ಮಂಗಳವಾರ, ಮೇ 17, 2022
26 °C

ಇಂದು ಗಣ್ಯರ ಜಾಮೀನು ಅರ್ಜಿ ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನ್ಯಾಯಾಂಗ ಬಂಧನದಲ್ಲಿ ಇರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವರಾದ ಎಸ್.ಎನ್.ಕೃಷ್ಣಯ್ಯ ಶೆಟ್ಟಿ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹಾಗೂ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಡಾ.ಎಚ್.ಎನ್.ಕೃಷ್ಣ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೋಮವಾರ ಹೈಕೋರ್ಟ್‌ನಲ್ಲಿ ನಡೆಯಲಿದೆ.ಭೂಹಗರಣಕ್ಕೆ ಸಂಬಂಧಿಸಿದಂತೆ ಮೊದಲ ಇಬ್ಬರು ಆರೋಪಿಗಳಿಗೆ ಲೋಕಾಯುಕ್ತ ವಿಶೇಷ ಕೋರ್ಟ್ ಜಾಮೀನು ನಿರಾಕರಿಸಿರುವ ಹಿನ್ನೆಲೆಯಲ್ಲಿ 10 ದಿನಗಳಿಂದ ಅವರು ನಗರದ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದಾರೆ. ಈ ಆರೋಪಿಗಳ ಪರ ವಕೀಲರ ವಾದ ಮುಗಿದಿದ್ದು, ದೂರುದಾರ ಸಿರಾಜಿನ್ ಬಾಷಾ ಅವರ ಪರ ವಕೀಲ ಸಿ.ಎಚ್.ಹನುಮಂತರಾಯ ಅವರು ವಾದ ಮುಂದುವರಿಸಲಿದ್ದಾರೆ.ಅದೇ ರೀತಿ, ಕಟ್ಟಾ ಹಾಗೂ ಕೃಷ್ಣ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೋಮವಾರ ಆರಂಭಗೊಳ್ಳಲಿದೆ. ಕೆಐಎಡಿಬಿ ಭೂಹಗರಣದ ವಿವಾದದ ಸುಳಿಯಲ್ಲಿ ಸಿಕ್ಕಿರುವ ಕಟ್ಟಾ ಅವರಿಗೆ ವೈದ್ಯಕೀಯ ಕಾರಣಕ್ಕೆ ಜಾಮೀನು ನೀಡಲು ಲೋಕಾಯುಕ್ತ ಕೋರ್ಟ್ ನಿರಾಕರಿಸಿದೆ. ಆಯೋಗ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಷ್ಣ ಅವರಿಗೆ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿದೆ.ಈ ಮಧ್ಯೆ, ಕಟ್ಟಾ ಕ್ಯಾನ್ಸರ್ ಸಂಬಂಧ ಹೆಚ್ಚಿನ ಚಿಕಿತ್ಸೆಗಾಗಿ ಭಾನುವಾರ ಸಂಜೆ ಮುಂಬೈನ ಲೀಲಾವತಿ ಆಸ್ಪತ್ರೆಗೆ ತೆರಳಿದ್ದಾರೆ. ಅವರ ಜೊತೆ ಅವರ ಆಪ್ತ ಸಹಾಯಕ ಹಾಗೂ ನಾಲ್ವರು ಪೊಲೀಸರು ತೆರಳಿರುವುದಾಗಿ ಮೂಲಗಳು ತಿಳಿಸಿವೆ.ಭಾರತದಲ್ಲಿನ ಯಾವುದೇ ಆಸ್ಪತ್ರೆಯಲ್ಲಿ ಪೊಲೀಸ್ ಬೆಂಗಾವಲಿನೊಂದಿಗೆ ಚಿಕಿತ್ಸೆ ಪಡೆಯಲು ವಿಶೇಷ ಕೋರ್ಟ್ ಅನುಮತಿ ನೀಡಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.