ಇಂದು ಸದನ ನಾಯಕರ ಸಭೆ

7
ಕಾವೇರಿ ನದಿ ನೀರು ಹಂಚಿಕೆ ಅಧಿಸೂಚನೆ

ಇಂದು ಸದನ ನಾಯಕರ ಸಭೆ

Published:
Updated:

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಸಂಬಂಧ ನ್ಯಾಯಮಂಡಳಿ ನೀಡಿರುವ ಅಂತಿಮ ಐತೀರ್ಪಿನ ಜಾರಿಗೆ ಅಧಿಸೂಚನೆ ಹೊರಡಿಸದಂತೆ ಕೇಂದ್ರದ ಮೇಲೆ ಒತ್ತಡ ಹೇರುವ ಸಂಬಂಧ ಚರ್ಚಿಸಲು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಶನಿವಾರ ವಿಧಾನಮಂಡಲದ ಉಭಯ ಸದನಗಳ ನಾಯಕರ ಸಭೆ ಕರೆದಿದ್ದಾರೆ.ಮುಖ್ಯಮಂತ್ರಿಗಳ ಗೃಹ ಕಚೇರಿ `ಕೃಷ್ಣಾ'ದಲ್ಲಿ ಮಧ್ಯಾಹ್ನ 3ಕ್ಕೆ ಸಭೆ ನಡೆಯಲಿದ್ದು, ಪ್ರಧಾನಿ ಡಾ.ಮನಮೋಹನ್‌ಸಿಂಗ್ ಭೇಟಿಗಾಗಿ ಸರ್ವಪಕ್ಷಗಳ ನಿಯೋಗವನ್ನು ದೆಹಲಿಗೆ ಕರೆದುಕೊಂಡು ಹೋಗುವ ಬಗ್ಗೆ ಚರ್ಚಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.ನ್ಯಾಯಮಂಡಳಿ ನೀಡಿರುವ ಐತೀರ್ಪಿನ ಜಾರಿಗೆ ಈ ತಿಂಗಳ ಅಂತ್ಯದ ಒಳಗಾಗಿ ಅಧಿಸೂಚನೆ ಹೊರಡಿಸುವುದಾಗಿ ಕೇಂದ್ರದ ಜಲಸಂಪನ್ಮೂಲ ಇಲಾಖೆ ಈಚೆಗೆ ತಿಳಿಸಿದೆ. ಆದರೆ, ತರಾತುರಿಯಲ್ಲಿ ಅಧಿಸೂಚನೆ ಹೊರಡಿಸಬಾರದು, ಕರ್ನಾಟಕದ ಅಭಿಪ್ರಾಯವನ್ನೂ ಪಡೆಯಬೇಕು ಎಂಬುದು ರಾಜ್ಯ ಸರ್ಕಾರದ ವಾದ.ಐತೀರ್ಪಿನ ಪುನರ್ ಪರಿಶೀಲನೆಗಾಗಿ ರಾಜ್ಯ ಸರ್ಕಾರ ಈಗಾಗಲೇ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿದೆ. ಅಲ್ಲದೆ ಸುಪ್ರೀಂ ಕೋರ್ಟ್‌ನಲ್ಲೂ ಇದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಹೀಗಾಗಿ ಅಧಿಸೂಚನೆ ಹೊರಡಿಸಬಾರದು ಎಂದು ಕೇಂದ್ರದ ಮೇಲೆ ಒತ್ತಡ ಹೇರಲು ಸರ್ಕಾರ ತೀರ್ಮಾನಿಸಿದೆ.ತಮಿಳುನಾಡಿಗೆ 12 ಟಿಎಂಸಿ ಅಡಿ ನೀರು ಬಿಡುವಂತೆ ಕಾವೇರಿ ಉಸ್ತುವಾರಿ ಸಮಿತಿ ನೀಡಿರುವ ಆದೇಶ, ಸುಪ್ರೀಂ ಕೋರ್ಟ್ ತೀರ್ಪು, ಕಾವೇರಿ ನದಿ ನೀರು ಬಿಡದಂತೆ ರೈತರು ನಡೆಸಿದ ಹೋರಾಟ ಸೇರಿದಂತೆ ಹಲವು ಅಂಶಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ.ಪ್ರಧಾನಿ ಮುಂದಿನ ವಾರ ಉಭಯ ಸದನಗಳ ಸರ್ವಪಕ್ಷ ನಾಯಕರ ನಿಯೋಗವನ್ನು ದೆಹಲಿಗೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ ಎಂದು ಗೊತ್ತಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry