ಗುರುವಾರ , ಮೇ 6, 2021
23 °C

ಉಡುಪಿ ಮಠದಲ್ಲಿನ ಸಾಮಾಜಿಕ ಬಹಿಷ್ಕಾರ:ಶಾಸನ ರೂಪಿಸುವಂತೆ ಒತ್ತಾಯಿಸಿ ಹೋರಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಉಡುಪಿ ಮಠದಲ್ಲಿ ಪಂಕ್ತಿ ಬೇಧ, ಮಡೆ ಸ್ನಾನ ನಿಷೇಧ, ಜಾತಿ ತಾರತಮ್ಯ, ಅಸ್ಪೃಶ್ಯತಾ ಆಚರಣೆ, ಸಾಮಾಜಿಕ ಬಹಿಷ್ಕಾರಗಳಿಗೆ ತಡೆ ಸೇರಿದಂತೆ ಜನಸಂಖ್ಯೆಗೆ ಅನುಗುಣವಾಗಿ ದಲಿತರ ಅಭಿವೃದ್ಧಿಗೆ ನೆರವು ನೀಡಲು ಕೇಂದ್ರ ಸರ್ಕಾರ `ಶಾಸನ~ ರೂಪಿಸುವಂತೆ ಒತ್ತಾಯಿಸಿ ಅಂಬೇಡ್ಕರ್ ಜನ್ಮ ದಿನವಾದ ಇದೇ 14 ರಂದು ರಾಜ್ಯದಾದ್ಯಂತ ಹೋರಾಟ ನಡೆಸಲು ಸಿಪಿಐ(ಎಂ) ನಿರ್ಧರಿಸಿದೆ.ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಿಪಿಐ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಮಾರುತಿ ಮಾನ್ಪಡೆ, `ರಾಜ್ಯದ ಮುಜರಾಯಿ ಇಲಾಖೆ ಅಧೀನದಲ್ಲಿನ 250ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ವರ್ಣಬೇಧ ಪದ್ಧತಿ ನಡೆಯುತ್ತಿದೆ. ಈ ಪದ್ಧತಿಯನ್ನು ಸಚಿವರು ಹಾಗೂ ಬಿಜೆಪಿ ಶಾಸಕರೇ ಬೆಂಬಲ ಸೂಚಿಸುವ ಮೂಲಕ ಸಂವಿಧಾನದ ಆಶಯಗಳನ್ನು ಉಲ್ಲಂಘನೆ ಮಾಡುತ್ತಿದ್ದಾರೆ~ ಎಂದು ಆರೋಪಿಸಿದರು.`ಮಡೆ ಸ್ನಾನದ ಹೆಸರಿನಲ್ಲಿ ಜನರಲ್ಲಿ ಮೂಢನಂಬಿಕೆಗಳನ್ನು ಬಿತ್ತುತ್ತಿರುವುದು ವಿಷಾದನೀಯ. ದೇಶವು ಸ್ವಾತಂತ್ರ್ಯ ಪಡೆದು 64 ವರ್ಷಗಳಾದರೂ ಸಮಾಜ ತಲೆ ತಗ್ಗಿಸುಂತಹ ಜಾತಿ ತಾರತಮ್ಯ, ಅಸ್ಪೃಶ್ಯತಾ ಆಚರಣೆ, ದಲಿತರ ಮೇಲಿನ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಲೇ ಇವೆ.ದೇಶದಲ್ಲಿ ಪ್ರತಿ ವರ್ಷ ಸುಮಾರು 30 ಸಾವಿರ ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತಿವೆ. ಅದರಲ್ಲೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ~ ಎಂದು ದೂರಿದರು.ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಎನ್.ನಾಗರಾಜ್, ಬೆಂಗಳೂರು ಉತ್ತರ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಗೋಪಾಲಕೃಷ್ಣ ಅರಳಹಳ್ಳಿ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.