ಸೋಮವಾರ, ಮೇ 23, 2022
21 °C

ಉದ್ಯೋಗ ಖಾತ್ರಿ: 500 ಕೋಟಿ ಖರ್ಚಿಗೆ ಗಡುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಾಪುರ: ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯಲ್ಲಿ ತಿಂಗಳಾಂತ್ಯಕ್ಕೆ ಕನಿಷ್ಠ 500 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಸೂಚಿಸಿದರು. ಸೋಮವಾರ ಇಲ್ಲಿ ನಡೆದ ಜಿಲ್ಲಾ ಮಟ್ಟದ ಕೆ.ಡಿ.ಪಿ. ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಿ ಮಾತನಾಡಿದರು.

 

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ತಕ್ಷಣವೇ ತಾಲ್ಲೂಕು ಮಟ್ಟದ ಕಾರ್ಯಪಡೆ ಸಭೆ ನಡೆಸಿ ಅಗತ್ಯವಿರುವೆಡೆ ಕೊಳವೆ ಬಾವಿ ಕೊರೆಸಬೇಕು ಎಂದ ಅವರು, ಇದಕ್ಕಾಗಿ ಸಲ್ಲಿಸಿರುವ 4.49 ಕೋಟಿ ರೂಪಾಯಿ ಪ್ರಸ್ತಾವನೆಗೆ ಶೀಘ್ರವೇ ಮಂಜೂರಾತಿ ದೊರಕಿಸಿಕೊಡುವುದಾಗಿ ಹೇಳಿದರು.ಕೆರೆಗಳ ಜೀರ್ಣೋದ್ಧಾರಕ್ಕೆ ಪ್ರತಿ ತಾಲ್ಲೂಕಿಗೆ 5 ಕೋಟಿಯಂತೆ ಜಿಲ್ಲೆಗೆ 40 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಕಾಲಮಿತಿಯೊಳಗೆ ಯೋಜನೆ ಅನುಷ್ಠಾನಗೊಳಿಸಬೇಕು. ಜಿಲ್ಲೆಯ ಯಾವುದೇ ಕೆರೆ ಬಿಟ್ಟುಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದರು.ಕೃಷಿ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಸ್ಥಳೀಯ ಕೃಷಿಕರು ಹಾಗೂ ಕೃಷಿ ಬಂಡವಾಳ ಹೂಡಿಕೆದಾರರಿಗೆ ಮಾಹಿತಿ ನೀಡಲು ವಿಶೇಷ ಜಾಗೃತಿ ಕಾರ್ಯಕ್ರಮ ನಡೆಸಬೇಕು. ಗ್ರಾಮೀಣ ಮಟ್ಟದಲ್ಲಿ ದಾಸ್ತಾನು ಮಳಿಗೆ ನಿರ್ಮಾಣಕ್ಕೆ ಸರ್ಕಾರ ರಿಯಾಯಿತಿ ನೀಡುತ್ತಿರುವುದನ್ನು ರೈತರಿಗೆ ತಿಳಿಸಬೇಕು. ಗಂಗಾ ಕಲ್ಯಾಣ ಕೊಳವೆ ಬಾವಿಗಳಿಗೆ ಏಪ್ರಿಲ್ ಮಾಸಾಂತ್ಯದೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.ಸಭೆಯಲ್ಲಿ ಶಾಸಕರಾದ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ವಿಠ್ಠಲ ಕಟಕಧೋಂಡ, ವಿಧಾನ ಪರಿಷತ್ ಸದಸ್ಯ ಜಿ.ಎಸ್. ನ್ಯಾಮಗೌಡ, ಜಿ.ಪಂ. ಅಧ್ಯಕ್ಷೆ  ಶಂಕ್ರುಬಾಯಿ ಚಲವಾದಿ, ಉಪಾಧ್ಯಕ್ಷ ಶ್ರೀಶೈಲಗೌಡ ಬಿರಾದಾರ, ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ, ಸಿಇಓ ಎ.ಎನ್. ಪಾಟೀಲ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.