ಆ. 10, 11ಕ್ಕೆ ಭರಚುಕ್ಕಿ ಜಲಪಾತೋತ್ಸವ

ಬುಧವಾರ, ಜೂಲೈ 24, 2019
28 °C
ಅಗತ್ಯ ಸಿದ್ಧತೆ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ವಿ. ಸಾವಿತ್ರಿ ಸೂಚನೆ

ಆ. 10, 11ಕ್ಕೆ ಭರಚುಕ್ಕಿ ಜಲಪಾತೋತ್ಸವ

Published:
Updated:

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತ ಪ್ರದೇಶದಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಡಿ ಆಗಸ್ಟ್ 10 ಮತ್ತು 11ರಂದು ಜಲಪಾತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಲಪಾತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಜನಪದ ಹಾಗೂ ವಿವಿಧ ಪ್ರಕಾರದ ಸಾಂಸ್ಕೃತಿಕ ಕಾರ್ಯಕ್ರಮ ಒಳಗೊಂಡ ಜಲಪಾತೋತ್ಸವ ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು.ಜಿಲ್ಲಾಧಿಕಾರಿ ಎಂ.ವಿ. ಸಾವಿತ್ರಿ ಮಾತನಾಡಿ, `ಗಡಿ ಜಿಲ್ಲೆಯಲ್ಲಿ ಹಲವು ಪ್ರಸಿದ್ಧ ಪ್ರವಾಸಿ ತಾಣಗಳಿವೆ. ಅವುಗಳ ಬಗ್ಗೆ ಪ್ರವಾಸಿಗರಿಗೆ ಅರಿವು ಇಲ್ಲ. ಇದರ ಪರಿಣಾಮ ಪ್ರವಾಸೋದ್ಯಮ ನಿರೀಕ್ಷಿತಮಟ್ಟದಲ್ಲಿ ಅಭಿವೃದ್ಧಿ ಕಂಡಿಲ್ಲ. ಭರಚುಕ್ಕಿ ವ್ಯಾಪ್ತಿಯಲ್ಲಿಯೂ ಹಲವು ಪ್ರಸಿದ್ಧ ಧಾರ್ಮಿಕ ಸ್ಥಳಗಳಿವೆ. ಪ್ರವಾಸಿಗರನ್ನು ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಸ್. ಮಹದೇವಪ್ರಸಾದ್ ಅವರ ಸೂಚನೆ ಮೇರೆಗೆ ಜಲಪಾತೋತ್ಸವ ಹಮ್ಮಿಕೊಳ್ಳಲು ತೀರ್ಮಾನಿಸ ಲಾಗಿದೆ' ಎಂದು ಹೇಳಿದರು. 2007ರ ಆಗಸ್ಟ್ 11 ಮತ್ತು 12ರಂದು ಪ್ರಥಮ ಬಾರಿಗೆ ಜಲಪಾತೋತ್ಸವ ನಡೆದಿತ್ತು. ಈಗ ಎರಡನೇ ಬಾರಿಗೆ ಭರಚುಕ್ಕಿ ಜಲಪಾತೋತ್ಸವ ನಡೆಯುತ್ತಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ. ಅವರ ಅನುಕೂಲಕ್ಕಾಗಿ ಯಾವುದೇ ಲೋಪವಾಗದಂತೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದರು.ಜಲಪಾತೋತ್ಸವದ ವೇಳೆ ಯಾವುದೇ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು. ಪ್ರವಾಸಿಗರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು. ಆರೋಗ್ಯ ಸೇವೆಗೆ ವೈದ್ಯರು, ವೈದ್ಯಕೀಯ ಸಿಬ್ಬಂದಿ ಮತ್ತು ತುರ್ತುವಾಹನ ವ್ಯವಸ್ಥೆ ಕಲ್ಪಿಸಬೇಕು. ಅಗತ್ಯ ಔಷಧಿ ಸಂಗ್ರಹಿಸಿಟ್ಟು ಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚಿಸಿದರು.