ಭಾನುವಾರ, ಆಗಸ್ಟ್ 1, 2021
20 °C

ಉದ್ಯೋಗ ನೀಡಲು ಕಂಪೆನಿಗಳ ನಿರ್ಲಕ್ಷ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ವಿವಿಧ ಕಂಪೆನಿಗಳ ನಿರ್ಲಕ್ಷ್ಯದಿಂದ ಉತ್ತರ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕದ ವಿದ್ಯಾರ್ಥಿಗಳಿಗೆ ಉದ್ಯೋಗ ದೊರೆಯುತ್ತಿಲ್ಲ’ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಎಚ್.ಮಹೇಶಪ್ಪ ಇಲ್ಲಿ ಹೇಳಿದರು.ನಗರದ ಕಲಾಮಂದಿರದಲ್ಲಿ ರಾಮನ್ ಇಂಟರ್‌ನ್ಯಾಷನಲ್ ಇನ್ಸ್‌ಟಿಟ್ಯೂಟ್ ಆಫ್ ಇನ್ಫಾರ್ಮೇಷನ್ ಟೆಕ್ನಾಲಾಜಿ ಸಂಸ್ಥೆ ಶನಿವಾರ ಏರ್ಪಡಿಸಿದ್ದ ಪದವಿ ದಿನಾಚರಣೆಯಲ್ಲಿ ಮಾತನಾಡಿದರು.‘ಐಟಿ ಉದ್ಯೋಗ ಪಡೆದುಕೊಳ್ಳುವಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅದರಲ್ಲೂ ಉತ್ತರ ಕರ್ನಾಟಕದ ವಿದ್ಯಾರ್ಥಿಗಳು ಬಹಳಷ್ಟು ಹಿಂದೆ ಉಳಿದಿದ್ದಾರೆ. ಇದಕ್ಕೆ ರಾಜಕಾರಣಿಗಳು ಹಾಗೂ ಐಟಿ ಕಂಪೆನಿಗಳ ನಿರ್ಲಕ್ಷ್ಯವೇ ಕಾರಣ’ ಎಂದು ದೂರಿದ ಅವರು ‘ಸಂವಹನದ ಕೊರತೆ, ಭಾಷಾ ಸಮಸ್ಯೆಯನ್ನು ಹೊರತು ಪಡಿಸಿದರೆ ಉತ್ತರ ಕರ್ನಾಟಕದ ವಿದ್ಯಾರ್ಥಿಗಳು ಯಾವುದರಲ್ಲಿಯೂ ಕಡಿಮೆ ಇಲ್ಲ’ ಎಂದು ಹೇಳಿದರು.‘ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಂತರಿಕ ಕೌಶಲ್ಯ ತರಬೇತಿ ಸಿಗುತ್ತಿಲ್ಲ. ಇದರಿಂದಾಗಿ ಉದ್ಯೋಗ ಪಡೆದುಕೊಳ್ಳುವಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳವನ್ನು ಆಯೋಜಿಸುತ್ತಿದೆ’ ಎಂದರು.‘ಕಂಪೆನಿಗಳು ಉದ್ಯೋಗ ನೀಡುವಲ್ಲಿ ಬೆಂಗಳೂರಿಗೆ ಮಾತ್ರ ಸೀಮಿತವಾಗಿವೆ. ದೂರದ ಕೊಪ್ಪಳ, ರಾಯಚೂರು, ಬಳ್ಳಾರಿ ಕಡೆ ಗಮನ ಹರಿಸುತ್ತಿಲ್ಲ. ಗ್ರಾಮೀಣ ಹಾಗೂ ನಗರ ಪ್ರದೇಶದ ವಿದ್ಯಾರ್ಥಿಗಳನ್ನು ಬೇರೆಯಾಗಿ ಕಾಣಲಾಗುತ್ತಿದೆ’ ಎಂದರು.ಆರ್‌ಐಐಐಟಿ ಸಂಸ್ಥೆಯ ಡೀನ್ ವತ್ಸಲಾ ಭಟ್ ಮಾತನಾಡಿ, ‘ರಾಮನ್ ಸಂಸ್ಥೆಯು ಮಾಹಿತಿ ತಂತ್ರಜ್ಞಾನ ವಿಷಯದಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತಿ ಯೋಜನೆಯಡಿ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದೆ. ಪ್ರಸಕ್ತ ಸಾಲಿನಿಂದ ವಿಜ್ಞಾನ, ವಾಣಿಜ್ಯ, ಇತಿಹಾಸ ಮತ್ತು ಕಲಾ ಪದವೀಧರರಿಗೂ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ’ ಎಂದು ಹೇಳಿದರು.ಇದೇ ಸಂದರ್ಭದಲ್ಲಿ 2009-10 ಹಾಗೂ 2010-11ನೇ ಸಾಲಿನಲ್ಲಿ ಪದವಿ ಪಡೆದಿರುವ 487 ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಕರ್ನಾಟಕ ಉದ್ಯೋಗ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ವಿಷ್ಣುಕಾಂತ ಎಸ್.ಚಟಪಳ್ಳಿ, ಆರ್‌ಐಐಐಟಿ ವ್ಯವಸ್ಥಾಪಕ ನಿರ್ದೇಶಕ ಎಸ್.ವಿ.ವೆಂಕಟೇಶ್, ಪ್ರಾಧ್ಯಾಪಕಿ ಊರ್ಮಿಳಾ ವೆಂಕಟೇಶ್ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.