದ್ದು ಭೇಟಿ ನೀಡಿ, ಪರಿಹಾರ ನೀಡುವವರೆಗೂ ಸ್ಥಳದಿಂದ ಶವ ತೆಗೆಯುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದರು. ಹೆದ್ದಾರಿಯಲ್ಲಿ ಶವ ಇಟ್ಟು ಪ್ರತಿಭಟನೆ ನಡೆಸಲು ಮುಂದಾದಾಗ ಪೊಲೀಸರು ಅವಕಾಶ ನೀಡಲಿಲ್ಲ. ಪದೇ ಪದೇ ಕಾಡಾನೆಗಳು ದಾಳಿ ನಡೆಸುತ್ತಿದ್ದರೂ ಅರಣ್ಯ ಇಲಾಖೆ ಸಿಬ್ಬಂದಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.  ಸ್ಥಳಕ್ಕೆ ಭೇಟಿ ನೀಡಿ ಮೃತ ರೈತನ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಜಿಲ್ಲಾಧಿಕಾರಿ ಡಾ.ಸಿ.ಸೋಮಶೇಖರ್, ಸೋಮವಾರದೊಳಗೆ ರೂ.2 ಲಕ್ಷ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ನಂತರ ಗ್ರಾಮಸ್ಥರು ಶವವನ್ನು ಅಂತ್ಯಸಂಸ್ಕಾರ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.