ಕೊಳ್ಳೇಗಾಲ ನಗರಸಭೆಯಿಂದ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಶುಚಿತ್ವ ಕಾಪಾಡಬೇಕು. ಎರಡು ದಿನದ ಕಾರ್ಯಕ್ರಮ ನಡೆಯಲಿದೆ. ಪ್ರತಿದಿನ ಸ್ವಚ್ಛತೆಗೆ ಒತ್ತು ನೀಡಬೇಕು ಎಂದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಈ ಬಾರಿಯೂ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು. ವಿದ್ಯುತ್ ಇಲಾಖೆಯಿಂದ ನಿರಂತರ ವಿದ್ಯುತ್ ಪೂರೈಕೆ ಹಾಗೂ ಜನರೇಟರ್ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.ಸುಗಮ ಸಂಚಾರ ವ್ಯವಸ್ಥೆ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಖಾಸಗಿ ವಾಹನಗಳಿಗೆ ನಿರ್ಬಂಧ ಹೇರಬೇಕು. ಸತ್ತೇಗಾಲ ಹ್ಯಾಂಡ್‌ಪೋಸ್ಟ್ ಬಳಿಯಿಂದ ಕೆಎಸ್‌ಆರ್‌ಟಿಸಿಯಿಂದ ಬಸ್ ವ್ಯವಸ್ಥೆ ಕಲ್ಪಿಸಬೇಕು. ಪ್ರವಾಸಿಗರು ತಮ್ಮ ವಾಹನಗಳನ್ನು ಸತ್ತೇಗಾಲ ಹ್ಯಾಂಡ್‌ಪೋಸ್ಟ್ ಬಳಿಯಲ್ಲಿ ನಿಲುಗಡೆ ಮಾಡಲು ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಹಾಗೂ ಸಿಸಿ ಟಿವಿ ಅಳವಡಿಸಬೇಕು ಎಂದು ಅವರು ಹೇಳಿದರು.ಚಾಮರಾಜನಗರ ಹಾಗೂ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿ ಬರುವ ಸರ್ಕಾರಿ ಮತ್ತು ಇಲಾಖಾ ವಸತಿ ಗೃಹಗಳನ್ನು ಕಾಯ್ದಿರಿಸಬೇಕು. ಗಣ್ಯರನ್ನು ಶಿಷ್ಟಾಚಾರದಂತೆ ಆಹ್ವಾನಿಸಿ, ವಸತಿ ವ್ಯವಸ್ಥೆ ಮಾಡಬೇಕು. ಜತೆಗೆ, ಪೊಲೀಸ್ ಭದ್ರತೆ ಕಲ್ಪಿಸಬೇಕು. ಜಲಪಾತಕ್ಕೆ ಬೆಳಕಿನ ವ್ಯವಸ್ಥೆ ಮತ್ತು ಭರಚುಕ್ಕಿ ಗೇಟ್‌ನಿಂದ ವೇದಿಕೆವರೆಗೂ ವಿದ್ಯುತ್ ಅಲಂಕಾರ ಮಾಡಬೇಕು ಎಂದರು.ಮದ್ಯ ಮತ್ತು ಮಾಂಸಾಹಾರ ಆಹಾರಗಳ ಮಾರಾಟದ ಮೇಲೆ ನಿರ್ಬಂಧ ಹೇರಬೇಕು. ಎರಡು ದಿನಗಳು ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಗೆ ಆಕರ್ಷಿಸಬೇಕು. ಜಿಲ್ಲೆಯ ಪ್ರಮುಖ ಸ್ಥಳಗಳಿಗೆ ಪ್ರವಾಸೋದ್ಯಮ ಇಲಾಖೆ ಮತ್ತು ಕೆಎಸ್‌ಆರ್‌ಟಿಸಿ ಜತೆಗೂಡಿ ಪ್ರವಾಸ ಕಾರ್ಯಕ್ರಮ ಆಯೋಜಿಸಬೇಕು ಎಂದು ನಿರ್ದೇಶನ ನೀಡಿದರು.ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆರ್.ಆರ್. ಜನ್ನು, ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಚ್. ಚಂದ್ರಶೇಖರ್, ಉಪ ವಿಭಾಗಾಧಿಕಾರಿ ಎಚ್. ಎಸ್. ಸತೀಶ್‌ಬಾಬು, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಜನಾರ್ದನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಮಂಜಪ್ಪ, ಮಲೆಮಹದೇಶ್ವರ ವನ್ಯಜೀವಿಧಾಮದ ಉಪ ಅರಣ್ಯ ಸಂರಕ್ಷಣಾ ಧಿಕಾರಿ ಜಾವೀದ್ ಮುಮ್ತಾಜ್ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry