ಉದ್ಯಾನ ನಗರಿಯಲ್ಲಿ 27.4 ಮಿ ಮೀ ಮಳೆ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

7

ಉದ್ಯಾನ ನಗರಿಯಲ್ಲಿ 27.4 ಮಿ ಮೀ ಮಳೆ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

Published:
Updated:

ಬೆಂಗಳೂರು: ನಗರದ ಹಲವೆಡೆ ಮಂಗಳವಾರ ಅಲಿಕಲ್ಲು ಸಹಿತ ಮಳೆಯಾಗಿದೆ. ಇದರಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಪ್ರಯಾಣಿಕರು ಪರದಾಡುವಂತಾದರೆ, ಮತ್ತೊಂದೆಡೆ ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿ ಜನ ತೀವ್ರ ತೊಂದರೆ ಅನುಭವಿಸಿದರು.ನಗರದಲ್ಲಿ 27.4 ಮಿ.ಮೀ. ಮಳೆಯಾಗಿದ್ದು, ವಿಮಾನ ನಿಲ್ದಾಣದಲ್ಲಿ 9.8 ಮಿ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ರಭಸವಾಗಿ ಸುರಿದ ಮಳೆಗೆ ನಗರದ ವಿವಿಧ ರಸ್ತೆಗಳು ಜಲಾವೃತಗೊಂಡು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಗಾಂಧಿನಗರದ ಕಾಳಿದಾಸ ರಸ್ತೆ, ಕಬ್ಬನ್ ಉದ್ಯಾನ ರಸ್ತೆ, ಶಾಂತಿನಗರ, ಬಸವೇಶ್ವರ ವೃತ್ತ, ಟ್ರಿನಿಟಿ ವೃತ್ತ, ಫ್ರೇಜರ್ ಟೌನ್, ಎಂ.ಜಿ.ರಸ್ತೆ ಸೇರಿದಂತೆ ಹಲವೆಡೆ ಮಳೆ ನೀರು ನಿಂತಿದ್ದರಿಂದ ಸಂಚಾರಕ್ಕೆ ಅಡ್ಡಿಯಾಯಿತು. ಇದರಿಂದ ಕೆಲಕಾಲ ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದರು.ಅರಮನೆ ರಸ್ತೆಯ ಮೇಲು ಸೇತುವೆಯ ಕೆಳಭಾಗದಲ್ಲಿ ನೀರು ನಿಂತ ಪರಿಣಾಮ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುವಂತಾಯಿತು. ಎಚ್.ಕೆ.ಬಿ. ಕಾಲೇಜು, ಸ್ಯಾಂಕಿ ರಸ್ತೆ ಹಾಗೂ ಓಕಳೀಪುರಂ ಆರ್.ಆರ್.ಕಲ್ಯಾಣಮಂಟಪದ ಸಮೀಪ ಮರಗಳು ಉರುಳಿದ್ದು, ಸಾರ್ವಜನಿಕರು ತೊಂದರೆ ಅನುಭವಿಸಿದರು. ಆ ನಂತರ ಪಾಲಿಕೆ ಮತ್ತು ಜಲಮಂಡಳಿಯ ಎಂಜಿನಿಯರ್‌ಗಳು ಕಾರ್ಯಾಚರಣೆ ನಡೆಸಿ ಸಂಚಾರ ಸುಗಮಗೊಳಿಸಿದರು. ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು, ಜನರು ತೀವ್ರ ತೊಂದರೆ ಅನುಭವಿಸುವಂತಾಯಿತು. ಉಳಿದಂತೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದರು.ಮೇಯರ್ ಡಿ.ವೆಂಕಟೇಶಮೂರ್ತಿ ಅವರು ಮಳೆಯ ಹಿನ್ನೆಲೆಯಲ್ಲಿ ಪಾಲಿಕೆಯ ನಿಯಂತ್ರಣ ಕೊಠಡಿಯಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕೂತು ಸ್ವತಃ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಿದರು.ಅಲ್ಲದೆ, ಮಳೆಯಿಂದ ಮರಗಳು ನೆಲಕ್ಕುರುಳಿ ತೊಂದರೆಗೊಳಗಾದ ಆರು ಕಡೆಗಳಿಗೆ ಪಾಲಿಕೆ ಸಿಬ್ಬಂದಿಯ ತಂಡವನ್ನು ಕಳಿಸಿ ಅವುಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry