ಭಾನುವಾರ, ಮೇ 9, 2021
26 °C

ಉದ್ಯಾನಕ್ಕೆ ಮೀಸಲಿಟ್ಟ ಜಾಗ ಕಬಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ಸರ್ಕಾರಿ ಜಾಗವನ್ನು ಅತಿಕ್ರಮಿಸುತ್ತಿರುವ ಪ್ರಕರಣಗಳು ಸಾಮಾನ್ಯವಾಗಿರುವ ಜಿಲ್ಲೆಯಲ್ಲಿ, ಇದೀಗ ಖಾಸಗಿ ಲೇಔಟ್‌ಗಳಲ್ಲಿ ಉದ್ಯಾನಕ್ಕಾಗಿ ಮೀಸಲಿಟ್ಟ ಜಾಗವನ್ನು ಕಬಳಿಸಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ.ಜಿಲ್ಲೆಯ ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರವಾಗಿರುವ ಗುರುಮಠಕಲ್ ಪಟ್ಟಣದಲ್ಲಿ ಯೋಜನಾ ಪ್ರಾಧಿಕಾರದ ಅನುಮತಿ ಇಲ್ಲದೇ ಲೇಔಟ್ ರಚನೆ ಮಾಡಿದ್ದಲ್ಲದೇ, ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಟ್ಟ ಜಾಗೆಯನ್ನು ಅಧಿಕಾರ ದುರುಪಯೋಗ ಮಾಡುವ ಮೂಲಕ ಕಬಳಿಕೆ ಮಾಡಲಾಗಿದೆ.ಗುರುಮಠಕಲ್ ಪಟ್ಟಣದ 86/1 ಸರ್ವೇ ನಂಬರ್‌ನಲ್ಲಿ ನಗರ ಯೋಜನಾ ಪ್ರಾಧಿಕಾರದ ಅನುಮತಿ ಇಲ್ಲದೇ ಲೇಔಟ್ ರಚನೆ ಮಾಡಲಾಗಿದೆ. ಇದೂ ಅಲ್ಲದೇ ಈ ಲೇಔಟ್‌ನಲ್ಲಿ ಉದ್ಯಾನಕ್ಕೆ ಮೀಸಲಿಟ್ಟಿದ್ದ 24 ಹಾಗೂ 25 ನೇ ನಿವೇಶನಗಳನ್ನು ಬೇರೆಯವರಿಗೆ ಮಾರಾಟ ಮಾಡಲಾಗಿದ್ದು, ಇದಕ್ಕೆ ಅನುಮೋದನೆ ನೀಡುವ ಮೂಲಕ ಪಟ್ಟಣ ಪಂಚಾಯಿತಿಯ ಮಾಜಿ ಅಧ್ಯಕ್ಷರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕವು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದೆ.ಇದೇ ರೀತಿ 82/2 ಹಾಗೂ 87/2 ಸರ್ವೇ ನಂಬರ್‌ನ ಜಮೀನಿನಲ್ಲಿ 80 ನಿವೇಶನಗಳನ್ನು ರಚಿಸಲಾಗಿದ್ದು, 78, 79 ಹಾಗೂ 80 ನೇ ನಿವೇಶನಗಳನ್ನು ಸಮುದಾಯ ಭವನ, ಶಾಲೆ, ದೇವಸ್ಥಾನ, ಉದ್ಯಾನ ಹಾಗೂ ಆಟದ ಮೈದಾನಕ್ಕೆ ಮೀಸಲಿಡಲಾಗಿತ್ತು. ಆದರೆ ಇವುಗಳನ್ನೂ ಅಕ್ರಮವಾಗಿ ಮಾರಾಟ ಮಾಡಲಾಗಿದೆ ಎಂದು ತಿಳಿಸಿದೆ.ಕಳೆದ ಹಲವಾರು ವರ್ಷಗಳಿಂದ ಈ ರೀತಿಯ ಅಕ್ರಮಗಳು ನಡೆಯುತ್ತಲೇ ಇದ್ದು, ಅಧಿಕಾರ ದುರುಪಯೋಗ ಆಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಗುರುಮಠಕಲ್ ಪಟ್ಟಣ ಪಂಚಾಯಿತಿಯು ಸಾರ್ವಜನಿಕ ಸ್ಥಳಗಳ ರಕ್ಷಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಪಟ್ಟಣದ ರಕ್ಷಣೆ ಹಾಗೂ ಅಭಿವೃದ್ಧಿಗೆ ಚಿಂತನೆ ಮಾಡಬೇಕಿದ್ದ ಪಟ್ಟಣ ಪಂಚಾಯಿತಿ ಸದಸ್ಯರು, ಅಧಿಕಾರ ದುರುಪಯೋಗ ಮಾಡಿಕೊಂಡು ಅಕ್ರಮಗಳಲ್ಲಿ ಶಾಮೀಲಾಗಿದ್ದಾರೆ ಎಂದು ದೂರಿದೆ. ಈ ನಿಟ್ಟಿನಲ್ಲಿ ಸಮಗ್ರ ತನಿಖೆ ಮಾಡಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಪಟ್ಟಣದ ಸರ್ವಾಂಗೀಣ ವಿಕಾಸಕ್ಕೆ ಒತ್ತು ನೀಡಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ವೀರಬಸವಂತರೆಡ್ಡಿ ಮುದ್ನಾಳ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಿದ್ದಾರೆ.ಸಾರ್ವಜನಿಕರಿಗೆ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಗುರುಮಠಕಲ್ ಪಟ್ಟಣವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಜವಾಬ್ದಾರಿ ಪಟ್ಟಣ ಪಂಚಾಯಿತಿ ಸದಸ್ಯರದ್ದು. ಆದರೆ ಅವರೇ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿರುವುದು ಗಂಭೀರ ವಿಷಯವಾಗಿದ್ದು, ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಮೂಲಕ ಪಟ್ಟಣದ ಅಭಿವೃದ್ಧಿ ಹಾಗೂ ಸಾರ್ವಜನಿಕ ಜಾಗೆಯ ರಕ್ಷಣೆಗೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಸಂಘಟನಾ ಪ್ರಧಾನ ಕಾರ್ಯದರ್ಶಿ ನೀಲಕಂಠರಾಯ ಯಲ್ಹೇರಿ ಮನವಿ ಮಾಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.