ಭಾನುವಾರ, ಜೂನ್ 13, 2021
21 °C

ಆರ್ಥಿಕ ಶಿಸ್ತು ಬೆಳೆಸಿಕೊಳ್ಳಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಗೃಹ ನಿರ್ಮಾಣ ಸಹಕಾರ ಸಂಘಗಳು ಆರ್ಥಿಕ ಶಿಸ್ತು ಬೆಳೆಸಿಕೊಂಡಾಗ ಮಾತ್ರ ಸದಸ್ಯರಿಗೆ ಉತ್ತಮ ಸೇವೆ ನೀಡಲು ಸಾಧ್ಯ ಎಂದು ಅಪೆಕ್ಸ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಸಲಹೆ ಮಾಡಿದರು.

ನಗರದ ಜಿಲ್ಲಾ ಸ್ಕೌಟ್ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಗೃಹ ನಿರ್ಮಾಣ ಸಹಕಾರ ಸಂಘ ಮತ್ತು ಪ್ರಥಮ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಹಳಷ್ಟು ಗೃಹ ನಿರ್ಮಾಣ ಸಹಕಾರ ಸಂಘಗಳು ಇಂದು ಭ್ರಷ್ಟಚಾರದಲ್ಲಿ ಮುಳುಗಿವೆ. ಸಮಾಜದಲ್ಲಿ ಜವಾಬ್ದಾರಿ ಸ್ಥಾನ ಹೊಂದಿರುವ ಶಿಕ್ಷಕರು, ಸಂಘದಲ್ಲಿ ಆರ್ಥಿಕ ಶಿಸ್ತು ರೂಢಿಸಿಕೊಂಡು ಸದಸ್ಯರಿಗೆ ಉತ್ತಮ ಸೇವೆ ಕಲ್ಪಿಸಬೇಕು ಎಂದರು.

ಗೃಹ ನಿರ್ಮಾಣ ಸಹಕಾರ ಸಂಘ ಕೇವಲ ನಿವೇಶನ ನೀಡುವುದಕ್ಕಷ್ಟೇ ಸೀಮಿತಗೊಳ್ಳಬಾರದು; ಸದಸ್ಯರಿಗೆ ಮನೆಗಳನ್ನು ಕಟ್ಟಿಕೊಡುವುದಕ್ಕೆ ಮುಂದಾಗಬೇಕು. ಸಾಧ್ಯವಾದರೆ ಅಪಾರ್ಟ್‌ಮೆಂಟ್ ನಿರ್ಮಿಸುವ ಯೋಜನೆಯನ್ನೂ ಕೈಗೊಳ್ಳಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ 9 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರಿದ್ದಾರೆ; ಸಂಘದ ಸದಸ್ಯರಾದವರು ಕೇವಲ 550 ಮಾತ್ರ. ಈ ಸಂಖ್ಯೆಯನ್ನು ಇನ್ನಷ್ಟು ಹೆಚ್ಚುಗೊಳಿಸಿ, ಸರ್ಕಾರದ ಸಹಾಯವನ್ನು ಪಡೆದುಕೊಳ್ಳಬಹುದು ಎಂದು ಸಲಹೆ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಶುಭಾ ಕೃಷ್ಣಮೂರ್ತಿ, ಡಿಸಿಸಿ ಬ್ಯಾಂಕ್ ನಿರ್ದೇಶಕಿ ಸರಸ್ವತಿ ನಾಗರಾಜ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಟಿ. ರವಿ, ಪ್ರವರ್ತಕರಾದ ತಿಮ್ಮಪ್ಪ, ಎನ್.ಎಸ್. ಸತ್ಯನಾರಾಯಣ, ಕೆ.ಎಸ್. ನಟರಾಜ್, ಹಾಲೇಶಪ್ಪ ಮತ್ತಿತರರು ಉಪಸ್ಥಿತರಿದ್ದರು.

ಸಂಘದ ಮುಖ್ಯ ಪ್ರವರ್ತಕ ಮಹಾಬಲೇಶ್ವರ ಹೆಗಡೆ ಅಧ್ಯಕ್ಷತೆ ವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.